ಪ್ರಾಣಿ ಹಿಂಸೆ ತಡೆಯುವ ಕಾನೂನುಗಳನ್ನು ಬಿಗಿಗೊಳಿಸಲು ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಪ್ರಾಣಿ ಕಲ್ಯಾಣ ಮಂಡಳಿ ಸ್ಥಾಪಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶದಂತೆ ಮಂಡಳಿ ಸ್ಥಾಪನೆಯಾಗಿದೆ. ಪಶು ಪಕ್ಷಿಗಳ ಸಂರಕ್ಷಣೆ, ಮತ್ತು ಅವುಗಳ ಕಲ್ಯಾಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಆದೇಶದಂತೆ ಕರ್ನಾಟಕ ಪ್ರಾಣಿ ಕಲ್ಯಾಣ ಮಂಡಳಿಯನ್ನು ಸ್ಥಾಪನೆ ಮಾಡಲಾಗಿದೆ.. ಪ್ರಾಣಿಗಳಿಗಾಗಿ ಶೆಡ್ಗಳು, ನೀರಿನ ತೊಟ್ಟಿಗಳ ನಿರ್ಮಾಣಕ್ಕೆ ಪ್ರೋತ್ಸಾಹ, ಪ್ರಾಣಿಗಳ ರಕ್ಷಣೆ ಕುರಿತು ಜನರಲ್ಲಿ ಅರಿವು ಮೂಡಿಸುವುದು, ಪ್ರಾಣಿಗಳ ಸಾಗಣೆ ಸಂದರ್ಭದಲ್ಲಿ ಅನವಶ್ಯಕವಾಗಿ ನೋವು, ಯಾತನೆ ತಡೆಗಟ್ಟಲು ಮಂಡಳಿ ಕ್ರಮ ಕೈಗೊಳ್ಳಲಿದೆ ಎಂದಿದ್ದಾರೆ.
ಎಲ್ಲಾ ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ 4214 ಪಶು ವೈದ್ಯಕೀಯ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಈ ಮಂಡಳಿಯು ಪ್ರಾಣಿ ಕಲ್ಯಾಣಕ್ಕೆ ಸಂಬಂಧಿಸಿದ ವಿಷಯಗಳಿಗೆ ಸಂದರ್ಭಾನುಸಾರ ಎದುರಾಗುವ ಸಮಸ್ಯೆಗಳ ಬಗ್ಗೆ ಹಾಗೂ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಕಾಲಕಾಲಕ್ಕೆ ಸರ್ಕಾರಕ್ಕೆ ಸಲಹೆ ನೀಡಲಿದೆ ಎಂದಿದ್ದಾರೆ.
ರಾಜ್ಯದಲ್ಲಿ 85.22 ಲಕ್ಷ ಗೋವು, 29.98 ಎಮ್ಮೆ, 110.91 ಲಕ್ಷ ಕುರಿ, 61.96 ಲಕ್ಷ ಮೇಕೆ, 3.26 ಲಕ್ಷ ಹಂದಿ, 617 ಲಕ್ಷ ಕೋಳಿಗಳಿವೆ. ಈ ಎಲ್ಲಾ ಜಾನುವಾರುಗಳ ಆರೋಗ್ಯ ರಕ್ಷಣೆದಗಾಗಿ 4214 ಪಶುವೈದ್ಯಕೀಯ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಜಿಲ್ಲಾ ಪ್ರಾಣಿ ದಯಾ ಸಂಘಗಳ ಅಧ್ಯಕ್ಷರಾಗಿದ್ದು, ಪಶುಸಂಗೋಪನೆ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರು ಸದಸ್ಯ ಕಾರ್ಯದರ್ಶಿಯಾಗಿರುತ್ತಾರೆ ಎಂದಿದ್ದಾರೆ.