News

ಕಲ್ಯಾಣ ಕರ್ನಾಟಕ ಭಾಗಕ್ಕೆ 10 ಸಾವಿರ ಶಿಕ್ಷಕರ ನೇಮಕಕ್ಕೆ ಪ್ರಸ್ತಾವನೆ-ಸುರೇಶ ಕುಮಾರ

18 February, 2021 7:53 PM IST By:
teacher

ಶಿಕ್ಷಕರಾಗಲು ಪ್ರಯತ್ನ ನಡೆಸಿರುವ ಶಿಕ್ಷಕ ಅಭ್ಯರ್ಥಿಗಳಿಗೆ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಸಿಹಿಸುದ್ದಿ ಕೊಟ್ಟಿದ್ದಾರೆ. ಹೌದು, ಗುರುವಾರ ಮುಖ್ಯಮಂತ್ರಿಯವರೊಂದಿಗೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ  10 ಸಾವಿರ ಶಿಕ್ಷಕರ ನೇಮಕಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.

ಪೂರ್ವಭಾವಿ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಮಾತನಾಡಿ, ನಂಜುಂಡಪ್ಪ ವರದಿಯಂತೆ ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ವಿಶೇಷ ಶೈಕ್ಷಣಿಕ ವಲಯಗಳನ್ನು ಸ್ಥಾಪಿಸಿ ಅಭಿವೃದ್ಧಿಗೊಳಿಸಲು ಮತ್ತು ಆ ಭಾಗದ ಶಾಲೆಗಳಿಗೆ 10 ಸಾವಿರ ಶಿಕ್ಷಕರ ನೇಮಕಕ್ಕೆ 2021-22ನೇ ಸಾಲಿನ ಬಜೆಟ್‍ನಲ್ಲಿ ಅವಕಾಶ ಕಲ್ಪಿಸಬೇಕೆಂದು ಮುಖ್ಯಮಂತ್ರಿಯವರನ್ನು ಕೋರಲಾಗಿದೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿಯ ಅಳವಡಿಕೆ ನಿಟ್ಟಿನಲ್ಲಿ ನೀತಿ ನಿರೂಪಣೆಗೆ ಶಿಕ್ಷಣ ಆಯೋಗ ಸ್ಥಾಪನೆಗೆ ಮನವಿ ಮಾಡಲಾಗಿದೆ. 50 ವರ್ಷ ಹಳೆಯದಾದ 14613 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡಗಳ ಹಾಗೂ 634 ಸರ್ಕಾರಿ ಪ್ರೌಢಶಾಲೆಗಳ ಕಟ್ಟಡ ನಿರ್ವಹಣೆಗೆ ಅನುದಾನ ಬಿಡುಗಡೆಗೆ ಮನವಿ ಮಾಡಲಾಗಿದೆ. ಸ್ಥಳೀಯ ಸಂಸ್ಥೆಗಳ ಮೂಲಕ ಶಾಲೆಗಳ ಅಭಿವೃದ್ಧಿಗೆ ಕ್ರಮ ವಹಿಸಿ ಪ್ರತಿ ಸ್ಥಳೀಯ ಸಂಸ್ಥೆಗೆ ಎರಡು ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಸೌಲಭ್ಯ ಒದಗಿಸಿ ಮಾದರಿ ಶಾಲೆಗಳನ್ನಾಗಿ ಮಾರ್ಪಡಿಸಲು ಯೋಜನೆ ರೂಪಿಸಲಾಗಿದೆ.

ಪಂಚಾಯತ್/ವಾರ್ಡ್ ಪಬ್ಲಿಕ್ ಶಾಲೆಗಳ ಸ್ಥಾಪನೆಗೆ ಕ್ರಮ ವಹಿಸುವುದು, ರಾಜ್ಯ ಸಾಕ್ಷರತಾ ಅಭಿಯಾನ ಕಾರ್ಯಕ್ರಮದ ಮೂಲಕ 30 ಸಾವಿರ ಅನಕ್ಷರಸ್ಥರಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿ ಸಾಕ್ಷರತಾ ಕಾರ್ಯಕ್ರಮ ರೂಪಿಸುವ ಪ್ರಸ್ತಾವನೆ ಸಲ್ಲಿಸಲಾಗಿದೆ. ಶಾಖಾ ಗ್ರಂಥಾಲಯಗಳು, ಮಕ್ಕಳ ಗ್ರಂಥಾಲಯಗಳ ಡಿಜಿಟಲೀಕರಣ ಮತ್ತು ಗ್ರಂಥಾಲಯ ತರಬೇತಿ ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾಪವನ್ನು ಹೊಂದಲಾಗಿದೆ ಎಂದರು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಗೆ ಹಂಚಿಕೆಯಾದ ಅನುದಾನದಲ್ಲಿ ಶೇ. 79 ರಷ್ಟು ಅನುದಾನ ಅಧಿಕಾರಿ/ಸಿಬ್ಬಂದಿ ವೇತನ ವೆಚ್ಚಗಳಿಗೆ ವಿನಿಯೋಗವಾದರೆ, ಉಳಿದ ಶೇ. 21 ಅನುದಾನವನ್ನು ಇತರೆ ಶೈಕ್ಷಣಿಕ ಚಟುವಟಿಕೆಗಳು, ಮೂಲಸೌಲಭ್ಯಗಳು ಹಾಗೂ ಶಿಕ್ಷಣದ ಗುಣಮಟ್ಟ ಸುಧಾರಣೆ ಕಾರ್ಯಕ್ರಮಗಳಿಗೆ ವೆಚ್ಚವಾಗುತ್ತದೆ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದ್ದು, ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರವು ಹೆಚ್ಚು ಆದ್ಯತೆ ನೀಡಬೇಕೆಂದು ಮನವಿ ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ.