News

ಸೆಪ್ಟೆಂಬರ್ 6 ರಿಂದ ಆರರಿಂದ ಎಂಟನೇ ತರಗತಿ ಆರಂಭಕ್ಕೆ ಸರ್ಕಾರ ಒಪ್ಪಿಗೆ

30 August, 2021 9:46 PM IST By:

ರಾಜ್ಯದಲ್ಲಿ ಕೋವಿಡ್​ ಪಾಸಿಟಿವಿಟಿ ದರ ಶೇ. 2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ 6,7,8ನೇ ತರಗತಿಗಳನ್ನು ಸೆಪ್ಟೆಂಬರ್ 6ರಿಂದ ಆರಂಭಿಸಲು ಸರ್ಕಾರ ಹಸಿರು ನಿಶಾನೆ ತೋರಿದೆ. ಇತ್ತೀಚೆಗೆ 9 ರಿಂದ 12ನೇ ತರಗತಿ ಆರಂಭಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ಈ ಮಹತ್ವ ನಿರ್ಧಾರ ಕೈಗೊಳ್ಳಲಾಯಿತು.

ಇನ್ನೂ ಕಳೆದ ವಾರ 9, 10 ಹಾಗೂ ಪಿಯು ತರಗತಿಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿತ್ತು. ಇದೀಗ 6 ರಿಂದ 8ನೇ ತರಗತಿಗಳನ್ನು ಪ್ರಾರಂಭಿಸಲು ಅನುಮತಿ ನೀಡಲಾಗಿದೆ. ಒಂದರಿಂದ ಐದನೇ ತರಗತಿಗಳನ್ನು ಇನ್ನೂ ಒಂದು ತಿಂಗಳ ಕಾಲ ಆರಂಭಿಸದಿರಲು ನಿರ್ಧರಿಸಲಾಗಿದೆ ಎಂದು ಸಭೆಯ ಬಳಿಕ ಕಂದಾಯ ಸಚಿವ ಆರ್ . ಅಶೋಕ್ ಸುದ್ದಿಗಾರರಿಗೆ ತಿಳಿಸಿದರು.

ಒಂಬತ್ತನೇ ತರಗತಿಯಿಂದ ದ್ವಿತೀಯ ಪಿಯುಸಿಯವರೆಗಿನ ಭೌತಿಕ ತರಗತಿಗಳಿಗೆ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಖಾಸಗಿ ಶಾಲಾ, ಕಾಲೇಜುಗಳಲ್ಲಿ ಹಾಜರಾತಿ ಕಡಿಮೆಯಿದೆ. ತರಗತಿಗಳಿಗೆ ಹಾಜರಾದ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿರುವ ಪ್ರಕರಣಗಳ ಸಂಖ್ಯೆಯೂ ತೀರ ಕಡಿಮೆ ಇದೆ ತಿಳಿಸಿದರು..
ಪಾಸಿಟಿವಿಟಿ ದರವು ಶೇ. 2ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಶೇ. 50ರಷ್ಟು ಹಾಜರಾತಿಯೊಂದಿಗೆ, ವಾರದಲ್ಲಿ ಒಂದು ದಿನ ಬಿಟ್ಟು ಒಂದು ದಿನ ತರಗತಿ ನಡೆಸಲು ನಿರ್ಧರಿಸಲಾಗಿದೆ. ವಾರದಲ್ಲಿ 5 ದಿನ ಮಾತ್ರ, ಸೋಮವಾರದಿಂದ ಶುಕ್ರವಾರದವರೆಗೆ ತರಗತಿಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.

2912 ಗ್ರಾಮ ಪಂಚಾಯತಿಗಳ ವ್ಯಾಪ್ತಿಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಶೂನ್ಯಕ್ಕೆ ಕುಸಿದಿದೆ. 6472 ವಿದ್ಯಾರ್ಥಿಗಳ ಗಂಟಲು ಮತ್ತು ಮೂಗಿನ ದ್ರವದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. 14 ವಿದ್ಯಾರ್ಥಿಗಳಲ್ಲಿ ಮಾತ್ರ ಕೋವಿಡ್ ದೃಢಪಟ್ಟಿದೆ ಎಂದು ತಿಳಿಸಿದರು.
5ರಂದು ನಿರ್ಧಾರ: ಸಾರ್ವಜನಿಕ ಗಣೇಶೋತ್ಸವಕ್ಕೆ ಅನುಮತಿ ನೀಡಬೇಕೆಂಬ ಬೇಡಿಕೆ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಈ ಕುರಿತು ಸೆಪ್ಟೆಂಬರ್‌ 5ರಂದು ಮತ್ತೊಮ್ಮೆ ಉನ್ನತಮಟ್ಟದ ಸಭೆ ನಡೆಸಿ, ಅಂತಿಮ ತೀರ್ಮಾನಕ್ಕೆ ಬರಲು ನಿರ್ಧರಿಸಲಾಯಿತು. ‘ಗಣೇಶೋತ್ಸವ ಆಚರಣೆ ಭಾವನಾತ್ಮಕ ವಿಚಾರ. ಈ ಕಾರಣದಿಂದ ಬೃಹತ್‌ ಪ್ರಮಾಣದ ಸಾರ್ವಜನಿಕ ಗಣೇಶೋತ್ಸವ ಆಚರಿಸುವ ಸಂಘ, ಸಂಸ್ಥೆಗಳ ಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಗಳು ಮತ್ತು ಎಸ್‌ಪಿಗಳಿಗೆ ಸೂಚಿಸಲಾಗಿದೆ. ವರದಿ ಪಡೆದ ಬಳಿಕ, ಕೋವಿಟಡ್‌ ಪರಿಸ್ಥಿತಿಯನ್ನು ಆಧರಿಸಿ ಮತ್ತೊಮ್ಮೆ ಚರ್ಚೆ ನಡೆಸಲಾಗುವುದು ಎಂದರು.

ಗಣೇಶೋತ್ಸವದ ವಿಚಾರದಲ್ಲಿ ಒಳ್ಳೆಯದಾಗುತ್ತದೆ ಎಂಬ ವಿಶ್ವಾಸವಿದೆ. ಆದರೆ, ನೆರೆಯ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿವೆ. ಜನರ ಆರೋಗ್ಯ ಮತ್ತು ಪ್ರಾಣ ಕೂಡ ಮುಖ್ಯ. ಎಲ್ಲವನ್ನೂ ಗಂಭೀರವಾಗಿ ಪರಿಗಣಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.

ಕಲ್ಯಾಣ ಮಂಡಲಗಳಲ್ಲಿ ಮದುವೆ ಹಾಗೂ ಇತರ ಸಮಾರಂಭ ನಡೆಸಲು ಅನುಮತಿ ನೀಡಲಾಗಿದೆ. ಗರಿಷ್ಠ 400 ಜನರ ಮಿತಿಗೆ ಒಳಪಟ್ಟು, ಶೇಕಡ 50ರಷ್ಟು ಜನರಿಗೆ ಅವಕಾಶ ಕಲ್ಪಿಸಿ ಸಭೆ, ಸಮಾರಂಭಗಳನ್ನು ನಡೆಸಲು ಒಪ್ಪಿಗೆ ನೀಡಲಾಗುವುದು ಎಂದು ಪ್ರಕಟಿಸಿದರು. ಕೋವಿಡ್‌ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿರುವ ಕೊಡಗು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಮಾತ್ರ ವಾರಾಂತ್ಯದ ಕರ್ಫ್ಯೂ ಮುಂದುವರಿಯಲಿದೆ. ಉಳಿದ ಜಿಲ್ಲೆಗಳಲ್ಲಿ ಈ ನಿರ್ಬಂಧ ಸಡಿಲಿಸಲಾಗುವುದು ಎಂದು ತಿಳಿಸಿದರು.