1. ಶಾಲೆಗಳ ಸಮಯ ಬದಲಾವಣೆಗೆ ಇಂದು ಸಭೆ!
2.50 ಲಕ್ಷಕ್ಕೂ ಹೆಚ್ಚು ಬೀದಿಬದಿ ವ್ಯಾಪಾರಿಗಳಿಗೆ ಪಿಎಂ ಸ್ವನಿಧಿ ಲಾಭ
3. ಎಲ್‌ಪಿಜಿ ಸಿಲಿಂಡರ್ ಖರೀದಿಗೆ ಸಿಗಲಿದೆ 300 ರೂ. ಸಬ್ಸಿಡಿ!
4. ಬರ ಪರಿಸ್ಥಿತಿ ಅಧ್ಯಯನಕ್ಕೆ ಕೇಂದ್ರದಿಂದ ತಂಡ
5. ಬೆಂಗಳೂರು ಕೃಷಿ ವಿ.ವಿಯ 58ನೇ ಸಂಸ್ಥಾಪನಾ ದಿನಾಚರಣೆ ಇಂದು
ಸುದ್ದಿಗಳ ವಿವರ ಈ ರೀತಿ ಇದೆ.
1. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ವಿಪರೀತವಾದ ಸಂಚಾರ ದಟ್ಟಣೆಯಾಗುತ್ತಿದ್ದು, ಇದನ್ನು ತಪ್ಪಿಸಲು ಸರ್ಕಾರ ನಿರ್ಧರಿಸಿದೆ.
ಇದರ ಭಾಗವಾಗಿ ಶಾಲೆಗಳ ಸಮಯವನ್ನು ಬದಲಾಯಿಸುವ ಬಗ್ಗೆ ನಿರ್ಧರಿಸಲು ಗುರುವಾರ ಸಭೆ ಕರೆಯಲಾಗಿದೆ.
ಶಾಲೆಗಳ ಸಮಯ ಬದಲಾವಣೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆಯು ಸಭೆ ಕರೆದಿದೆ.
ಸಭೆಯಲ್ಲಿ ಖಾಸಗಿ ಶಾಲಾ ಆಡಳಿತ ಮಂಡಳಿಗಳು, ಪೋಷಕರ ಒಕ್ಕೂಟ, ಪೊಲೀಸ್ ಅಧಿಕಾರಿಗಳು, ಸಾರಿಗೆ ಇಲಾಖೆಯ ಅಧಿಕಾರಿಗಳು
ಹಾಗೂ ಖಾಸಗಿ ಶಾಲಾ ವಾಹನ ಮಾಲೀಕರ ಸಂಘಟನೆಯ ಸದಸ್ಯರೂ ಭಾಗವಹಿಸಲಿದ್ದಾರೆ. ಈ ಸಭೆಯಲ್ಲಿ ಶಾಲೆಗಳ ಸಮಯವನ್ನು
ಬದಲಾಯಿಸುವ ಬಗ್ಗೆ ಚರ್ಚೆ ಮಾಡಿ ಅಭಿಪ್ರಾಯ ಸಂಗ್ರಹಿಸಲಾಗುತ್ತದೆ.
ಸಭೆಯಲ್ಲಿ ಚರ್ಚೆಯಾಗುವ ವಿಷಯಗಳ ಸಾಧಕ- ಬಾಧಕಗಳ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲಾಗುತ್ತದೆ.
-----------------------
2. ಬೀದಿಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ರಸ್ತೆ ವ್ಯಾಪಾರಿಗಳ ಆತ್ಮನಿರ್ಭರ
ನಿಧಿ - ಪಿಎಂ ಸ್ವನಿಧಿ ಯೋಜನೆಯ ಮೂಲಕ ದೇಶದಲ್ಲಿ 50 ಲಕ್ಷಕ್ಕೂ ಹೆಚ್ಚು ಬೀದಿಬದಿ ವ್ಯಾಪಾರಿಗಳಿಗೆ ಸಹಾಯ ಮಾಡಿದೆ.
ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಮೂಲಕ ಈ ಯೋಜನೆಯನ್ನು ಪರಿಚಯಿಸಲಾಗಿತ್ತು.
-----------------------
3. ಕೇಂದ್ರ ಸರ್ಕಾರವು ಗ್ಯಾಸ್ ಸಿಲಿಂಡರ್‌ಗೆ ಸಂಬಂಧಿಸಿದಂತೆ ಗ್ರಾಹಕರಿಗೆ ಸಿಹಿಸುದ್ದಿಯೊಂದನ್ನು ನೀಡಿದೆ.
ಎಲ್‌ಪಿಜಿ ಸಿಲಿಂಡರ್‌ಗೆ ನೀಡುತ್ತಿದ್ದ ಸಬ್ಸಿಡಿ ದರವನ್ನು ಹೆಚ್ಚಿಸಲಾಗಿದೆ.
ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಪ್ರತಿ ಎಲ್‌ಪಿಜಿ ಸಿಲಿಂಡರ್‌ಗೆ ಈಗ
ನೀಡುತ್ತಿರುವ 200 ರೂಪಾಯಿ ಸಬ್ಸಿಡಿಯನ್ನು 300 ರೂಪಾಯಿಗೆ ಹೆಚ್ಚಿಸಲಾಗಿದೆ.
ಕೇಂದ್ರ ಸಂಪುಟ ಸಭೆ ಬುಧವಾರ ಈ ನಿರ್ಧಾರವನ್ನು ತೆಗೆದುಕೊಂಡಿರುವುದಾಗಿ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಸಿಂಗ್ ಠಾಕೂರ್ ತಿಳಿಸಿದ್ದಾರೆ.
ಯೋಜನೆಯಡಿ ಪ್ರಸ್ತುತ ಪ್ರತಿ ಸಿಲಿಂಡರ್‌ಗೆ 200 ರೂಪಾಯಿ ಸಹಾಯಧನ ನೀಡಲಾಗುತ್ತಿದೆ.
ಇದನ್ನು 300 ರೂಪಾಯಿಗೆ ಹೆಚ್ಚಿಸಲು ಸಂಪುಟ ಅನುಮೋದಿಸಿದೆ.
-----------------------
4. ಕರ್ನಾಟಕದ ಬರ ಪರಿಸ್ಥಿತಿಯನ್ನು ಅಧ್ಯಯನ ಮಾಡುವುದಕ್ಕೆ ಕೇಂದ್ರದಿಂದ ತಂಡ ಇಂದು ಬರಲಿದೆ.
ಗುರುವಾರದಿಂದ 4 ದಿನಗಳ ಕಾಲ ವಿವಿಧ ಜಿಲ್ಲಾ ಪ್ರವಾಸ ಕೈಗೊಂಡು ಪರಿಶೀಲನೆ ನಡೆಸಲಿವೆ.
10 ಸದಸ್ಯರನ್ನೊಳಗೊಂಡ ತಂಡ ರಾಜ್ಯದ ಸ್ಥಳೀಯ ಅಧಿಕಾರಿಗಳೊಂದಿಗೆ ಕೃಷಿ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಿವೆ.
ಈ ತಂಡಗಳ ಸದಸ್ಯರು ಗುರುವಾರ ರಾಜ್ಯ ಪ್ರಕೃತಿ ವಿಕೋಪ ನಿರ್ವಹಣಾ ಕೇಂದ್ರಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ.
-----------------------
5. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ 58ನೇ ಸಂಸ್ಥಾಪನಾ ದಿನಾಚರಣೆ ಗುರುವಾರ ಹೆಬ್ಬಾಳದ ಜಿಕೆವಿಕೆಯಲ್ಲಿರುವ
ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಮಾವೇಶ ಸಭಾಂಗಣದಲ್ಲಿ ನಡೆಯಲಿದ್ದು, ಕೃಷಿ ಸಚಿವ ಎನ್. ಚೆಲುವರಾಯಸ್ವಾಮಿ ಉದ್ಘಾಟಿಸಲಿದ್ದಾರೆ.
ಈ ವೇಳೆ ವಿವಿಧ ಪ್ರಶಸ್ತಿಗಳ ಪ್ರದಾನ ನಡೆಯಲಿದೆ ಎಂದು ವಿಶ್ವವಿದ್ಯಾಲಯ ಕುಲಪತಿ ಡಾ. ಎಸ್. ವಿ. ಸುರೇಶ್ ತಿಳಿಸಿದ್ದಾರೆ.