ರಾಜ್ಯಸಭಾ ಚುನಾವಣೆಗೆ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನ ಸಭೆ ಕಾರ್ಯದರ್ಶಿ ಹಾಗೂ ರಾಜ್ಯಸಭಾ ಚುನಾವಣಾಧಿಕಾರಿ ಎಂ.ಕೆ.ವಿಶಾಲಾಕ್ಷಿ ಹೇಳಿದ್ದಾರೆ.
ಜೆಡಿಎಸ್ ನಿಂದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ, ಬಿಜೆಪಿಯ ಅಶೋಕ್ ಗಸ್ತಿ, ಈರಣ್ಣ ಕಡಾಡಿ ಅವಿರೋಧ ಆಯ್ಕೆಯಾಗಿದ್ದಾರೆ.
ನಾಮಪತ್ರ ಹಿಂದಕ್ಕೆ ಪಡೆಯಲು ಶುಕ್ರವಾರ ಕೊನೆಯ ದಿನವಾಗಿತ್ತು. ಬೇರೆ ಯಾರೂ ಕಣದಲ್ಲಿರದ ಕಾರಣ ನಾಲ್ವರೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಪಕ್ಷೇತರರೊಬ್ಬರು ಅರ್ಜಿ ಸಲ್ಲಿಸಿದ್ದರು. ಅದಕ್ಕೆ ಯಾವುದೇ ಶಾಸಕರು ಸೂಚಕರಾಗಿಲ್ಲದ ಕಾರಣ ತಿರಸ್ಕರಿಸಲಾಗಿದೆ.
2019ರ ಲೋಕಸಭಾ ಚುನಾವಣೆಯಲ್ಲಿ ಎಚ್. ಡಿ ದೇವೇಗೌಡ ಅವರು ಹಾಸನ ಕ್ಷೇತ್ರವನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅವರಿಗೆ ಬಿಟ್ಟು ತುಮಕೂರಿನಿಂದ ಸ್ಪರ್ಧಿಸಿದ್ದರು. ಆದರೆ, ಅಲ್ಲಿ ಬಿಜೆಪಿ ಅಭ್ಯರ್ಥಿ ಜಿ.ಎಸ್. ಬಸವರಾಜ್ ಅವರ ವಿರುದ್ಧ ಸೋಲು ಕಂಡಿದ್ದರು. ಮಲ್ಲಿಕಾರ್ಜುನ ಖರ್ಗೆ ಅವರು ಕಲಬುರಗಿಯಲ್ಲಿ ಡಾ.ಉಮೇಶ್ ಜಾಧವ್ ಅವರ ವಿರುದ್ಧ ಸ್ಪರ್ಧಿಸಿ ಸೋತಿದ್ದರು.
ಸೋಲಿಲ್ಲದ ಸರ್ದಾರನೆಂದೇ ಹೆಸರುಪಡೆದಿದ್ದ ಮಲ್ಲಿಕಾರ್ಜುನ ಖರ್ಗೆಯವರು ಉಮೇಶ ಜಾಧವ ವಿರುದ್ಧ ಸೋತಿದ್ದರು. ಇದೀಗ ರಾಜ್ಯಸಭಾ ಚುನಾವಣೆ ಮೂಲಕ ಈ ಇಬ್ಬರು ನಾಯಕರು ಸಂಸತ್ ಪ್ರವೇಶಿಸಿದ್ದಾರೆ