News

ತೋಟಗಾರಿಕಾ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಲು ಶೇ. 90 ರಷ್ಟು ಸಹಾಯಧನ- ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯಿರಿ

27 November, 2020 4:26 PM IST By:

ಬೆಂಗಳೂರು ತೋಟಗಾರಿಕೆ ಇಲಾಖೆ ವತಿಯಿಂದ 2020-21ನೇ ಸಾಲಿನಲ್ಲಿ ಹನಿ ನೀರಾವರಿ ಯೋಜನೆ ಜಿಲ್ಲೆಯಲ್ಲಿ ಅನುಷ್ಟಾನಗೊಳಿಸಲಾಗುತ್ತಿದ್ದು ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲೂಕುಗಳಲ್ಲಿ ಈ ಯೋಜನೆಯನ್ನು ಇಲಾಖೆ ಅನುಷ್ಠಾನಗೊಳಿಸುತ್ತಿದೆ. ಆಸಕ್ತ ರೈತರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು.

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸುವ ರೈತರಿಗೆ ಆಯಾ ಬೆಳೆ ಮತ್ತು ಬೆಳೆಗಳ ಅಂತರಕ್ಕೆ ಅನುಗುಣವಾಗಿ ಮಾರ್ಗಸೂಚಿ ಅನ್ವಯ ಪರಿಶಿಷ್ಟ ಜಾತಿ, ಪಂಗಡ, ಸಾಮಾನ್ಯ ರೈತರಿಗೆ ಪ್ರಥಮ 2 ಹೆಕ್ಟೇರ್‌ಗೆ ನಿಗದಿಪಡಿಸಿರುವ ವೆಚ್ಚದ ಶೇ90ರಷ್ಟು ಸಹಾಯಧನ ಹಾಗೂ ನಂತರ ಮೂರು ಹೆಕ್ಟೇರ್‌ಗೆ ಶೇ45ರಷ್ಟು ಸಹಾಯಧನ ನೀಡಲಾಗುವುದು. ಈ ಯೋಜನೆಯಡಿ ಸೌಲಭ್ಯ ಪ್ರತಿ ಫಲಾನುಭವಿ ಕುಟುಂಬಕ್ಕೆ 5 ಹೆಕ್ಟೇರ್ ಪ್ರದೇಶದವರೆಗೆ ಮಿತಿಗೊಳಿಸಲಾಗಿದೆ.

ತೋಟಗಾರಿಕೆಯಲ್ಲಿ ಕೃಷಿ ಮಾಡುತ್ತಿರುವ ಹಾಗೂ ನೀರಾವರಿ ಮೂಲ ಹೊಂದಿರುವ ರೈತರು ತಮ್ಮ ಜಮೀನಿಗೆ ಹನಿ ನೀರಾವರಿ ಅಳವಡಿಸಿಕೊಳ್ಳಲು ಆಸಕ್ತರಾಗಿದ್ದಲ್ಲಿ ತಮ್ಮ ಜಮೀನು ವ್ಯಾಪ್ತಿಯ ಹೋಬಳಿ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕು ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಿ ಹನಿ ನೀರಾವರಿ ಅಳವಡಿಸಲು ನಿಗದಿತ ಅರ್ಜಿ ಪಡೆದು ಅರ್ಜಿ ಸಲ್ಲಿಸಬಹುದಾಗಿದೆ. ಜಿಲ್ಲಾ ತೋಟಗಾರಿಕೆ ಇಲಾಖೆ ಉಪನಿರ್ದೇಶಕರು(ಜಿ.ಪಂ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ದೊಡ್ಡಬಳ್ಳಾಪುರ, ದೇವನಹಳ್ಳಿ ಹೊಸಕೋಟೆ, ನೆಲಮಂಗಲ ತಾಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಬಹುದು ಎಂದು ಕೋರಲಾಗಿದೆ.