ಕಲಬುರಗಿ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 9 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 55 ಜನ ಅಂಗನವಾಡಿ ಕಾರ್ಯಕರ್ತೆಯರ ಹಾಗೂ 276 ಜನ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ಆಯ್ಕೆ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ವಯೋಮಿತಿ 18 ರಿಂದ 35 ವರ್ಷದೊಳಗಿನ ಅರ್ಹ ಸ್ಥಳೀಯ (ಅದೇ ಗ್ರಾಮದ) ಮಹಿಳಾ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು. ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಎಸ್.ಎಸ್.ಎಲ್.ಸಿ. ತೇರ್ಗಡೆಯಾಗಿರಬೇಕು. ಅಂಗನವಾಡಿ ಸಹಾಯಕಿಯರ ಹುದ್ದೆಗೆ ಕನಿಷ್ಠ 4ನೇ ತರಗತಿ ಹಾಗೂ ಗರಿಷ್ಠ 9ನೇ ತರಗತಿ ತೇರ್ಗಡೆಯಾಗಿರಬೇಕು.
2021ರ ಜುಲೈ 1 ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೇ ಪ್ರಾರಂಭವಾಗಲಿದ್ದು, ಅಭ್ಯರ್ಥಿಗಳು www.anganwadirecruit.kar.nic.in ವೆಬ್‌ಸೈಟ್‌ದಲ್ಲಿ ಎಲ್ಲಾ ಅವಶ್ಯಕ ದಾಖಲಾತಿಗಳೊಂದಿಗೆ ಆನ್‌ಲೈನ್ ಮೂಲಕ 2021ರ ಜುಲೈ 31 ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು.
ಅಫಜಲಪುರ, ಅಳಂದ, ಚಿಂಚೋಳಿ, ಚಿತ್ತಾಪುರ, ಕಲಬುರಗಿ (ಗ್ರಾಮೀಣ), ಕಲಬುರಗಿ (ನಗರ), ಜೇವರ್ಗಿ, ಸೇಡಂ ಹಾಗೂ ಶಹಾಬಾದ ಈ 9 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಮೇಲ್ಕಂಡ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಗೌರವ ಸೇವೆ ಹುದ್ದೆಗಳ ಆಯ್ಕೆಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಆಯ್ಕೆಯ ಮಾನದಂಡ, ಮೀಸಲಾತಿ ವಿವರ, ಅರ್ಜಿಯೊಂದಿಗೆ ಲಗತ್ತಿಸಬೇಕಾದ (ಆನ್‌ಲೈನ್ ಅಪಲೋಡ್ ಮಾಡಬೇಕಾದ) ದಾಖಲಾತಿಗಳು ವಿವರ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಆಯಾ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯನ್ನು ಕಚೇರಿ ಸಮಯದಲ್ಲಿ ಸಂಪರ್ಕಿಸಲು ಕೋರಲಾಗಿದೆ.