ರೈತರಿಗೆ ಪ್ರಮುಖ ಸುದ್ದಿಗಳನ್ನು ತಲುಪಿಸುವ ಉದ್ದೇಶದಿಂದ ಕೃಷಿ ಜಾಗರಣ ಕನ್ನಡ ಅಗ್ರಿನ್ಯೂಸ್ ಪರಿಚಯಿಸಿದೆ. ಇಂದಿನ ಪ್ರಮುಖ ಸುದ್ದಿಗಳು ಈ ರೀತಿ ಇವೆ.
1.ಗೃಹಲಕ್ಷ್ಮಿ ಯೋಜನೆ ಕುರಿತು ರಾಜ್ಯ ಸರ್ಕಾರದಿಂದ ಸ್ಪಷ್ಟನೆ!
2. ಗೌರಿ- ಗಣೇಶ ಹಬ್ಬ; 63 ಏಕಗವಾಕ್ಷಿ ಕೇಂದ್ರ ಪ್ರಾರಂಭ
3. ಬೆಂಗಳೂರು ಕೃಷಿ ವಿ.ವಿಯಿಂದ ರೈತರಿಗೆ ಸಿಹಿಸುದ್ದಿ!
4. ಕಾವೇರಿ ನೀರು ಹಂಚಿಕೆ: ಕೇಂದ್ರಕ್ಕೆ ಸರ್ವಪಕ್ಷ ನಿಯೋಗ
5. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಎರಡು ದಿನ ಮಳೆ
6. ದೇಶದ ಬಹುತೇಕ ಭಾಗದಲ್ಲಿ ಬರಗಾಲ: ಪ್ರಹ್ಲಾದ ಜೋಶಿ
ಸುದ್ದಿಗಳ ವಿವರ ಈ ರೀತಿ ಇದೆ.
1. ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಸರ್ಕಾರವು ಮಹತ್ವದ ಸ್ಪಷ್ಟನೆಯನ್ನು ನೀಡಿದೆ.
ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳ ನೋಂದಣಿಯನ್ನು ಸ್ಥಗಿತಗೊಳಿಸಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.
--------------------
2. ಗೌರಿ-ಗಣೇಶ ಹಬ್ಬ ಆಚರಣೆಗೆ ಅನುಮತಿ ಪಡೆಯಲು ಬೆಂಗಳೂರಿನಲ್ಲಿ 63 ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗಿದೆ.
ಈ ಕೇಂದ್ರಗಳ ಮೂಲಕ 48 ಗಂಟೆಯೊಳಗೆ ಅನುಮತಿ ಪತ್ರ ಸಿಗಲಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.
ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ ಏಕಗವಾಕ್ಷಿ ಕೇಂದ್ರಗಳನ್ನು ತೆರೆಯಲಾಗುತ್ತಿದೆ.
ಒಂದೇ ಸೂರಿನಡಿ ಅನುಮತಿ ಪತ್ರವನ್ನು ವಿತರಿಸಲಾಗುವುದು ಎಂದಿದ್ದಾರೆ.
--------------------
3. ಬೆಂಗಳೂರು ಕೃಷಿ ವಿಶ್ವವಿದ್ಯಾಲಯವು ಸಂಶೋಧನೆಯೊಂದಿಗೆ ರೈತರಿಗೆ ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ನೀಡಲು ಮುಂದಾಗಿದೆ.
ಹೆಬ್ಬಾಳದಲ್ಲಿರುವ ಕೃಷಿ ವಿಶ್ವವಿದ್ಯಾಲಯದಲ್ಲಿ ಕೇಂದ್ರ ಸರ್ಕಾರದ ಸಹಯೋಗದಲ್ಲಿ ರೈತ ಭವನ ನಿರ್ಮಿಸಲಾಗಿದೆ.
ಇಲ್ಲಿ ರೈತರಿಗೆ ಕೌಶಲ ಅಭಿವೃದ್ಧಿ ತರಬೇತಿಗಾಗಿ ಉಚಿತ ಊಟ, ವಸತಿಯ ಸೌಲಭ್ಯವೂ ಸಿಗಲಿದೆ.
ಈ ಭವನವು ಅಕ್ಟೋಬರ್ ತಿಂಗಳಿಂದ ಕಾರ್ಯಾರಂಭ ಮಾಡಲಿದೆ ಎಂದು ವಿವಿ ಪ್ರಕಟಣೆ ತಿಳಿಸಿದೆ.
4. ಕಾವೇರಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕೊಡೊಯ್ಯಲು ರಾಜ್ಯ ಸರ್ಕಾರ ನಿರ್ಧರಿಸಿದೆ
ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಅನುಮತಿ ಕೇಳಲಾಗಿದೆ.
ಅನುಮತಿ ಸಿಕ್ಕ ನಂತರ ದೆಹಲಿಗೆ ತೆರಳಿ ಚರ್ಚೆ ಮಾಡುವುದಾಗಿ ಹೇಳಿದ್ದಾರೆ.
--------------------
5. ಶನಿವಾರ ಹಾಗೂ ಭಾನುವಾರ ರಾಜ್ಯದ ಕರಾವಳಿ ಸೇರಿದಂತೆ ವಿವಿಧ ಭಾಗದಲ್ಲಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ
ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ ಹಾಗೂ ದಕ್ಷಿಣ ಒಳನಾಡಿನ ಕೊಡಗು
ಹಾಗೂ ಚಿಕ್ಕಮಗಳೂರು ಸೇರಿದಂತೆ ವಿವಿಧ ಭಾಗದಲ್ಲಿ ಮಳೆ ಆಗಲಿದೆ. ಕರಾವಳಿ ಭಾಗದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇರುವ
ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ
ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ.
--------------------
6. ದೇಶದ ಬಹುತೇಕ ಕಡೆ ಬರಗಾಲ ಎದುರಾಗಿದೆ. ಹೀಗಾಗಿ, ಜನರಿಗೆ ತೊಂದರೆಯಾಗದಂತೆ
ಕೇಂದ್ರ ಸರ್ಕಾರವು ಎಲ್ಲಾ ರಾಜ್ಯಗಳಿಗೂ ಸಹಕಾರ ನೀಡಲಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದ್ದಾರೆ.