ಜಗತ್ತಿನಾದ್ಯಂತ ಹೊಸ ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದಿನಿಂದ ಜನವರಿ 2 ರವರಗೆ ಒಟ್ಟು 10 ದಿನಗಳ ಕಾಲ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಕಟಿಸಿದ್ದಾರೆ.
ಬುಧವಾರ ಕೋವಿಡ್ ನಿಯಂತ್ರಣ ಕಾರ್ಯಪಡೆ, ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಜತೆ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೊರೊನಾ ರೂಪಾಂತರಹಾವಳಿಯ ಹಿನ್ನೆಲೆಯಲ್ಲಿ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿರುತ್ತದೆ. ಇಡೀ ರಾಜ್ಯಕ್ಕೆ ಈ ಆದೇಶ ಅನ್ವಯವಾಗಲಿದೆ ಎಂದರು.
ಹೊರ ದೇಶದಿಂದ ಬರುವವರು ಆರ್‌ಟಿಪಿಸಿಆರ್ ನೆಗಟಿವ್ ವರದಿ ಹೊಂದುವುದನ್ನು ಕಡ್ಡಾಯಗೊಳಿಸಿರುವ ರಾಜ್ಯ ಸರ್ಕಾರ, ವಿಮಾನ ನಿಲ್ದಾಣದಲ್ಲಿ ತಪಾಸಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದೆ.
ಆರೋಗ್ಯ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು ತಪಾಸಣೆ ಇಲ್ಲದೆ ಯಾರನ್ನು ಬಿಡುವುದಿಲ್ಲ ಎಂದು ಹೇಳಿರುವ ಬಿಎಸ್‌ವೈ, ಅತ್ಯಂತ ಕಟ್ಟುನಿಟ್ಟಿನ ನೈಟ್ ಕರ್ಫ್ಯೂ ಜಾರಿಗೆ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಿದ್ದಾರೆ.
ರಾತ್ರಿ 9ರನಂತರ ಬಸ್ ಸಂಚಾರ ಇರೋದಿಲ್ಲ. ಹೋಟೆಲ್, ರೆಸ್ಟೋರೆಂಟ್ಗಳೂ ಬಂದ್ ಆಗಲಿವೆ. ವ್ಯಾಪಾರ, ವಹಿವಾಟಗಳೂ ನಡೆಯುವುದಿಲ್ಲ. ಅಗತ್ಯ ವಸ್ತುಗಳ ಸರಬರಾಜು ಮಾಡುವ ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಇರಲಿದೆ. ಹಾಗೇ ಇಂದು ಸಂಜೆ 5 ಗಂಟೆಯೊಳಗೆ ನೈಟ್ ಕರ್ಫ್ಯೂ ಸಂಬಂಧಿತ ಮಾರ್ಗಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಲಿದೆ ಎಂದು ತಿಳಿಸಿದ್ದಾರೆ.