News

ರಾಜ್ಯದಲ್ಲಿ ಲಾಕ್‌ಡೌನ್, ಕರ್ಫ್ಯೂ ಇಲ್ಲ, ಲಸಿಕೆಗೆ ಹೆಚ್ಚು ಆದ್ಯತೆ; ಸಿಎಂ ಯಡಿಯೂರಪ್ಪ

15 March, 2021 9:12 PM IST By:
C.M. B. S. Yadiyurappa

ಕರ್ನಾಟಕದಲ್ಲಿ ಕೊರೊನಾ ಎರಡನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯವಿದೆ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

ಕೋವಿಡ್ 19 ಪಾಸಿಟಿವ್‌ ಪ್ರಕರಣ ಹೆಚ್ಚಾಗುತ್ತಿರುವುದು ಕೊರೊನಾ ಸೋಂಕಿನ ಎರಡನೇ ಅಲೆಯ ಮುನ್ಸೂಚನೆಯಾಗಿದೆ. ಈ ನಿಟ್ಟಿನಲ್ಲಿ ಕೆಲವು ಕಠಿಣ ಮಾರ್ಗಸೂಚಿಗಳನ್ನು ಜಾರಿಗೆ ತರಬೇಕಾಗಿದೆ. ಕೋವಿಡ್‌ ಕುರಿತು ರಚಿಸಲಾಗಿದ್ದ ತಾಂತ್ರಿಕ ಸಲಹಾ ಸಮಿತಿಯ ಸಲಹೆ ಸೂಚನೆಗಳನ್ನು ಆಲಿಸಿ ಮಾರ್ಗಸೂಚಿ ಸಿದ್ದಪಡಿಸಲಾಗಿದೆ ಎಂದು ಯಡಿಯೂರಪ್ಪ ಹೇಳಿದರು

ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ,ಸಾಮಾಜಿಕ ಅಂತರಕ್ಕೆ ಒತ್ತು ನೀಡಬೇಕು .ಇಲ್ಲದಿದ್ದರೆ ದಂಡ ವಿಧಿಸಲಾಗುವುದು.  ರಾಜ್ಯದಲ್ಲಿ ಯಾವುದೇ ಕಾರಣಕ್ಕೆ ಲಾಕ್ಡೌನ್ ಮಾಡುವ ಪರೀಕ್ಷೆಗೆ ಅವಕಾಶ ಮಾಡಿಕೊಡಬೇಡಿ ಎಲ್ಲರೂ ಕಡ್ಡಾಯವಾಗಿ ಕೋವಿಡ್ ಮಾರ್ಗಸೂಚಿಗಳನ್ನು ತಪ್ಪದೆ ಪಾಲಿಸಿ. ಇಲ್ಲದಿದ್ದರೆ ಅನಿವಾರ್ಯವಾಗಿ ದಂಡ ವಿಧಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಕೋವಿಡ್- 19ರ ಕುರಿತು ತಜ್ಞರು, ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ,ಉಡುಪಿ, ತುಮಕೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ ಜಿಲ್ಲೆಗಳಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಾಗಿದೆ ಎಂದರು

ಹೆಚ್ಚು ಪಾಸಿಟಿವಿಟಿ ರೇಟ್ ಇರುವ ಜಿಲ್ಲೆಗಳಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸಬೇಕಾಗಿದೆ.‌ ಆರೋಗ್ಯ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಪಡೆದಿದ್ದಾರೆ. ಆದರೆ ಇತರ ಮುಂಚೂಣಿಯ ಸಿಬ್ಬಂದಿಯಲ್ಲಿ ಶೇ. 58 ರಷ್ಟು ಮಾತ್ರ ಲಸಿಕೆ ಪಡೆದಿದ್ದಾರೆ. ದೊಡ್ಡ ಅಪಾರ್ಟ್ ಮೆಂಟ್ ಗಳಲ್ಲಿ ಲಸಿಕೆ ಹಾಕಲು ಕ್ರಮ ವಹಿಸುವಂತೆ ಸೂಚಿಸಿದರು.

ಮತದಾರರ ಪಟ್ಟಿಯನ್ನು ಆಧರಿಸಿ, ಹಿರಿಯ ನಾಗರಿಕರನ್ನು ಗುರುತಿಸಿ, ಲಸಿಕೆ ಹಾಕುವುದು.ಗ್ರಾಮ ಪಂಚಾಯಿತಿಗಳು ತಮ್ಮ ವ್ಯಾಪ್ತಿಯ ಹಿರಿಯ ನಾಗರಿಕರಿಗೆ ಲಸಿಕೆ ಕೊಡಿಸಲು ಕ್ರಮ ವಹಿಸುವುದು ಎಂದು ಅವರು ತಿಳಿಸಿದ್ದಾರೆ

ಲಸಿಕೆ ಹೆಚ್ಚಳ:

ಮಾಸ್ಕ್ ಧಾರಣೆ , ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು. ಉಲ್ಲಂಘನೆಗೆ ಕಟ್ಟುನಿಟ್ಟಾಗಿ ದಂಡ ವಿಧಿಸಲಾಗುವುದು ಎಂದರು .

ಮದುವೆ ಮತ್ತಿತರ ಸಾಮಾಜಿಕ, ಧಾರ್ಮಿಕ ಹಾಗೂ ರಾಜಕೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರ ಸಂಖ್ಯೆಯನ್ನು ಮಾರ್ಗಸೂಚಿಯಂತೆ ಕಟ್ಟುನಿಟ್ಟಾಗಿ ನಿಯಂತ್ರಿಸಬೇಕು.ಕೊರೋನಾ ಪರೀಕ್ಷೆಯ ಪ್ರಮಾಣ ಹೆಚ್ಚಿಸುವುದು, ವಿಶೇಷವಾಗಿ ರೋಗ ಲಕ್ಷಣ ಇರುವವರು, ಅಂಗಡಿ ಮಾಲೀಕರು, ಬಸ್ ನಿರ್ವಾಹಕರು ಮತ್ತಿತರರಿಗೆ ಪರೀಕ್ಷೆ ನಡೆಸುವಂತೆ ಸೂಚಿಸಿದ್ದಾರೆ

ಕೋವಿಡ್ ಆಸ್ಪತ್ರೆಗಳು, ಆಕ್ಸಿಜನ್ ಪೂರೈಕೆ ಇರುವ ಹಾಸಿಗೆಗಳು, ಐಸಿಯು ಲಭ್ಯತೆ ಹಾಗೂ ಕೋವಿಡ್ ಕೇರ್ ಸೆಂಟರುಗಳ ಸ್ಥಾಪನೆಗೆ ಸಿದ್ಧತೆ ಮಾಡಿಕೊಳ್ಳುವಂತೆಯೂ ಸೂಚಿಸಿರುವ ಅವರು ಖಾಸಗಿ ಆಸ್ಪತ್ರೆಗಳೊಂದಿಗೆ ಮಾತುಕತೆ ನಡೆಸಿ, ಹಿಂದಿನಂತೆ ಕೋವಿಡ್ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ಒದಗಿಸುವಂತೆ ಸೂಚಿಸಿದ್ದಾರೆ

ಹಿರಿಯ ನಾಗರಿಕರಿಗೆ ಲಸಿಕೆ ಹಾಕುವ ಕಾರ್ಯವನ್ನು ಚುರುಕುಗೊಳಿಸುವುದು. ವಿಶೇಷವಾಗಿ ಗ್ರಾಮೀಣ ಪ್ರದೇಶ ಹಾಗೂ ಕೊಳೆಗೇರಿಗಳಲ್ಲಿ ಲಸಿಕೆ ಪ್ರಮಾಣ ಹೆಚ್ಚಿಸುವುದು. ಎಲ್ಲ ಇಲಾಖೆಗಳು ಹಾಗೂ ರೋಟರಿ, ಲಯನ್ಸ್ ಕ್ಲಬ್ ಗಳಂತಹ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ

ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ ನಿಗದಿತ ಸಂಖ್ಯೆ ಮೀರಿ ಪ್ರಯಾಣಿಕರನನ್ನು ಕರೆದೊಯ್ಯದಿರುವುದು. ಮುನ್ನೆಚ್ಚರಿಕೆ ಕ್ರಮಗಳ ಕುರಿತು ಜನರಲ್ಲಿ ಹೆಚ್ಚಿನ ಅರಿವು ಮೂಡಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ತಿಳಿಸಿದ್ದಾರೆ.

ತಾಂತ್ರಿಕ ಸಲಹಾ ಸಮಿತಿಯ ಸದಸ್ಯರಾದ ಡಾ. ಸಿ.ಎನ್. ಮಂಜುನಾಥ್, ಡಾ. ಸುದರ್ಶನ್, ಡಾ. ರವಿ, ಪ್ರೊ. ಗಿರಿಧರಬಾಬು, ವಿಶ್ವ ಆರೋಗ್ಯ ಸಂಸ್ಥೆಯ ಪ್ರತಿನಿಧಿ ಮೊದಲಾದವರು ತಮ್ಮ ಅಭಿಪ್ರಾಯ ಮಂಡಿಸಿದರು. ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸರ್ಕಾರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.