ಧಾರವಾಡ: ಬಡವರ ವಿರೋಧಿಗಳು ಪಂಚ ಗ್ಯಾರಂಟಿ ಅನುಷ್ಠಾನ ವಿಷಯದಲ್ಲಿ ಸರಕಾರದ ವಿರುದ್ಧ ಸುಳ್ಳ ಆರೋಪ ಮಾಡುತ್ತಿದ್ದಾರೆ, ಆದರೆ ಸರಕಾರ ಆರ್ಥಿಕವಾಗಿ ಸುಸ್ಥಿರವಾಗಿದ್ದು, ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಮುಂದುವರೆಸಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ನಿನ್ನೆ ಧಾರವಾಡ ಕೃಷಿ ಮೇಳದಲ್ಲಿ ಮಾತನಾಡಿದ ಅವರು, ಪಂಚಗ್ಯಾರಂಟಿಗಳು ಸೇರಿ ರಾಜ್ಯದ ಅಭಿವೃದ್ಧಿಗಾಗಿ ಮುಂದಿನ ವರ್ಷ ಸುಮಾರು 3 ಲಕ್ಷ 80 ಸಾವಿರ ಕೋಟಿ ರೂ. ಗಳ ಬಜೆಟ್ ಮಂಡಿಸಲಾಗುತ್ತದೆ ಎಂದರು.
ಪಂಚಗ್ಯಾರಂಟಿ ಯೋಜನೆಗಳ ಜಾರಿಯಿಂದ ಅಭಿವೃದ್ಧಿಗೆ ಹಣದ ಕೊರತೆ ಆಗಿದೆ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಸರಕಾರಕ್ಕೆ ಯಾವುದೇ ರೀತಿಯ ಆರ್ಥಿಕ ತೊಂದರೆ ಇಲ್ಲ. ಸರಕಾರದ ಎಲ್ಲ ಅಭಿವೃದ್ಧಿ ಕಾರ್ಯಕ್ರಮಗಳು ಮುಂದುವರೆಯಲಿವೆ. ಪ್ರಸಕ್ತ ವರ್ಷ ಪಂಚ ಗ್ಯಾರಂಟಿಗಳ ಅನುಷ್ಠಾನಕ್ಕೆ ಸುಮಾರು 32 ಸಾವಿರ ಕೋಟಿ ರೂ.ಗಳ ಅಗತ್ಯವಿದೆ.
ಮುಂದಿನ ವರ್ಷದಿಂದ ಪ್ರತಿವರ್ಷ ಪಂಚ ಗ್ಯಾರಂಟಿಗಳ ಜಾರಿಗೆ ಸುಮಾರು 56 ಸಾವಿರ ಕೋಟಿ ರೂ.ಗಳು ಬೇಕಾಗುತ್ತದೆ. ಈ ಎಲ್ಲ ಅಗತ್ಯ ಹಣ ಹೊಂದಿಸಲು ಸರಕಾರ ಸಶಕ್ತವಾಗಿದೆ. ಯಾರಿಗೂ ಭಯಬೇಡ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಪಂಚ ಗ್ಯಾರಂಟಿಗಳ ವೆಚ್ಚ ಸೇರಿ ಮುಂದಿನ ವರ್ಷದ ಬಜೆಟ್ ಸುಮಾರು 380 ಲಕ್ಷ ಕೋಟಿಗಳಾಗುವ ಅಂದಾಜಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಇಂದು ಶೇ.60 ರಷ್ಟು ಜನ ಕೃಷಿ ಮಾಡುತ್ತಿದ್ದಾರೆ. ಭಾರತವು ಕೃಷಿ ಪ್ರಧಾನ ದೇಶವಾಗಿದ್ದರೂ ಸಾಕಷ್ಟು ಜನ ಕೃಷಿಯಿಂದ ವಿಮುಖರಾಗುತ್ತಿದ್ದಾರೆ. ಮಳೆ ಆಧಾರಿತ ಕೃಷಿ ಭೂಮಿ ಇರುವುದರಿಂದ ಮಳೆ ಕೊರತೆಯಾಗಿ ಸಮಸ್ಯೆ ಆಗುತ್ತಿದೆ. ಕೃಷಿ ವಿವಿಗಳು ಒಣಭೂಮಿಯಲ್ಲಿ ಕೃಷಿ ಅಭಿವೃದ್ಧಿ ಪಡಿಸುವ ಕುರಿತು ಹೆಚ್ಚು ಸಂಶೋಧನೆ ಕೈಗೊಳ್ಳಬೇಕು ಎಂದರು.
ಯುವಕರು, ಹೆಚ್ಚುಜನ ಕೃಷಿಯಲ್ಲಿ ತೊಡಗಿಸಿಕೊಳ್ಳುವಂತೆ ಕೃಷಿ ವಿವಿಗಳು ಕಾರ್ಯ ಮಾಡಬೇಕು. ವಿಶ್ವವಿದ್ಯಾಲಯದ ಸಂಶೋಧನೆ, ತಾಂತ್ರಿಕತೆಗಳು ರೈತರ ಜಮೀನುಗಳಿಗೆ ತಲುಪಿದರೆ ಮಾತ್ರ ಸಾರ್ಥಕವಾಗುತ್ತದೆ. ಕೃಷಿ ಮೇಳಗಳು ಜಾತ್ರೆಗಳಾಗದೇ ಕೃಷಿ ಕ್ಷೇತ್ರಕ್ಕೆ ಯುವಕರನ್ನು, ಹೊಸಬರನ್ನು ಸೆಳೆಯುವಂತೆ ಆಕರ್ಷಕವಾಗಿ ಸಂಘಟಿಸಬೇಕು ಎಂದರು.
ಒಣ ಬೇಸಾಯ ಮಾಡುವ ರೈತರ ಬಗ್ಗೆ ವಿಶೇಷ ಕಾಳಜಿ ಇದೆ. ಒಣಬೇಸಾಯ ಮಾಡಲು ಅಗತ್ಯ ಸುಧಾರಿತ ಹೊಸ ತಳಿಗಳ ಸಂಶೋಧನೆ ಮಾಡಬೇಕು. ಬಿತ್ತಿದ ಯಾವುದೇ ಮುಖ್ಯ ಬೆಳೆ ಹಾಳಾದರೆ, ಅದಕ್ಕೆ ಪರ್ಯಾಯವಾದ ತಕ್ಷಣದ ಬೆಳೆಗಳನ್ನು ಮಾಡಬೇಕು ಎಂಬುದರ ಬಗ್ಗೆ ವಿಜ್ಞಾನಿಗಳು ಆಸಕ್ತಿ ವಹಿಸಿ, ಸಂಶೋಧನೆ ಮಾಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.