ಕರ್ನಾಟಕದಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇದನ್ನ ತಡೆಗಟ್ಟುವ ಉದ್ದೇಶದಿಂದ ನಾಳೆಯಿಂದ ರಾಜ್ಯದಲ್ಲಿ 14 ದಿನಗಳ ಕಾಲ ಕಠಿಣ ಕ್ರಮ ಜಾರಿಗೊಳಿಸಿ ಆದೇಶ ಹೊರಹಾಕಲಾಗಿದೆ.
ಶರವೇಗದಲ್ಲಿ ವ್ಯಾಪಿಸುತ್ತಿರುವ ಕೊರೊನಾ ಸೋಂಕು ನಿಯಂತ್ರಿಸಲು ನಾಳೆಯಿಂದ 14 ದಿನಗಳ ಕಾಲ ಲಾಕ್ ಡೌನ್ ಮಾದರಿಯಲ್ಲೇ ಕರ್ಫ್ಯೂವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ 6 ರಿಂದ 10 ರವರೆಗೆ ಕಾಲಾವಕಾಶ ನೀಡಿ ಉಳಿದಂತೆ ಎಲ್ಲಾ ವ್ಯಾಪಾರ ವಹಿವಾಟುಗಳನ್ನು ಬಂದ್ ಮಾಡಿ ಜನರ ಅನಗತ್ಯ ಓಡಾಟಕ್ಕೆ ಕಡಿವಾಣ ಹಾಕಲಾಗುವುದು ಎಂದು ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರವನ್ನು ಮುಖ್ಯಮಂತ್ರಿ ಯಡಿಯೂರಪ್ಪರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕೊರೊನಾ ನಿಯಂತ್ರಣಕ್ಕೆ ಕರ್ಫ್ಯೂ ಮದ್ದು. ಹೀಗಾಗಿ ಅನಿವಾರ್ಯವಾಗಿ ರಾಜ್ಯಾದ್ಯಂತ ಕರ್ಫ್ಯೂ ಜಾರಿಗೊಳಿಸಲು ನಿರ್ಧರಿಸಲಾಗಿದೆ. ಸೋಂಕು ನಿಯಂತ್ರಿಸಲು 18 ವರ್ಷ ಮೇಲ್ಪಟ್ಟವರಿಗೆ ಮೇ 1 ರಿಂದ ಲಸಿಕೆ ಹಾಕುವ ಅಭಿಯಾನವನ್ನು ಮುಂದುವರೆಸಲಾಗುವುದು. ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಅವರು ಹೇಳಿದರು.
ಮುಂದಿನ 6 ತಿಂಗಳವರೆಗೆ ಎಲ್ಲಾ ಚುನಾವಣೆಗಳನ್ನು ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲಾಗಿದೆ. ಸರ್ಕಾರ ಕೈಗೊಂಡಿರುವ ಹೊಸಮಾರ್ಗಸೂಚಿ ನಾಳೆ ರಾತ್ರಿ ೯ರ ನಂತರ ಜಾರಿಯಾಗಲಿದೆ ಎಂದು ಅವರು ಹೇಳಿದರು.
ಬೆಳಿಗ್ಗೆ 6 ರಿಂದ 10 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿ, 10ರ ನಂತರ, ಎಲ್ಲಾ ಚಟುವಟಿಕೆಗಳನ್ನು ನಿರ್ಬಂಧಿಸಲಾಗುವುದು. ಸಾರಿಗೆ ಸೌಕರ್ಯ ಕೂಡ ಇರುವುದಿಲ್ಲ ಎಂದು ಹೇಳಿದ ಅವರು, ಆರೋಗ್ಯ, ಕಂದಾಯ, ಪೊಲೀಸ್ ಸೇವೆ ಹೊರತುಪಡಿಸಿ, ಉಳಿದ ಸರ್ಕಾರಿ ಕಚೇರಿಗಳಿಗೂ ರಜೆ ನೀಡಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆಗಳನ್ನು ಬಂದ್ ಮಾಡಿ, ಉತ್ಪಾದನಾ ವಲಯಗಳ ಕಾರ್ಖಾನೆ, ಕೈಗಾರಿಕೆಗಳಿಗೆ ನೌಕರರನ್ನು ಇತಿಮಿತಿಯಲ್ಲಿ ಬಳಸಿಕೊಂಡು ಕಾರ್ಯನಿರ್ವಹಿಸಲಾಗುವುದು ಎಂದು ಅವರು ಹೇಳಿದರು.
ಮೆಟ್ರೋ, ಬಿಎಂಟಿಸಿ, ಕೆಎಸ್ ಆರ್ ಟಿಸಿ ಸಾರಿಗೆಯು ಬಂದ್ ಆಗಲಿದೆ ಎಂದು ಅವರು ತಿಳಿಸಿದರು.
ಈಗಾಗಲೇ ಮಧ್ಯಪ್ರದೇಶ, ಜಮ್ಮು - ಕಾಶ್ಮೀರ, ಗೋವಾ, ಕೇರಳ, ಛತ್ತೀಸ್ಗಢ, ಬಿಹಾರ್, ಜಾರ್ಖಂಡ್, ಉತ್ತರ ಪ್ರದೇಶ, ಅಸ್ಸೋಂ, ಸಿಕ್ಕಿಂ, ಪಶ್ಚಿಮ ಬಂಗಾಳ, ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಹರಿಯಾಣ, ಮಹಾರಾಷ್ಟ್ರ ಹಾಗೂ ನವದೆಹಲಿ ಸರ್ಕಾರಗಳು ತಮ್ಮ ರಾಜ್ಯದ ಜನರಿಗೆ ಉಚಿತವಾಗಿ ಕೊರೊನಾ ವ್ಯಾಕ್ಸಿನ್ ನೀಡುವುದಾಗಿ ಘೋಷಣೆ ಮಾಡಿದ್ದು, ಇದರ ರಾಜ್ಯದ ಮುಖ್ಯಮಂತ್ರಿಗಳು ಇಂತಹ ನಿರ್ಧಾರ ಕೈಗೊಂಡಿದ್ದಾರೆ.