News

ಎದೆನೋವು ಮಾಜಿ ಪ್ರಧಾನಿ ಡಾ. ಮನಮೋಹನಸಿಂಗ್ ದಿಲ್ಲಿ ಏಮ್ಸ್‌ಗೆ ದಾಖಲು

11 May, 2020 8:26 PM IST By:

ಎದೆನೋವು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಮಾಜಿ  ಪ್ರಧಾನಮಂತ್ರಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ, ಕಾಂಗ್ರೆಸ್ ಹಿರಿಯ ನಾಯಕ ಡಾ. ಮನಮೋಹನ್ ಸಿಂಗ್ ಅವರನ್ನು ಭಾನುವಾರ ರಾತ್ರಿ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಏಮ್ಸ್)  ಆಸ್ಪತ್ರೆಗೆ ದಾಖಲಿಸಲಾಗಿದೆ.

ಡಾ. ಸಿಂಗ್ ಅವರನ್ನು ಏಮ್ಸ್ ನಲ್ಲಿರುವ ಹೃದಯ ಮತ್ತು ಎದೆರೋಗಗಳ ವಿಭಾಗದಲ್ಲಿ ನಿಗಾದಲ್ಲಿರಿಸಲಾಗಿದೆ ಎಂದು ತಿಳಿದುಬಂದಿದೆ. 87 ವರ್ಷ ಪ್ರಾಯ ಡಾ. ಸಿಂಗ್ ಅವರು 2009ರಲ್ಲಿ ಏಮ್ಸ್ ಆಸ್ಪತ್ರೆಯಲ್ಲಿ ಹೃದಯದ ಯಶಸ್ವಿ ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

ಕಳೆದ ವಾರ ಆರೋಗ್ಯವಂತಾಗಿದ್ದ ಮಾಜಿ ಪ್ರಧಾನಿ ಸಿಂಗ್, ಕೇಂದ್ರದ ಲಾಕ್‌ಡೌನ್‌ ನೀತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಲಾಕ್‌ಡೌನ್‌ 3.0 ಬಳಿಕ ಮುಂದೇನು ಎಂದವರು ಸರ್ಕಾರವನ್ನು ಪ್ರಶ್ನಿಸಿದ್ದರು.
ಭಾನುವಾರ ರಾತ್ರಿ ಮನಮೋಹನ್ ಸಿಂಗ್ ಅವರಿಗೆ ಎದೆ ನೋವು ಕಾಣಿಸಿಕೊಂಡ ಕಾರಣ ತಕ್ಷಣವೇ ಅವರನ್ನು ಏಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಏಮ್ಸ್ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಇದೀಗ ಮನಮೋಹನ್ ಸಿಂಗ್ ಅವರ ಆರೋಗ್ಯ ತಪಾಸಣೆಯಲ್ಲಿ ನಿರತರಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.

2004 ರಿಂದ 2014 ರವರೆಗೆ ಪ್ರಧಾನಿಯಾಗಿದದ ಅವರು, ಇದಕ್ಕೂ ಮುನ್ನ ವಿತ್ತ ಸಚಿವರಾಗಿಯೂ ಕಾರ್ಯನಿರ್ವಹಿಸಿದ್ದರು. 3 ದಿನಗಳ ಹಿಂದೆ ಕಾಂಗ್ರೆಸ್ ಮುಖ್ಯಮಂತ್ರಿಗಳ ಸಭೆಯಲ್ಲೂ ಸಕ್ರೀಯವಾಗಿ ಪಾಲ್ಗೊಂಡಿದ್ದರು.