News

ಜೂನ್ 29ರವರೆಗೆ ದಕ್ಷಿಣ ಒಳನಾಡಿನಲ್ಲಿ ಧಾರಾಕಾರ ಮಳೆ ಸಾಧ್ಯತೆ

26 June, 2020 10:50 AM IST By:

ಕರ್ನಾಟಕದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ  ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಜೂನ್‌ 26 ರಿಂದ 29 ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಳೆಗಾಲ ಆರಂಭವಾದ ಬಳಿಕ ಇದೇ ಮೊದಲ ಬಾರಿಗೆ ಸುದೀರ್ಘ ಅವಧಿಯಲ್ಲಿ ಬೆಂಗಳೂರಿನಲ್ಲಿ ಧಾರಾಕಾರ ಮಳೆ ಸುರಿದು ನಗರದ ಜನತೆಯನ್ನು ಬೆಚ್ಚಿ ಬೀಳಿಸಿತು. ಇದೇ ರೀತಿ ಜೂ.28 ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಮೂರೂ ದಿನಗಳವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮೂರು ದಿನಗಳವರೆಗೆ ‘ಯೆಲ್ಲೊ ಅಲರ್ಟ್’ ಘೋಷಿಸಿದ್ದು, ಗಂಟೆಗೆ 40ರಿಂದ 50 ಕಿ.ಮೀ
ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಸೂಚಿಸಿದೆ.

ಕಲಬುರಗಿ, ಬೀದರ್, ರಾಯಚೂರು, ಬಳ್ಳಾರಿ, ಕೊಪ್ಪಳ ಯಾದಗಿರಿ ಜಿಲ್ಲೆಯಲ್ಲಿಯೂ ಮೋಡ ಕವಿದ ವಾತಾವರಣವಿದ್ದು ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.