ಕರಾವಳಿ ಮತ್ತು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಗುರುವಾರವೂ ಮಳೆಯ ಅಬ್ಬರ ಮುಂದುವರಿದಿದೆ. ಮಹಾರಾಷ್ಟ್ರ ಭಾಗದಲ್ಲಿ ಮಳೆಯಾಗುತ್ತಿರುವ ಕಾರಣ ಕೃಷ್ಣಾ ಮತ್ತು ಉಪನದಿಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕೆಲ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಜಲಾಶಯಗಳಿಗೆ ಜೀವಕಳೆ ಬಂದಿದೆ. ಗುರುವಾರ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಸರಾಸರಿ 40-50 ಮಿ.ಮೀವರೆಗೆ ಮಳೆಯಾಗಿದೆ.
ಕೃಷ್ಣೆಯಲ್ಲಿ ಜಲಧಾರೆ: ಮಹಾರಾಷ್ಟ್ರದ ಕೃಷ್ಣಾ ನದಿ ಶ್ರೇಣಿಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಬಾಗಲಕೋಟೆಯ ಜಮಖಂಡಿ ತಾಲೂಕಿನ ಹಿಪ್ಪರಗಿ ಬ್ಯಾರೇಜ್ಗೆ ಗುರುವಾರ 44 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಅಷ್ಟೇ ಪ್ರಮಾಣದಲ್ಲಿ ನೀರನ್ನು ಹೊರ ಹರಿಬಿಡಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಕೊಯ್ನಾ, ರಾಜಾಪುರ ಡ್ಯಾಂ, ಧೂದಗಂಗಾ ನದಿಗಳಿಂದ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವುದರಿಂದ ಜೂನ್ ತಿಂಗಳಿನಲ್ಲೇ ಕೃಷ್ಣಾ ನದಿ ಒಡಲು ತುಂಬಿ ಹರಿಯುತ್ತಿದೆ.
ಬೆಳಗಾವಿಯಲ್ಲಿ ಮಳೆ ಅಬ್ಬರ ಕಡಿಮೆಯಾಗಿದ್ದರೂ ನೆರೆಯ ಮಹಾರಾಷ್ಟ್ರ ರಾಜ್ಯದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರಿ ಮಳೆ ಮುಂದುವರಿದಿದ್ದರಿಂದ ಚಿಕ್ಕೋಡಿ ಉಪ ವಿಭಾಗದ ಕೆಳ ಹಂತದ 6 ಬ್ರಿಡ್ಜ್ ಕಂ ಬಾಂದಾರಗಳು ಗುರುವಾರ ಜಲಾವೃತಗೊಂಡಿವೆ.
ತುಂಗಾ ಜಲಾಶಯ ಭರ್ತಿ:
ಶಿವಮೊಗ್ಗದ ಗಾಜನೂರಿನ ತುಂಗಾ ಜಲಾಶಯ ಭರ್ತಿಯಾಗಿದ್ದು ಗುರುವಾರ ಜಲಾಶಯದ ನಾಲ್ಕು ಕ್ರಸ್ಟ್ ಗೇಟ್ಗಳ ಮೂಲಕ ನದಿಗೆ 2 ಸಾವಿರ ಕ್ಯೂಸೆಕ್ ನೀರು ಹರಿಸಲಾಯಿತು.
ಕೊಡಗಿನಲ್ಲಿ ಉತ್ತಮ ಮಳೆ:
ಮಡಿಕೇರಿ ತಾಲೂಕಿನ ಭಾಗಮಂಡಲ ವ್ಯಾಪ್ತಿಯಲ್ಲಿ ಗುರುವಾರ ಉತ್ತಮ ಮಳೆಯಾಗಿದೆ. ಸುಂಟಿಕೊಪ್ಪ ಮತ್ತು ಮಡಿಕೇರಿ, ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ ಗುರುವಾರ ಮುಂಜಾನೆಯಿಂದ ಮೋಡಕವಿದ ವಾತಾವರಣದೊಂದಿಗೆ ಆಗೊಮ್ಮೆ ಈಗೊಮ್ಮೆ ತುಂತುರು ಮಳೆಯಾಗಿದೆ.
ತುಂಗಾ ಜಲಾಶಯ ಭರ್ತಿ:
ಶಿವಮೊಗ್ಗ: ಮಲೆನಾಡಿನಲ್ಲಿ ಸತತ ಮಳೆಯಾಗುತ್ತಿರುವ ಕಾರಣ ಗಾಜನೂರು ತುಂಗಾ ಜಲಾಶಯ ಭರ್ತಿಯಾಗಿದ್ದು, ಗುರುವಾರ 4 ಕ್ರಸ್ಟ್‌ಗೇಟ್‍ಗಳ ಮೂಲಕ 2,086 ಕ್ಯುಸೆಕ್ ನೀರು ನದಿಗೆ ಹರಿಸಲಾಯಿತು.
ಕಡಲ್ಕೊರೆತದ ಭೀತಿ:
ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಉಡುಪಿ ಜಿಲ್ಲೆಯ ಕಾಪು ಸಮೀಪದ ಮೂಳೂರಿನಲ್ಲಿ ಭಾರಿ ಗಾತ್ರದ ಅಲೆಗಳು ಸಮುದ್ರ ತೀರಕ್ಕೆ ಅಪ್ಪಳಿಸುತ್ತಿದ್ದು, ಕಡಲ್ಕೊರೆತದ ಭೀತಿ ಉಂಟಾಗಿದೆ.
ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆ:
ಕೊಡಗು ಜಿಲ್ಲೆಯ ಬ್ರಹ್ಮಗಿರಿ ವ್ಯಾಪ್ತಿಯಲ್ಲಿ ನಾಲ್ಕು–ಐದು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ.
ಮಳೆ ಅಬ್ಬರ: ಕರಾವಳಿಯಲ್ಲಿ ಕಡಲ್ಕೊರೆತದ ಭೀತಿ
19 June, 2020 3:14 PM IST