ಭಾರೀ ಒತ್ತಡಕ್ಕೆ ಮಣಿದಿರುವ ಕರ್ನಾಟಕ ಸರ್ಕಾರ ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತು ಬದ್ಧ ಅನುಮತಿ ನೀಡಿದೆ. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ಹಲವು ಷರತ್ತುಗಳಳೊಂದಿಗೆ ಗರಿಷ್ಠ 5 ದಿನದ ತನಕ ಮಾತ್ರ ಗಣೇಶೋತ್ಸವ ಆಚರಣೆ ಮಾಡಬೇಕು ಎಂದು ಕರ್ನಾಟಕ ಸರ್ಕಾರ ಸ್ಪಷ್ಟಪಡಿಸಿದೆ. ಗಣೇಶೋತ್ಸವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಮೆರವಣಿಗೆಗೆ ನಿಷೇಧ ಹೇರಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಚರ್ಚಿಸಿದ ಬಳಿಕ ಈ ಕುರಿತು ತೀರ್ಮಾನವನ್ನು ಕೈಗೊಳ್ಳಲಾಗಿದೆ.ಜತೆಗೆ ಗಣಪತಿ ಮೂರ್ತಿಗಳನ್ನು ನಿಗದಿತ ಸ್ಥಳಗಳಲ್ಲಿ ಮಾತ್ರ ವಿಸರ್ಜನೆ ಮಾಡಲು ಅವಕಾಶ ನೀಡಲಾಗಿದ್ದು, ಬಿಬಿಎಂಪಿ, ಜಿಲ್ಲಾಡಳಿತ ಸೂಚಿಸಿದ ಸ್ಥಳದಲ್ಲಿಯೇ ವಿಸರ್ಜಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ. ರಾಜ್ಯದಲ್ಲಿ 3 ದಿನ ಮಾತ್ರ ಸರಳವಾಗಿ ಗಣೇಶೋತ್ಸವ ಇರಲಿದೆ. ಸಾರ್ವಜನಿಕ ಸ್ಥಳದಲ್ಲಿಯೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಿದರೂ ಅದು ಸರಳವಾಗಿ ಇರಬೇಕು. ಅದ್ಧೂರಿ ಆಚರಣೆ ಮಾಡುವಂತಿಲ್ಲ ಎಂದು ತಿಳಿಸಲಾಗಿದೆ. ಸಂಘ, ಸಂಸ್ಥೆಗಳಿಂದ ಭಾರೀ ಒತ್ತಡ ಇದ್ದ ಹಿನ್ನೆಲೆಯಲ್ಲಿ ಅಂತಿಮವಾಗಿ ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಒಪ್ಪಿಗೆ ನೀಡಲಾಗಿದೆ
ಲಸಿಕೆ ಕಡ್ಡಾಯ
ಸಾರ್ವಜನಿಕ ಗಣೇಶೋತ್ಸವ ಆಚರಣೆಯ ಸಂಘಟಕರು ಕಡ್ಡಾಯವಾಗಿ ಕೋವಿಡ್ ಲಸಿಕೆ ಪಡೆದಿರಬೇಕು. ಕೋವಿಡ್ ನೆಗೆಟಿವ್ ಪ್ರಮಾಣಪತ್ರ ಹೊಂದಿರುವುದೂ ಕಡ್ಡಾಯ ಎಂದು ಕಂದಾಯ ಇಲಾಖೆಯಯ ದೇಶದಲ್ಲಿ ತಿಳಿಸಲಾಗಿದೆ. ಗಣೇಶೋತ್ಸವ ಆಚರಣೆಯ ಸ್ಥಳದಲ್ಲಿ ಸ್ಥಳೀಯವಾಗಿ ಕೋವಿಡ್ ಲಸಿಕೆ ಹಾಕುವ ಕಾರ್ಯಕ್ರಮ ಆಯೋಜಿಸಬೇಕು. ದೇವಸ್ಥಾನವೂ ಸೇರಿದಂತೆ ಗಣೇಶೋತ್ಸವ ಆಚರಿಸುವ ಎಲ್ಲಾ ಸಾರ್ವಜನಿಕ ಸ್ಥಳಗಳಲ್ಲಿ ನಿತ್ಯ ಸ್ಯಾನಿಟೈಸೇಷನ್ ಮಾಡಬೇಕು. ಸ್ಯಾನಿಟೈಸರ್ ಮತ್ತು ದೇಹದ ಉಷ್ಣಾಂಶ ತಪಾಸಣೆಗೆ ವ್ಯವಸ್ಥೆ ಮಾಡಬೇಕು ಎಂದು ಷರತ್ತು ವಿಧಿಸಲಾಗಿದೆ.
ಶಾಲಾ-ಕಾಲೇಜುಗಳಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸುವಂತಿಲ್ಲ. ಕಾರ್ಯಕ್ರಮಗಳಲ್ಲಿ ಡಿಜೆ ಬಳಕೆ ನಿರ್ಬಂಧಿಸಲಾಗಿದೆ. ಮೂರ್ತಿ ವಿಸರ್ಜನೆ ವೇಳೆ ಸಾರ್ವಜನಿಕರಿಗೆ ತೊಂದರೆ ನೀಡಬಾರದು. ಕಾರ್ಯಕ್ರಮಕ್ಕೆ 50X50 ಅಡಿ ಪೆಂಡಾಲ್ ಮಾತ್ರ ಹಾಕಬೇಕು
ಅಪಾರ್ಟ್‌ಮೆಂಟ್‌ಗಳಲ್ಲೂ 20ಕ್ಕೂ ಹೆಚ್ಚು ಜನ ಸೇರಬಾರದು. ಆಯಾ ಸಮಿತಿಯವರು ಕಡ್ಡಾಯವಾಗಿ ಲಸಿಕೆ ಪಡೆದಿರಬೇಕು.. ಗ್ರಾಮಗಳಲ್ಲೂ ಕೇವಲ ಒಂದು ಮೂರ್ತಿ ಪ್ರತಿಷ್ಠಾಪಿಸಲು ಅವಕಾಶವಿದೆ, ಶಾಂತಿ ಸೌಹಾರ್ದಕ್ಕೆ ಯಾವುದೇ ಧಕ್ಕೆ ಉಂಟುಮಾಡಬಾರದು ಎಂದು ಹೇಳಿದರು
ಸಾರ್ವಜನಿಕ ಸ್ಥಳದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಸರ್ಕಾರದ ಅನುಮತಿ ಸಿಕ್ಕಿದೆಯಾದರೂ ಬೀದಿಗೆ ಒಂದರಂತೆ ಗಣೇಶ ಪ್ರತಿಷ್ಠಾಪಿಸುವಂತಿಲ್ಲ ಎಂದು ಕಟ್ಟುನಿಟ್ಟಾಗಿ ಸೂಚಿಸಲಾಗಿದೆ. ಸರಳವಾಗಿ ಗಣೇಶೋತ್ಸವ ಆಚರಣೆ ಮಾಡಬೇಕು, ಏರಿಯಾಗೆ ಇಂತಿಷ್ಟೇ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕಡ್ಡಾಯವಾಗಿದ್ದು, ಬಿಬಿಎಂಪಿ, ಜಿಲ್ಲಾಡಳಿತದ ಅನುಮತಿ ಪಡೆಯಲೇಬೇಕು ಎಂದು ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.
ರಾಜ್ಯದ ನಗರ ಪ್ರದೇಶಗಳಲ್ಲಿ ಗರಿಷ್ಠ 5 ದಿನಗಳ ಕಾಲ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಲಾಗಿದೆ. ನಗರಗಳಲ್ಲಿ ವಾರ್ಡ್‌ಗೆ 1 ಮೂರ್ತಿ ಮಾತ್ರ ಪ್ರತಿಷ್ಠಾಪಿಸಬೇಕು. ಗ್ರಾಮಗಳಲ್ಲಿ ಸ್ಥಳೀಯ ಆಡಳಿತ ಅನುಮತಿ ಮೇರೆಗೆ ಸಾರ್ವಜನಿಕ ಉತ್ಸವ ನಡೆಸಲು ಅವಕಾಶ ನೀಡಲಾಗಿದೆ.
ಯಾವುದೇ ಮೆರವಣಿಗೆ ಮಾಡುವಂತಿಲ್ಲ ಸಾರ್ವಜನಿಕ ಗಣೇಶೋತ್ಸವ ಮೂರ್ತಿಗಳ ಪ್ರತಿಷ್ಠಾಪನೆ ಸ್ಥಳದಲ್ಲಿ ಸಾಂಸ್ಕೃತಿಕ/ ಸಂಗೀತ/ ನೃತ್ಯ ಮುಖ್ಯವಾಗಿ ಡಿ. ಜೆ. ಯ ಮೂಲಕ ಹಾಗೂ ಇನ್ನಿತರ ಯಾವುದೇ ಮನೋರಂಜನಾ ಕಾರ್ಯಕ್ರಮ ಆಯೋಜನೆ ಮಾಡುವಂತಿಲ್ಲ. ಯಾವುದೇ ಮೆರವಣಿಗೆಯನ್ನು ಮಾಡತಕ್ಕದ್ದಲ್ಲ ಎಂದು ತಿಳಿಸಲಾಗಿದೆ.
ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರಬಾರದು ಹಬ್ಬ-ಹರಿದಿನಗಳು ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂರಕವಾಗಿರುವುದರಿಂದ ಗಣೇಶೋತ್ಸವ ಹಬ್ಬವನ್ನು ಅದೇ ರೀತಿಯಿಂದ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ಕಾಪಾಡಬೇಕೆಂದು ಸೂಚಿಸಲಾಗಿದೆ.
Share your comments