ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಲು ತೀರ್ಮಾನಿಸಿಸಿದೆ. ವಿಶೇಷವಾಗಿ ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಪರ್ಯಾಯವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ.
ರಾಜ್ಯದಲ್ಲಿ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡಿಬೇಕೆಂಬುದು ಒತ್ತಾಯವಿತ್ತು. ಶಾಲೆಗಳಲ್ಲಿ ಶಿಕ್ಷಕರ ಹುದ್ದೆ ಖಾಲಿಯಿರುವುದರಿಂದ ವಿದ್ಯಾರ್ಥಿಗಳ ಶಿಕ್ಷಣಕ್ಕೆ ತೊಂದರೆಯಾಗುತ್ತಿತ್ತು. ಆದ್ದರಿಂದ ವಿದ್ಯಾರ್ಥಿಗಳ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಮುಂದಾಗಿದೆ.
ಬೆಂಗಳೂರು ವಿಭಾಗದಲ್ಲಿ 430, ಮೈಸೂರು 808, ಬೆಳಗಾವಿ 982 ಹಾಗೂ ಕಲಬುರ್ಗಿ ವಿಭಾಗದಲ್ಲಿ 1,253 ಸೇರಿದಂತೆ ಒಟ್ಟು 3,473 ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ನೇಮಕ ಮಾಡಲಾಗುವ ಶಿಕ್ಷಕರಿಗೆ ಪ್ರತಿ ತಿಂಗಳ ಗೌರವ ಸಂಭಾವನೆ 8 ಸಾವಿರ ರೂಪಾಯಿನಿಗದಿ ಮಾಡಲಾಗಿದೆ.
ಅನುದಾನಿತ ಶಾಲೆಗಳಲ್ಲಿ ಇರುವ ಹೆಚ್ಚುವರಿ ಶಿಕ್ಷಕರನ್ನು ಕೊರತೆ ಇರುವ ಸರ್ಕಾರಿ ಶಾಲೆಗಳಲ್ಲಿ ಒಒಡಿ ಆಧಾರದ ಮೇಲೆ ಹಂಚಿಕೆ ಮಾಡುವಂತೆ ಆಯಾ ಜಿಲ್ಲೆ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಇಲಾಖೆ ಸೂಚಿಸಿದೆ.
ಅಗತ್ಯಕ್ಕಿಂತ ಹೆಚ್ಚು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂಡಲ್ಲಿ ಈ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು. ಫೆ.21ರಿಂದ ಮೇ 21ರವರೆಗೆ ಈ ಆದೇಶ ಅನ್ವಯವಾಗಲಿದೆ. ಅಂದರೆ, ನಾಲ್ಕು ತಿಂಗಳವರೆಗೆ ಮಾತ್ರ ಅನುದಾನದ ಬೇಡಿಕೆ ಸಲ್ಲಿಸಲಾಗಿದೆ ಎಂದೂ ಇಲಾಖೆ ಹೇಳಿದೆ.