News

ಉತ್ತರ ಕನ್ನಡದಲ್ಲಿ ವರುಣನ ಅಬ್ಬರ: ಮನೆಗಳಿಗೆ ನುಗ್ಗಿದ ನೀರು

10 July, 2020 10:37 AM IST By:

ಮಹಾರಾಷ್ಟ್ರದ ಪಶ್ಚಿಮ ಘಟ್ಟ, ಮಹಾಬಳೇಶ್ವರ ಹಾಗೂ ಪಾಟಗಾಂವ ಪ್ರದೇಶದಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕೃಷ್ಣಾ, ದೂಧಗಂಗಾ, ವೇದಗಂಗಾ ನದಿಗಳು ಉಕ್ಕಿ ಹರಿಯುತ್ತಿವೆ. ಚಿಕ್ಕೋಡಿ  ಉಪವಿಭಾಗದಲ್ಲಿ ಆರು ಸೇತುವೆಗಳು ಜಲಾವೃತ್ತಗೊಂಡ ರಸ್ತೆ ಸಂಚಾರ ಕಡಿತಗೊಂಡಿದೆ.

ಸೇತುವೆ ಬಳಿ ಬ್ಯಾರಿಕೇಡ್ ಅಳವಡಿಸಿರುವ ಪೊಲೀಸ್ ಇಲಾಖೆ ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿ, ಜನರು ನದಿಗೆ ಇಳಿಯದಂತೆ ಮುನ್ನೆಚ್ಚರಿಕೆ ಕ್ರಮಕೈಗೊಂಡಿದ್ದಾರೆ. ನದಿಗಳು ಅಪಾಯಮಟ್ಟ ಮೀರಿ ಹರಿಯತೊಡಗಿದ್ದರಿಂದ ಎಚ್ಚರಿಕೆವಹಿಸಲಾಗಿದೆ.

ಉತ್ತರ ಕನ್ನಡ ಜಿಲ್ಲಾದ್ಯಂತ ಗುರುವಾರ ಭಾರೀ ಮಳೆಯಾಗಿರುವ ಪರಿಣಾಮ ನೂರಾರು ಮನೆಗಳಿಗೆ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಉತ್ತರ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿರುವುದರಿಂದ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ.

ಅಂಕೋಲಾ ತಾಲ್ಲೂಕಿನ ಅವರ್ಸಾ, ಹಟ್ಟಿಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮನೆಗಳಿಗೆ ನೀರು ನುಗ್ಗಿತ್ತು. ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ನೆರವಿನಿಂದ ನಿವಾಸಿಗಳು ಸುರಕ್ಷಿತ ಪ್ರದೇಶಕ್ಕೆ ತೆರಳಿದರು. ಕಾರವಾರ ತಾಲ್ಲೂಕಿನ ಕಿನ್ನರದಲ್ಲೂ ಮನೆಗಳು ಜಲಾವೃತವಾದವು. 

ಬೆಳಗಾವಿ, ಧಾರವಾಡ, ವಿಜಯಪುರ, ಬಾಗಲಕೋಟೆ ಜಿಲ್ಲೆ ಗಳಲ್ಲಿ ಉತ್ತಮ ಮಳೆಯಾಗಿದೆ. ದೂಧ್‌ಗಂಗಾ ನದಿಯಿಂದ15,488 ಕ್ಯುಸೆಕ್, ರಾಜಾಪುರ ಬ್ಯಾರೇಜ್‌ನಿಂದ 46,750 ಕ್ಯುಸೆಕ್ ಸೇರಿ ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ ಬಳಿ ಕೃಷ್ಣಾ ನದಿಗೆ 62,228 ಕ್ಯುಸೆಕ್ ನೀರು ಸೇರಿಕೊಳ್ಳುತ್ತಿದೆ.

ಘಟಪ್ರಭಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳಗೊಂಡಿದ್ದು ಮಿರ್ಜಿ–ಮಲ್ಲಾಪುರ ನಡುವಿನ ಸೇತುವೆ ಮುಳುಗಡೆಯಾಗಿದೆ. ಇದರಿಂದ ಮಹಾಲಿಂಗಪುರ, ಯಾದವಾಡ ಸಂಪರ್ಕ ರಸ್ತೆಯ ಮೇಲೆ ನೀರು ಹರಿಯುತ್ತಿದ್ದು, 10 ಗ್ರಾಮಗಳಿಗೆ ಸಂಚಾರ ಸ್ಥಗಿತಗೊಂಡಿದ್ದು, ಪ್ರವಾಹ ಭೀತಿ ಎದುರಾಗಿದೆ.

ಚಾರ್ಮಾಡಿ ಘಾಟಿ ಭಾಗದಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಮಾರ್ಗದಲ್ಲಿ ಗುಡ್ಡದ ಮಣ್ಣು ಕುಸಿಯುವ ಸಾಧ್ಯತೆ ಇದ್ದು, ಮುಂಜಾಗ್ರತೆಯಾಗಿ ರಾತ್ರಿ 7ರಿಂದ ಬೆಳಿಗ್ಗೆ 7ಗಂಟೆ ವರೆಗೆ ನಿರ್ಬಂಧ ಹೇರಲಾಗಿದೆ.