ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಅಂದಾಜು
ಮುಂದಿನ 24 ಘಂಟೆಗಳು ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಎಲ್ಲ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 24 ಘಂಟೆಗಳು: ಉತ್ತರ ಒಳನಾಡಿನ ಕಲಬುರ್ಗಿ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಮತದಾನ ಜಾಗೃತಿ ಗಮನ ಸೆಳೆದ ರಂಗೋಲಿ ಸ್ಪರ್ಧೆ
ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾರರ ಶಿಕ್ಷಣ ಮತ್ತು ಜಾಗೃತಿ(ಸ್ವೀಪ್) ಕಾರ್ಯಕ್ರಮದಡಿ ಕೊಡಗು ಜಿಲ್ಲೆಯಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವಲ್ಲಿ ಕೊಡಗು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ತಾಲ್ಲೂಕು ಸ್ವೀಪ್ ಸಮಿತಿ ಹಾಗೂ ಸ್ತ್ರೀಶಕ್ತಿ ಒಕ್ಕೂಟಗಳ ವತಿಯಿಂದ ನಗರದ ಗಾಂಧಿ ಮೈದಾನದಲ್ಲಿ ರಂಗೋಲಿ ಸ್ಪರ್ಧಾ ಕಾರ್ಯಕ್ರಮವು ಭಾನುವಾರ ಜರುಗಿತು. ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಹಾಗೂ ಜಿ.ಪಂ.ಸಿಇಒ ಡಾ.ಎಸ್.ಆಕಾಶ್ ಅವರು ರಂಗೋಲಿ ಸ್ಪರ್ಧಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷರಾದ ರೆಹನಾ ಸುಲ್ತಾನ, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಪ್ರಧಾನ ಆಯುಕ್ತರಾದ ಕೆ.ಟಿ.ಬೇಬಿಮ್ಯಾಥ್ಯು ಮಡಿಕೇರಿ ತಾಲ್ಲೂಕು ಜಾನಪದ ಪರಿಷತ್ ಅಧ್ಯಕ್ಷರಾದ ಅನಿಲ್ ಎಚ್.ಟಿ., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಎನ್.ಮಂಜುನಾಥ್, ಸಿಡಿಪಿಒಗಳಾದ ಸೀತಾಲಕ್ಷ್ಮಿ, ಸವಿತಾ ಇತರರು ಇದ್ದರು. ಮಡಿಕೇರಿ ತಾಲ್ಲೂಕಿನಿಂದ ಸುಮಾರು 30 ಕ್ಕೂ ಹೆಚ್ಚು ಮಹಿಳೆಯರು ರಂಗೋಲಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಚುನಾವಣೆ ಹಿನ್ನೆಲೆ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 40 ಅಕ್ಕಿ ಪಾಕೇಟ್ ವಶಕ್ಕೆ
ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೊಪ್ಪಳ ಪೊಲೀಸ್, ಅಬಕಾರಿ ಸೇರಿದಂತೆ ವಿವಿಧ ತಂಡಗಳಿಂದ ಕಾರ್ಯಾಚರಣೆ ಮುಂದುವರೆದಿದ್ದು ಏಪ್ರೀಲ್ 29ರಂದು 80 ಸಾವಿರ ರೂ ಮೌಲ್ಯದ 40 ಅಕ್ಕಿ ಪಾಕೇಟಗಳನ್ನು ವಶಕ್ಕೆ ಪಡೆಯಲಾಗಿದೆ. ಅದೇ ರೀತಿ ಚುನಾವಣೆ ಸಂಬಂಧ 1 ಹಾಗೂ ಅಬಕಾರಿ ಕಾಯ್ದೆ ಉಲ್ಲಂಘನೆ ಕುರಿತಂತೆ 1 ಸೇರಿ ಏಪ್ರಿಲ್ 29ರಂದು ಮತ್ತೆರಡು ಪ್ರಕರಣಗಳು ದಾಖಲಾಗಿವೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ತಿಳಿಸಿದ್ದಾರೆ. 49,563 ರೂ. ಮೌಲ್ಯದ 97.80 ಲೀಟರ್ ಮದ್ಯೆ ವಶಕ್ಕೆ ಪಡೆಯಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕರ್ನಾಟಕ ವಿಧಾನಸಭೆ ಚುನಾವಣೆ: ಮೈಸೂರಲ್ಲಿ ಮೋದಿ ಮೇನಿಯಾ
ಇದೇ ತಿಂಗಳ ೧೦ ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ಪ್ರಚಾರ ಬಿರುಸುಗೊಂಡಿದೆ. ಎಲ್ಲಾ ಪ್ರಮುಖ ರಾಜಕೀಯ ಪಕ್ಷಗಳು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿ ಹಿರಿಯ ಮುಖಂಡ ಹಾಗೂ ಪ್ರಧಾನಿ ನರೇಂದ್ರ ಮೋದಿ ನಿನ್ನೆ ಸಂಜೆ ಮೈಸೂರಿನಲ್ಲಿ ರೋಡ್ ಶೋ ನಡೆಸುವ ಮೂಲಕ ಪಕ್ಷದ ಅಭ್ಯರ್ಥಿ ಪರ ಪ್ರಚಾರ ನಡೆಸಿದರು.
ಇದಕ್ಕೂ ಮುನ್ನಾ ಅವರು, ಕೋಲಾರ ಹಾಗೂ ಚೆನ್ನಪಟ್ಟಣದಲ್ಲಿ ಬಿಜೆಪಿ ಚುನಾವಣಾ ಸಮಾವೇಶದಲ್ಲಿ ಪಾಲ್ಗೊಂಡು ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದರು. ರಾಯಚೂರಿನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಿಜೆಪಿ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು. ಹಾವೇರಿ ಜಿಲ್ಲೆ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಚಾರ ನಡೆಸಿದರು.