ರಾಜ್ಯದಲ್ಲಿ ಮತ್ತೆ ಮುಂಗಾರು ಬಿರುಸುಗೊಂಡಿರುವುದರಿಂದ ರಾಜ್ಯದ ಕರಾವಳಿ ಹಾಗೂ ಒಳನಾಡಿನ 12 ಜಿಲ್ಲೆಗಳಲ್ಲಿ 11 ರಿಂದ 13 ರವರೆಗೆ ಧಾರಾಕಾರ ಮಳೆಯಾಗುವ ಸಾಧ್ಯತೆಯಿರುವುದರಿಂದ 12 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಆಂಧ್ರ ಹಾಗೂ ತೆಲಂಗಾಣದಲ್ಲಿ ಭಾರಿ ಮಳೆಯಾಗುತ್ತಿದೆ. ಇದರ ಪರಿಣಾಮ ಕರ್ನಾಕದ ಮೇಲಾಗಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ.
ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಗುಡುಗು ಸಿಡಿಲು ಸಹಿತ ವ್ಯಾಪಕ ಮಳೆಯಾಗುವ ಮನ್ಸೂಚನೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.
ಭಾನುವಾರ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಜೊತೆಗೆ ಧಾರವಾಡ, ಗದಗ, ಹಾವೇರಿ, ಕೊಪ್ಪಳ ಹಾಗೂ ಕಲಬುರಗಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ.
ಸೋಮವಾರ ಕರಾವಳಿ ಜಿಲ್ಲೆಗಳ ಜತೆ ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯದ ವಿವಿಧೆಡೆ ಮಳೆ: ಸಿಡಿಲು ಬಡಿದು ಮೂವರು ಸಾವು:
ರಾಜ್ಯದ ಹಲವು ಭಾಗದಲ್ಲಿ ಗುಡುಗು–ಸಿಡಿಲು ಸಹಿತ ಶನಿವಾರ ರಭಸದ ಮಳೆಯಾಗಿದೆ. ವಿಜಯಪುರ ಜಿಲ್ಲೆಯಲ್ಲಿ ತಾಯಿ, ಮಗಳು ಹಾಗೂ ಚಿತ್ರದುರ್ಗ ಜಿಲ್ಲೆ ಯಲ್ಲಿ ರೈತರೊಬ್ಬರು ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ಚಿತ್ರದುರ್ಗ ತಾಲ್ಲೂಕಿನಲ್ಲಿ ಒಂದೇ ದಿನದಲ್ಲಿ 14 ಸೆಂ.ಮೀ. ದಾಖಲೆಯ ಮಳೆಯಾಗಿದೆ. ಧಾರವಾಡ, ಬೆಳಗಾವಿ, ವಿಜಯಪುರ, ಹಾವೇರಿ, ಬಳ್ಳಾರಿ, ಬಾಗಲಕೋಟೆ, ಕೊಡಗು, ಹಾಸನ, ಮಂಡ್ಯ, ಕಲಬುರ್ಗಿ ಜಿಲ್ಲೆಯ ವಿವಿಧೆಡೆ ಧಾರಾಕಾರ ಮಳೆಯಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ.
. ಬೆಳ್ತಂಗಡಿ ತಾಲೂಕಿನ ಮೇಲಂತಬೆಟ್ಟುವಿನಲ್ಲಿ ಅತಿ ಹೆಚ್ಚು ಅಂದರೆ 148 ಮಿ.ಮೀ. ಹಾಗೂ ಧಾರವಾಡ ಜಿಲ್ಲೆಯ ನವಲಗುಂದದಲ್ಲಿ130 ಮಿ.ಮೀ. ಮಳೆಯಾಗಿದೆ. ಉಜಿರೆ, ಸುಳ್ಯ, ಬಂಟ್ವಾಳ, ಮಂಗಳೂರು ತಾಲೂಕುಗಳಲ್ಲಿ ಹೆಚ್ಚು ಮಳೆ ಸುರಿದಿದೆ.
ರಾಜಧಾನಿ ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆ:
ಬೆಂಗಳೂರಿನಲ್ಲಿ ಶನಿವಾರ ರಾತ್ರಿ ಸುಮಾರು ಎರಡು ಗಂಟೆಗಳ ಕಾಲ ನಿರಂತರವಾಗಿ ಸುರಿದ ಮಳಯಿಂದಾಗಿ ಶಿವಾನಂದ ವೃತ್ತ ಮತ್ತು ಓಕಳಿಪುರ ಅಂಡರ್ ಪಾಸಗಳಲ್ಲಿ 2 ಅಡಿಗೂ ಹೆಚ್ಚು ನೀರಿ ನಿಂತುಕೊಂಡಿತ್ತು. ಜೊತೆಗೆ ರಸ್ತೆಗಳಉ ತಗ್ಗುಪ್ರದೇಶಗಳಲ್ಲಿ ನೀರು ತುಂಬಿಕೊಂಡಿದ್ದರಿಂದ ವಾಹನ ಸವಾರರು ಪರದಾಡಿದರು.