News

ಇಂದಿನಿಂದ ರಾಜ್ಯದ 16 ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ-ಯೆಲ್ಲೋ ಅಲರ್ಟ್

24 October, 2020 7:38 AM IST By:

ಕಳೆದ ಹದಿನೈದು ದಿನಗಳಿಂದ ರಾಜ್ಯದಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ, ನವರಾತ್ರಿ ಸಂಭ್ರಮಕ್ಕೂ ಅಡಿಯಾಗುವ ಸಾಧ್ಯತೆಯಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಪರಿಣಾಮದಿಂದಾಗಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಅಕ್ಟೋಬರ್ 24 ಮತ್ತು 25 ರಂದು ಗುಡುಗು ಡಿಸಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಗಸ್ಟ್, ಸೆಪ್ಟೆಂಬರ್ ಮತ್ತು ಅಕ್ಟೋಬರ್ ಈ ಮೂರು ತಿಂಗಳಲ್ಲಿ ಸುರಿದ ಮಳೆಯಿಂದಾಗಿ ರಾಜ್ಯದಲ್ಲಿ ಅಪಾರ ಪ್ರಮಾಣ ಬೆಳೆ, ಆಸ್ತಿಪಾಸ್ತಿ ಹಾನಿಯಾಯಿತು. ಪ್ರವಾಹ ಉಂಟಾಗಿ ಕಟಾವಿಗೆ ಬಂದ ಬೆಳೆ ಕೊಚ್ಚಿಕೊಂಡು ಹೋಯಿತು.  ವರುಣನ ಆರ್ಭಟಕ್ಕೆ ಜನಜೀವನ ಅಸ್ತವ್ಯಸ್ತವಾಗಿತ್ತು.

ನವರಾತ್ರಿ ಹಬ್ಬವನ್ನಾದರೂ ಸರಳವಾಗಿ ಶಾಂತವಾಗಿ ಆಚರಿಸಲು ಸಿದ್ದಗೊಂಡ ಜನರಿಗೆ ಮಳೆ ಸುರಿಯುವ ಸಾಧ್ಯತೆಯಿರುವುದರಿಂದ ಆತಂಕ ಎದುರಾಗಿದೆ. ಆಯುಧಪೂಜೆ, ವಿಜಯದಶಮಿ ಹಬ್ಬದ ದಿನವೂ ಮಳೆಯಾಗುವ ಮುನ್ಸೂಚನೆಯಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಮತ್ತು ತುಮಕೂರಿನಲ್ಲಿ ಹಾಗೂ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು ಮತ್ತು ಹಾಸನದಲ್ಲಿ ಅಕ್ಟೋಬರ್ 25 ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 26ರವರೆಗೆ ಮಳೆಯಾಗಲಿದೆ. ಉತ್ತರ ಒಳನಾಡಿನಾದ್ಯಂತ ಮಳೆ ತಗ್ಗಿದ್ದು, ಕೆಲ ಭಾಗಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ.