ರಾಜ್ಯದ ವಿವಿಧೆಡೆ ಮುಂಗಾರು ಮಳೆ ತೀವ್ರಗೊಂಡಿದ್ದು, ಇನ್ನೆರಡು ದಿನ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆಯಿರುವುದರಿಂದ ಜೂನ್ 19 ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಶುಕ್ರವಾರ ಸುರಿದ ಮಳೆಯಿಂದಾಗಿ ರೈತನೊಬ್ಬ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾನೆ. ಬೆಳಗಾವಿ ಜಿಲ್ಲೆಯ ಕಾಕತಿ ಗ್ರಾಮದ ರೈತ ಸಿದ್ರಾಯಿ ದೊಡ್ಡರಾಮ ಸುತಗಟ್ಟಿ (65) ಎಂದು ಗುರುತಿಸಲಾಗಿದೆ. ಹೊಲದಲ್ಲಿ ಕೆಲಸ ಮುಗಿಸಿಕೊಂಡು ಮನೆಗೆ ವಾಪಸ್ಸು ಹೋಗುವಾಗ ಮಾರ್ಕಂಡೇಯ ನದಿಯ ಸೇತುವೆ ಬಳಿ ಕೈಕಾಲು ತೊಳೆದುಕೊಳ್ಲು ಹೋದಾಗ ಕಾಲು ಜಾರಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾನೆ.
ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಜೂನ್ 19 ರಂದು ಭಾರಿ ಮಳೆಯಾಗುವದರಿಂದ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಜೂನ್ 21 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂನ್ 19 ರಂದು ಧಾರಾಕಾರ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 4.8 ಮೀಟರ್ ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.
ಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದ್ದು, ಈ ಭಾಗದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಪಾಯಮಟ್ಟ ಮೀರಿ ಹರಿಯುತ್ತಿವೆ ನದಿಗಳು
ನೆರೆಯ ಮಹಾರಾಷ್ಟ್ರದ ಕೊಂಕಣ ಭಾಗ ಹಾಗೂ ರಾಜ್ಯದ ಗಡಿ ಭಾಗದಲ್ಲಿ ಕಳೆದ 24 ಗಂಟೆಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಗಡಿ ಭಾಗದ ನದಿಗಳು ಅಪಾಯಮಟ್ಟ ಮೀರಿ ಹರಿಯುತ್ತಿದೆ.ವೇದಗಂಗಾ ಹಾಗೂ ದೂಧಗಂಗಾ ನದಿಯ ಐದು ಸೇತುವೆಗಳು ಮುಳುಗಡೆಗೊಂಡಿದ್ದು, ಸಂಚಾರ ಕಡಿತಗೊಂಡಿದೆ.
ಹಿಪ್ಪರಗಿ ಜಲಾಶಯದ ಒಳಹರಿವು 97000 ಕ್ಯೂಸೆಕ್
ಕಳೆದ ಕೆಲವು ದಿನಗಳಿಂದ ಕೃಷ್ಣಾ ಜಲಾನಯನ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಪ್ರಮಾಣದ ಮಳೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿ ಸಮೀಪದಲ್ಲಿ ಹರಿಯುತ್ತಿರುವ ಕೃಷ್ಣಾ ನದಿಗೆ ಶುಕ್ರವಾರ ಭಾರಿ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹಿಪ್ಪರಗಿ ಜಲಾಶಯಕ್ಕೆ ಶುಕ್ರವಾರ 97000 ಕ್ಯೂಸೆಕ್ ನೀರು ಹರಿದು ಬಂದಿದೆ. ಹೊರ ಹರಿವು 96 ಸಾವಿರ ಕ್ಯೂಸೆಕ್ ಇದೆ. ಜಲಾಶಯದಲ್ಲಿ ನೀರಿನ ಮಟ್ಟ 521 ಮೀಟರ್ ಇದೆ. ಮುಂದಿನ ದಿನಗಳಲ್ಲಿ ನದಿಯೂ ಅಪಾಯಮಟ್ಟ ಮೀರಿ ಹರಿಯುವ ಸಾಧ್ಯತೆಯಿರುವುದರಿಂದ ನದಿ ಪಾತ್ರದ ಜನರು, ತಮ್ಮ ಪಾತ್ರೆ ಹಾಗೂ ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಗಳಿಗೆ ತೆರಳಬೇಕೆಂದು ತಹಸೀಲ್ದಾರ ಮನವಿ ಮಾಡಿದ್ದಾರೆ.
ಕೃಷ್ಣಾ ಕಣಿವೆಯಲ್ಲಿ ಭಾರಿ ಮಳೆ-ಮೈದುಂಬಿ ಹರಿಯುತ್ತಿರುವ ಕೃಷ್ಣಾ
ಕೃಷ್ಣಾ ಕಣಿವೆಯಲ್ಲಿ ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಕೃಷ್ಣೆ ಈಗ ಮೈದುಂಬಿ ಅಪಾಯದ ಮಟ್ಟ ಮೀರಿ ಹರಿಯುವ ಸಾಧ್ಯತೆಯಿದೆ.
ಕೇರಳದ ವೈನಾಡು ಪ್ರದೇಶದಲ್ಲಿ ಭರ್ಜರಿ ಮಳೆಯಾಗುತ್ತಿರುವುದರಿಂದ ಮೈಸೂರು ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯದ ಒಳಹರಿವು ಹೆಚ್ಚಾಗಿದ್ದು, ಎರಡು ಮೂರು ವಾರಗಳಲ್ಲಿ ಜಲಾಶಯ ಸಂಪೂರ್ಣ ಭರ್ತಿಯಾಗುವ ನಿರೀಕ್ಷೆಯಿದೆ.