ಪ್ರಮುಖ ಸುದ್ದಿಗಳನ್ನು ತಲುಪಿಸುವ ಉದ್ದೇಶದಿಂದ ಕೃಷಿ ಜಾಗರಣ ಕನ್ನಡ ಅಗ್ರಿನ್ಯೂಸ್ ಪರಿಚಯಿಸಿದೆ.
ಇಂದಿನ ಐದು ಪ್ರಮುಖ ಸುದ್ದಿಗಳ ವಿವರ ಇಲ್ಲಿದೆ. ಇಂದಿನ ಪ್ರಮುಖ ಸುದ್ದಿಗಳು ಈ ರೀತಿ ಇವೆ.
1. ಕಾವೇರಿ ವಿವಾದ: ಬೆಂಗಳೂರು ಬಂದ್‌ಗೆ ಮಿಶ್ರ ಪ್ರತಿಕ್ರಿಯೆ!
2. ಪ್ರತಿಭಟನಾಕಾರರ ಬಂಧನ: ಎಚ್.ಡಿ ಕುಮಾರಸ್ವಾಮಿ ಕಿಡಿ
3. ಪ್ರಜಾಪ್ರಭುತ್ವದಲ್ಲಿ ಪ್ರತಿಭಟಿಸುವ ಹಕ್ಕು ಎಲ್ಲರಿಗೂ ಇದೆ: ಸಿ.ಎಂ
4. ರಾಜ್ಯದಲ್ಲಿ ಮೋಡ ಬಿತ್ತನೆ ಕುರಿತು ಶೀಘ್ರ ನಿರ್ಧಾರ: ಡಿ.ಕೆ. ಶಿವಕುಮಾರ್
5. ರಾಜ್ಯದ ಉತ್ತರ ಒಳನಾಡಿನಲ್ಲಿ ಎರಡು ದಿನ ಭಾರೀ ಮಳೆ
ಸುದ್ದಿಗಳ ವಿವರ ಈ ರೀತಿ ಇದೆ.
1. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿ, ಕಾವೇರಿ ಜಲ ಸಂರಕ್ಷಣಾ ಸಮಿತಿ
ನೇತೃತ್ವದಲ್ಲಿ ಮಂಗಳವಾರ ಬೆಂಗಳೂರು ಬಂದ್‌ಗೆ ಕರೆ ನೀಡಲಾಗಿದ್ದು, ಮಂಗಳವಾರ ಬೆಳಿಗ್ಗೆಯಿಂದಲೇ ರಸ್ತೆಗಳು ಖಾಲಿಯಾಗಿದ್ದವು.
ಕೆಎಸ್‌ಆರ್‌ಟಿಸಿ, ಬಿಎಂಟಿಸಿ ಹಾಗೂ ಮೆಟ್ರೋ ಸೇವೆಯಲ್ಲಿ ಎಂದಿನಂತೆಯೇ ಇತ್ತು.
ಬಸ್‌ಗಳ ಸಂಚಾರವಿದ್ದರೂ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು. ವ್ಯಾಪಾರ ಮತ್ತು ವಹಿವಾಟು ಬಹುತೇಕ ಸ್ಥಬ್ಧವಾಗಿತ್ತು.
---------------------
2. ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು ಎಂದು ಆಗ್ರಹಿಸಿ, ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರನ್ನು ಬಂಧಿಸಿರುವುದಕ್ಕೆ
ಮಾಜಿ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿಯವರು ಕಿಡಿಕಾರಿದ್ದಾರೆ. ಈ ಸಂಬಂಧ ಏಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು,
ಇದೆಂಥಾ ಚೋದ್ಯ? ಒಂದು ಕಡೆ ಮೇಕೆದಾಟು ಬೇಕು ಎಂದು ಪಾದಯಾತ್ರೆ ಮಾಡಿದವರು, ಇಂದು ಕಾವೇರಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿದ್ದ
ರೈತರನ್ನು, ಹೋರಾಟಗಾರರನ್ನು ಬಂಧಿಸಿದ್ದಾರೆ. ರಾತ್ರೋರಾತ್ರಿ ಹೋರಾಟಗಾರರನ್ನು ಬಂಧಿಸಿರುವುದು ಕಾಂಗ್ರೆಸ್ ಸರ್ಕಾರದ
ಕಿಡಿಗೇಡಿತನದ ಪರಮಾವಧಿ. ಕರ್ನಾಟಕದಲ್ಲಿ ಕಾಂಗ್ರೆಸ್ಸಿಗರಿಗೆ ಒಂದು ನ್ಯಾಯ, ಕನ್ನಡಿಗರಿಗೆ ಇನ್ನೊಂದು ನ್ಯಾಯ ಎನ್ನುವುದು ಇದೆಯಾ ಎಂದು ಪ್ರಶ್ನಿಸಿದ್ದಾರೆ.
---------------------
3. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಪ್ರತಿಭಟನೆ ಮಾಡುವ ಅವಕಾಶವಿದೆ.ಇದನ್ನು ಸರ್ಕಾರ ಹತ್ತಿಕ್ಕುವುದಿಲ್ಲ
ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಕಾವೇರಿ ನೀರು ಹರಿಸುವ ಬಗ್ಗೆ ಸುಪ್ರೀಂ ಕೋರ್ಟ್‌ನ ಆದೇಶವಿದೆ.
ಕರ್ನಾಟಕದಿಂದ ನೀರು ಹರಿಸಲು ಸಾಧ್ಯವಿಲ್ಲ ಎಂದು ವಾದ ಮಂಡಿಸಲಾಗಿದೆ.
ಆದರೆ, ರಾಜ್ಯದ ಅರ್ಜಿ ವಜಾ ಆಗಿದ್ದು, ಕಾವೇರಿ ನೀರು ನಿಯಂತ್ರಣ ಸಮಿತಿ ಹಾಗೂ ನಿರ್ವಹಣಾ ಪ್ರಾಧಿಕಾರ
ಎರಡರ ಆದೇಶವನ್ನು ಪ್ರಶ್ನಿಸಿ ಸರ್ಕಾರದಿಂದ ಮೇಲ್ಮನವಿ ಸಲ್ಲಿಸಲಾಗಿತ್ತು.
ಸುಪ್ರೀಂಕೋರ್ಟ್ ಕರ್ನಾಟಕ ಹಾಗೂ ತಮಿಳುನಾಡಿನ ಅರ್ಜಿಯನ್ನು ತಿರಸ್ಕಾರಿಸಿದೆ ಎಂದರು.
---------------------
4. ರಾಜ್ಯದಲ್ಲಿ ಮೋಡ ಬಿತ್ತನೆ ಮಾಡುವ ಕುರಿತು ಶೀಘ್ರ ಸರ್ಕಾರ ನಿರ್ಧಾರಕ್ಕೆ ಬರಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಈಚೆಗೆ ಬೆಂಗಳೂರು ನಗರ ಹಾಗೂ ಸುತ್ತಮುತ್ತ ಸುರಿದ ಮಳೆಯಿಂದ ಪರಿಸ್ಥಿತಿ ಸ್ವಲ್ಪ ಸುಧಾರಿಸಿದೆ.
ಮೋಡ ಬಿತ್ತನೆಯಿಂದ ಪರಿಸ್ಥಿತಿ ಸುಧಾರಿಸಬಹುದು ಎಂಬ ನಂಬಿಕೆ ಇದೆ.
ಸಚಿವ ಸಂಪುಟ ಸಭೆಯಲ್ಲಿ ಮೋಡ ಬಿತ್ತನೆ ಹಾಗೂ ಕಾವೇರಿ ನೀರು ಸಂಕಷ್ಟದ ಬಗ್ಗೆ ಚರ್ಚೆಸಲಾಗುವುದು ಎಂದಿದ್ದಾರೆ.
---------------------
5. ರಾಜ್ಯದ ವಿವಿಧ ಭಾಗದಲ್ಲಿ ಸಾಧಾರಣ ಮಳೆ ಮುಂದುವರಿದಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಗದಗ, ಕಲಬುರಗಿ,
ಕೊಪ್ಪಳ, ವಿಜಯಪುರ ಹಾಗೂ ಯಾದಗಿರಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಗುಡುಗು ಸಹಿತ ಮಳೆಯಾಗಲಿದೆ.
ಇನ್ನು ಸೋಮವಾರ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಮಳೆಯಾಗಿರುವುದು ವರದಿ ಆಗಿದೆ.
ಚಿತ್ರಕೃಪೆ: pexels