News

ರಾಜ್ಯದಲ್ಲಿ ಆ. 2 ರಿಂದ 5 ದಿನ ಭಾರಿ ಮಳೆ ಸಾಧ್ಯತೆ-ಹವಾಮಾನ ಇಲಾಖೆ ಮುನ್ಸೂಚನೆ

02 August, 2020 1:28 PM IST By:

ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ 5 ದಿನ ಭಾರಿ ಮಳೆ (Heavy rain) ಯಾಗಲಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಆ.2ರಿಂದ ಆ.6ರವರೆಗೆ ಆರೆಂಜ್ ಅಲರ್ಟ್ (Orange Alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯ ದಕ್ಷಿಣಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ 115 ಸೆಂ.ಮೀ.ನಿಂದ 204 ಸೆಂ.ಮೀಟರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ ಹಾಗೂ ರಾಯಚೂರಿನಲ್ಲಿ ಆ.3ರಂದು ಯೆಲ್ಲೋ ಅಲರ್ಟ್ (Yellow alert) ಇರಲಿದೆ.
ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗದಲ್ಲಿ ಮುಂದಿನ 2 ದಿನ ಯೆಲ್ಲೋ ಅಲರ್ಟ್ ಇದ್ದರೆ ಆ.4ರಿಂದ ಆ.6ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಆ. 4ಕ್ಕೆ ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ಆ. 5ಕ್ಕೆ ಬೀದರ್ ಹಾಗೂ ಕಲಬುರಗಿಯಲ್ಲಿ, ಆ. 6ಕ್ಕೆ ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿಯಲ್ಲಿ ಯೆಲ್ಲೋ ಆಲರ್ಟ್ ಘೋಷಿಸಲಾಗಿದೆ.