ರಾಜ್ಯದಲ್ಲಿ ಅರ್ಭಟಿಸುತ್ತಿರುವ ಮುಂಗಾರು ಮಳೆ ಆಗಸ್ಟ್ 7 ರಿಂದ 5 ದಿನ ಮುಂದುವರಿಯಲಿದ್ದು, ದೈನಂದಿನ ಜನಜೀವನ ಮತ್ತಷ್ಟು ಅಸ್ತವ್ಯಸ್ತವಾಗಲಿದೆ.
ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆ.7ರಂದು ರೆಡ್ ಅಲರ್ಟ್ ಹಾಗೂ ಆ.8-10ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಲ್ಲಿ ಆ. 7 ರಂದು ಅತೀ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಹಾಗಾಗಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ (Red alert) ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 11 ರವರೆಗೆ ವ್ಯಾಪಕ ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (Yellow alert) ಘೋಷಿಸಲಾಗಿದೆ.
ಕರಾವಳಿ ಭಾಗದಲ್ಲಿ ಗಂಟೆಗೆ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಟ 5.7 ಮೀಟರ್ ನಷ್ಟು ಎತ್ತರದ ಅಲೆಗಳೂ ಏಳುವ ಸಾಧ್ಯತೆಯಿದೆ. ಕರಾವಳಿಯಲ್ಲಿ ಗಾಳಿ ವೇಗ ಹೆಚ್ಚಿರುವುದರಿಂದ ಮೀನುಗಾರರು (fishers) ಸಮುದ್ರಕ್ಕೆ ಇಳಿಯಬಾರದು ಹಾಗೂ ಸಮುದ್ರ ತೀರದ ನಿವಾಸಿಗಳು ಎಚ್ಚರಿಕೆಯಿಂದಿರಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.