News

ಐದು ದಿನ ರಾಜ್ಯದಲ್ಲಿ ಭಾರಿ ಮಳೆ; ಕರಾವಳಿಯಲ್ಲಿ ರೆಡ್ ಅಲರ್ಟ್

10 September, 2020 7:16 AM IST By:

ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ಇದೇ ರೀತಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಕರಾವಳಿ ಭಾಗದ ಉತ್ತರ ಕನ್ನಡ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಸೆ.11ರಂದು ಈ  ಮೂರೂ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ರಾಜ್ಯದಲ್ಲಿ ಸೆ.14 ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆ ಇದೆ

ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದೆ. ಈ ಅವಧಿಯಲ್ಲಿ 205 ಮಿಮೀಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

7 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್: ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಗುರುವಾರ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ರಾಯಚೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳವರೆಗೆ ವ್ಯಾಪಕ ಮಳೆಯಾಗುವ ನಿರೀಕ್ಷೆಯಿದ್ದು, ‘ಯೆಲ್ಲೊ ಅಲರ್ಟ್’ ಘೋಷಿಸಿದೆ.

ಕರಾವಳಿಯಲ್ಲಿ ಗರಿಷ್ಠ 2.6 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿವೆ. ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು’ ಎಂದು ಎಚ್ಚರಿಸಿದ್ದಾರೆ.