ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ರಾಜ್ಯದ ಕರಾವಳಿ ಭಾಗದಲ್ಲಿ ಜುಲೈ 11 ಮತ್ತು 12 ರಂದು ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.ಅದರಲ್ಲೂ ಕೊಡಗಿನಲ್ಲಿ ಭಾರೀ ಮಳೆಯಿಂದಾಗಿ ಕೆಲ ಗುಡ್ಡ ಕುಸಿಯುವ ಹಂತ ತಲುಪಿದ ಕಾರಣ ಆ ಜಿಲ್ಲೆಯನ್ನು ಹವಾಮಾನ ಇಲಾಖೆ ರೆಡ್ ಅಲರ್ಟ್ ಎಂದು ಘೋಷಿಸಿದೆ. ಕರಾವಳಿಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, 3.3 ಮೀಟರ್ ಗಳಷ್ಟು ಎತ್ತರದ ಅಲೆಗಳೂ ಏಳುತ್ತಿವೆ. ಹಾಗಾಗಿ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಕೆ ನೀಡಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲೂ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಇದೇ 13 ರಿಂದ ಮಳೆ ಪ್ರಮಾಣ ಹೆಚ್ಚಾಗಲಿದೆ.