ರಾಜ್ಯ ಸರ್ಕಾರವು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ಪ್ರಮುಖ ತೀರ್ಮಾನಗಳನ್ನು ತೆಗೆದುಕೊಂಡಿದೆ.
ಕಳೆದ ಬಾರಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಐದು ಪ್ರಮುಖ ಗ್ಯಾರಂಟಿಗಳ ಜಾರಿ ಸಂಬಂಧ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ತೀರ್ಮಾನಗಳು ಈ ರೀತಿ ಇವೆ.
* ಅನ್ನಭಾಗ್ಯ ಯೋಜನೆ ಜಾರಿಗೆ ನೆರೆರಾಜ್ಯಗಳಿಂದ ಅಕ್ಕಿ ಖರೀದಿಸಲು ನಿರ್ಧಾರ.
* ನಾಡಿನ ರೈತರ ಹಿತದೃಷ್ಟಿಯಿಂದ ಎಪಿಎಂಸಿ ಕಾಯ್ದೆಯ ತಿದ್ದುಪಡಿಯನ್ನು ರದ್ದುಪಡಿಸಲು ಸಂಪುಟ ಅನುಮೋದನೆ ನೀಡಿದೆ.
*ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳಿಗೆ ಆಡಳಿತಾತ್ಮಕ ವೆಚ್ಚಗಳ ಮಿತಿಯನ್ನು 28 ಕೋಟಿ ರೂಪಾಯಿಗಳಿಗೆ ಹೆಚ್ಚಿಸಲು ನಿರ್ಧಾರ.
*ಐ.ಟಿ./ಬಿ.ಟಿ ಇಲಾಖೆ ವತಿಯಿಂದ ಟೆಕ್ ಸಮಿಟ್ ಆಯೋಜನೆಗೆ (ಬೆಂಗಳೂರು ಹಾಗೂ ಇತರೆ ಜಿಲ್ಲೆಗಳಲ್ಲಿ ) ಇ.ಸಿ.ಎಂ.ಎ ಅವರ ಮೂಲಕ
ಮಹತ್ವಾಕಾಂಕ್ಷಿ ಕಾರ್ಯಕ್ರಮಗಳನ್ನು ನಿರ್ವಹಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
*ಸಣ್ಣ ನೀರಾವರಿ ಇಲಾಖೆಯ 243 ಎಂ.ಎಲ್.ಡಿ ನೀರಿನ 70 ಕೆರೆಗಳನ್ನು ತುಂಬಲು ಪರಿಷ್ಕೃತ ಅಂದಾಜು 1,081 ಕೋಟಿ ರೂ.ಗಳ ಮೊತ್ತಕ್ಕೆ ಸಚಿವ ಸಂಪುಟದ ಒಪ್ಪಿಗೆ.
ಶಾಲಾ ಕಾಲೇಜುಗಳಲ್ಲಿ ಸಂವಿಧಾನ ಪೀಠಿಕೆ ಓದು ಕಡ್ಡಾಯ
ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆ ಓದು ಕಡ್ಡಾಯವೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಮುಖ ನಿರ್ಣಯವನ್ನು ಕೈಗೊಳ್ಳಲಾಗಿದೆ. ಸಂವಿಧಾನದ ಆಶಯ ಮತ್ತು ರಚನೆಯ
ಮೂಲ ಉದ್ದೇಶಗಳನ್ನು ತಿಳಿಯಲು ಇದು ಸಹಕಾರಿಯಾಗಲಿದೆ.
ಎಲ್ಲಾ ಅನುದಾನಿತ, ಅನುದಾನ ರಹಿತ, ಸರಕಾರಿ, ಖಾಸಗಿ ಶಾಲಾ - ಕಾಲೇಜುಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ
ಸಂವಿಧಾನದ ಪೀಠಿಕೆಯನ್ನು ಕಡ್ಡಾಯವಾಗಿ ಓದಬೇಕು ಎಂದು ತಿಳಿಸಿದ್ದಾರೆ.
ಅಲ್ಲದೇ ಎಲ್ಲಾ ಸರ್ಕಾರಿ ಕಚೇರಿ ಹಾಗೂ ಇಲಾಖೆಗಳಲ್ಲಿ ಪೀಠಿಕೆಯ ಚಿತ್ರವನ್ನು ಹಾಕಲು ಸಂಪುಟವು ಒಪ್ಪಿಗೆ ನೀಡಿದೆ.
ಎಪಿಎಂಸಿ ಕಾಯ್ದೆ ತಿದ್ದುಪಡಿ ವಾಪಸ್
ರೈತರ ಹಿತದೃಷ್ಟಿಯಿಂದ ಎಪಿಎಂಸಿ ಕಾಯ್ದೆ ತಿದ್ದುಪಡಿಯನ್ನು ರದ್ದುಪಡಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ.
ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಪ್ರಮುಖ ನಿರ್ಣಯವನ್ನು ಕೈಗೊಳ್ಳಲಾಗಿದೆ. ಕರ್ನಾಟಕ ಕೃಷಿ ಉತ್ಪನ್ನಗಳ ಮಾರುಕಟ್ಟೆ
ಕಾಯ್ದೆಯನ್ನು ಸಹ ಹಿಂದಕ್ಕೆ ಪಡೆಯಲು ನಿರ್ಧರಿಸಲಾಗಿದೆ. ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ
ಮಸೂದೆ ಮಂಡಿಸಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.
ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಿದ ಮೇಲೆ ಸರ್ಕಾರದ ಉದ್ದೇಶ ಈಡೇರಿರಲಿಲ್ಲ. ರೈತರಿಗೆ ಉತ್ತಮ ಬೆಲೆ ಸಿಕ್ಕಿರಲಿಲ್ಲ.
ಇದರಿಂದ ಲಕ್ಷಾಂತರ ಕುಟುಂಬಗಳಿಗೆ ಬೇಸರವಾಗಿದೆ.
ಸಾಕಷ್ಟು ಜನರು ಹಾನಿ ಅನುಭವಿಸಿದ್ದಾರೆ. ಮಾರುಕಟ್ಟೆಯಲ್ಲಿ ವ್ಯಾಪಾರವೂ ಕುಸಿತವಾಗಿತ್ತು ಎಂದು ಅವರು ತಿಳಿಸಿದ್ದಾರೆ.
ಅನ್ನಭಾಗ್ಯ ಯೋಜನೆ ಜಾರಿಗೆ ಪ್ಲಾನ್
ಕಾಂಗ್ರೆಸ್ ಸರ್ಕಾರ ನೀಡಿದ್ದ 5 ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿದ್ದ ಅನ್ನಭಾಗ್ಯ ಯೋಜನೆಯ
ಅನುಷ್ಠಾನ ಇದೀಗ ರಾಜ್ಯ ಸರ್ಕಾರಕ್ಕೆ ಕಗ್ಗಂಟಾಗಿ ಪರಿಣಮಿಸಿದೆ.
ಈ ಯೋಜನೆ ಜಾರಿಗೆ ಕೇಂದ್ರ ಸರ್ಕಾರದಿಂದ ನಿರೀಕ್ಷಿತ ಸಹಕಾರ ಲಭ್ಯವಾಗಿಲ್ಲ. ಹೀಗಾಗಿ, ರಾಜ್ಯ ಸರ್ಕಾರವು
ಅನ್ನಭಾಗ್ಯ ಯೋಜನೆಯ ಜಾರಿಗೆ ಅವಶ್ಯವಿರುವ ಅಕ್ಕಿಯನ್ನು ನೆರೆಯ ರಾಜ್ಯಗಳಿಂದ ಖರೀದಿಸಲು ತೀರ್ಮಾನಿಸಿದೆ.
ಈ ಸಂಬಂಧ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.
ಗುರುವಾರ ಸಚಿವ ಸಂಪುಟ ಸಭೆಗೂ ಮುನ್ನ ಅನ್ನಭಾಗ್ಯ ಯೋಜನೆ ಜಾರಿಗೆ ಇರುವ, ಪರ್ಯಾಯ ಮಾರ್ಗಗಳ ಬಗ್ಗೆ ಮುಖ್ಯಮಂತ್ರಿ
ಸಿದ್ದರಾಮಯ್ಯ ಹಾಗೂ ಸಚಿವ ಕೆ.ಎಚ್. ಮುನಿಯಪ್ಪ ಅವರ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು.
ಕೇಂದ್ರದಿಂದ ಅಕ್ಕಿ ಸಿಗದೆ ಇದ್ದರೆ ಪರ್ಯಾಯವಾಗಿ ಯೋಜನೆಯನ್ನು ರೂಪಿಸಿಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು.
ರಾಜ್ಯ ಸರ್ಕಾರ ಈಗಾಗಲೇ ಒಂದು ಗ್ಯಾರಂಟಿಯನ್ನು ಜಾರಿಮಾಡಿದ್ದು, ಜುಲೈ 1 ರಂದು ಅಂತ್ಯೋದಯ
ಹಾಗೂ ಬಿಪಿಎಲ್ ಕಾರ್ಡುದಾರರಿಗೆ ಪ್ರತಿ ತಿಂಗಳು ತಲಾ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಲಾಗಿತ್ತು.
ಈ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಮಂಡಳಿಯ ಉಪ ಪ್ರಧಾನ ವ್ಯವಸ್ಥಾಪಕರಿಗೆ 2.28 ಲಕ್ಷ ಮೆಟ್ರಿಕ್ ಟನ್ ಅಗತ್ಯವಿದೆ
ಎಂದು ಕೋರಿ ಜೂನ್ 9 ರಂದು ಪತ್ರ ಬರೆಯಲಾಗಿತ್ತು.
ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ
ಪಠ್ಯಪುಸ್ತಕ ಪರಿಷ್ಕರಣೆಗೆ ಸಮಿತಿ ರಚನೆ ಹಾಗೂ ಪೂರಕ ಪುಸ್ತಕ ವಿತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.
ಈ ವರ್ಷದ ಪಠ್ಯಪುಸ್ತಕ ಈಗಾಗಲೇ ಮಕ್ಕಳಿಗೆ ವಿತರಿಸಲಾಗಿದೆ. ಹಾಗಾಗಿ ಮಕ್ಕಳಿಗೆ ತಪ್ಪು ತಿಳುವಳಿಕೆ ಹೋಗುವಂಥದ್ದನ್ನು ತೆಗೆದುಹಾಕಲಾಗುವುದು.
ಇದರಲ್ಲಿ ಅವಶ್ಯಕವಾಗಿ ಕಲಿಯಬೇಕಾದ ಪಾಠಗಳ 15 ಪುಟಗಳ ಪೂರಕ ಪುಸ್ತಕ ನೀಡಲು ಸಂಪುಟ ಸಭೆಯು ತೀರ್ಮಾನಿಸಿದೆ.
5 ಜನ ಸಾಹಿತಿಗಳ ತಜ್ಞರ ಸಮಿತಿಯು ಕನ್ನಡ, ಸಮಾಜ ವಿಜ್ಞಾನ ವಿಷಯಗಳಲ್ಲಿ 6 ರಿಂದ 10 ರವರೆಗಿನ ತರಗತಿಗಳ ಪದ
ಹಾಗೂ ವಾಕ್ಯಗಳ ಬದಲಾವಣೆಗಳನ್ನು ಮಾತ್ರ ಮಾಡಿದ್ದು, ಇದಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಪಿಯುಸಿ ಸೇರಿದಂತೆ 75,000 ಶಾಲೆಗಳಿಗೆ ಈ ಪುಸ್ತಕಗಳನ್ನು ವಿತರಣೆ ಮಾಡಲಾಗುವುದು.
ಹಿಂದಿನ ಸರ್ಕಾರ ಮಾಡಿದ್ದ ಬದಲಾವಣೆಗಳನ್ನು ಪರಿಷ್ಕರಣೆ ಮಾಡಲಾಗಿದೆ ಹಾಗೂ ಶಿಕ್ಷಕರಿಗೂ ಏನು ಹೇಳಿಕೊಡಬೇಕು
ಎಂದು ತಿಳಿಸುವ ಮಾರ್ಗಸೂಚಿಗಳನ್ನು ಇದು ಹೊಂದಿರಲಿದೆ ಎಂದಿದ್ದಾರೆ.
ಪೂರಕ ಮಾಹಿತಿ ಮತ್ತು ಚಿತ್ರ: @Minister of Karnataka