News

ಕರಾವಳಿ ಸೇರಿ ಆರು ಜಿಲ್ಲೆಗಳಲ್ಲಿ ಭಾರೀ ಮಳೆ-ಇಬ್ಬರ ಸಾವು

13 June, 2020 10:02 AM IST By:

ಕರಾವಳಿ ಭಾಗ ಸೇರಿದಂತೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ  ಮುಂಗಾರು ನಿಧಾನವಾಗಿ ಚುರುಕುಗೊಂಡಿದ್ದು, ಉತ್ತರ ಕನ್ನಡ, ಬೆಳಗಾವಿ ಸೇರಿದಂತೆ ರಾಜ್ಯದ 7ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶುಕ್ರವಾರವೂ ಮಳೆಯ ಆರ್ಭಟ ಮುಂದುವರೆದಿದೆ. ಗುಡುಗು, ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಮನೆ ಎದುರಿನ ತೋಡಿಗೆ ಬಿದ್ದು ಬಾಲಕನೊಬ್ಬ ಮೃತಪಟ್ಟಿದ್ದಾನೆ. ದಕ್ಷಿಣ ಕನ್ನಡ ಜಿಲ್ಲೆಯ ಗುರುಪುರದಲ್ಲಿ ಕಾಂಪೌಂಡ್ ಗೋಡೆ ಕುಸಿದು 52 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.

ಉಡುಪಿ ಜಿಲ್ಲೆಯ ಬ್ರೌಹ್ಮಾವರ, ಬೈಂದೂರಿನಲ್ಲೂ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಮಂಗಳೂರು, ಪುತ್ತೂರು, ಸುಳ್ಯ ತಾಲ್ಲೂಕಿನಲ್ಲಿ ಮಳೆಯ ಆರ್ಭಟ ಮುಂದುವರಿದಿದೆ. ಚಿಕ್ಕಮಗಳೂರಿನ ಶೃಂಗೇರಿ ತಾಲ್ಲೂಕಿನಲ್ಲಿ ಗುರುವಾರ ರಾತ್ರಿಯಿಂದ ಉತ್ತಮ ಮಳೆಯಾಗಿದ್ದು, ತುಂಗಾ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಎನ್‌.ಆರ್‌.ಪುರ, ಕೊಪ್ಪ, ಮೂಡಿಗೆರೆಯಲ್ಲಿ ಮಳೆಯಾಗಿದೆ.
ಉತ್ತರ ಕನ್ನಡ ಕರಾವಳಿಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಅಪಾಯದ ಮುನ್ಸೂಚನೆ ಅರಿತು ಜಿಲ್ಲಾಡಳಿತ ಮೀನುಗಾರರು ಕಡಲಿಗಿಳಿಯದಂತೆ ಎಚ್ಚರಿಕೆ ನೀಡಿದೆ. ಕಾರವಾರದಲ್ಲಿ ಸಮುದ್ರ ಪ್ರಕ್ಷುಬ್ಧ ವಾಗಿದ್ದು, ದೊಡ್ಡ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಮೀನುಗಾರರು ಈಗಾಗಲೇ ಬಂದರಿಗೆ ವಾಪಸಾಗಿದ್ದು, ದೋಣಿಗಳನ್ನು ಲಂಗರು ಹಾಕಿದ್ದಾರೆ.

ಭಟ್ಕಳ, ಹೊನ್ನಾವರ, ಅಂಕೋಲಾದಲ್ಲೂ ಮಧ್ಯಾಹ್ನದವರೆಗೆ ಬಿರುಸಾಗಿ ಮಳೆ ಸುರಿಯಿತು. ಮಲೆನಾಡಿನ ಶಿರಸಿ, ಸಿದ್ದಾಪುರ, ಯಲ್ಲಾಪುರದಲ್ಲಿ ಸಾಧಾರಣ ಮಳೆಯಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ, ನಾಪೋಕ್ಲು, ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ಶುಕ್ರವಾರ ಮಧ್ಯಾಹ್ನದ ಬಳಿಕ ಸಾಧಾರಣ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಮಳೆ ಚುರುಕುಗೊಂಡಿದ್ದು, ಎಲ್ಲ ತಾಲ್ಲೂಕುಗಳಲ್ಲಿ ಮಳೆ ಸುರಿಯಲಾರಂಭಿಸಿದೆ. ದಾವಣಗೆರೆ ನಗರ ಸೇರಿ ಜಿಲ್ಲೆಯ ಕೆಲವೆಡೆ, ಚಿತ್ರದುರ್ಗದ ಚಿಕ್ಕಜಾಜೂರಿನಲ್ಲಿ ಸಾಧಾರಣ ಮಳೆಯಾಗಿದೆ.

ಕಲಬರುಗಿ, ಬೀದರ್, ಯಾದಗಿರಿ, ರಾಯಚೂರು ಜಿಲ್ಲೆಗಳಲ್ಲಿಯೂ ಸಹ ಅಲ್ಲಲ್ಲಿ ಸಾಧಾರಣ ಮಳೆಯಾಗಿದೆ. ಎಲ್ಲೆಡೆ ಮೋಡ ಕವಿದ ವಾತಾವರಣವಿದೆ. ಕೃಷಿ ಚಟುವಟಿಕೆ ಚುರುಕುಗೊಂಡಿದೆ.