ಕೊಪ್ಪಳ : ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ, ರಾಜಕೀಯ ಪಕ್ಷಗಳ ಮತ್ತು ರಾಜಕೀಯ ಅಭ್ಯರ್ಥಿಗಳ ಕರಪತ್ರ, ಪೋಸ್ಟರ್ ಮತ್ತು ಬ್ಯಾನರನ್ನು ಮುದ್ರಿಸುವ ಮೊದಲು ಆಯಾ ವಿಧಾನಸಭಾ ಮತಕ್ಷೇತ್ರಗಳ ಚುನಾವಣಾಧಿಕಾರಿ (ಆರ್‌ಓ) ಅವರ ಅನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ತಿಳಿಸಿದರು.
ಜಿಲ್ಲಾಡಳಿತ ಭವನದಲ್ಲಿನ ಸಭಾಂಗಣದಲ್ಲಿ ಕೊಪ್ಪಳ ಸೇರಿದಂತೆ ವಿವಿಧೆಡೆಯ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳೊಂದಿಗೆ ಏಪ್ರೀಲ್ 1ರಂದು ಸಭೆ ನಡೆಸಿ ಮಾತನಾಡಿದ ಅವರು, ಯಾವುದೇ ರೀತಿಯ ಅಪಪ್ರಚಾರ, ಸುಳ್ಳು ಮಾಹಿತಿಯ, ಕೋಮುಗಲಭೆ ಸೃಷ್ಟಿಸುವಂತಹ ಕರಪತ್ರ, ಪೋಸ್ಟರ್ ಮತ್ತು ಬ್ಯಾನರಗಳನ್ನು ಮುದ್ರಿಸಲು ಅವಕಾಶವಿರುವುದಿಲ್ಲ ಎಂದು ತಿಳಿಸಿದರು.
ಮುದ್ರಕರು ಪಾಂಪ್ಲೇಟಗಳು ಮತ್ತು ಪೋಸ್ಟರಗಳನ್ನು ಮುದ್ರಿಸುವ ಮೊದಲು ಪ್ರಕಾಶಕರ ಗುರುತಿನ ಬಗ್ಗೆ ದೃಢೀಕರಣವನ್ನು ಇಬ್ಬರು ಅನುಮೋದಕರೊಂದಿಗೆ ಪಡೆದಿರಲೇಬೇಕು. ಗುರುತಿನ ದೃಢೀಕರಣವಿಲ್ಲದೇ ಮುದ್ರಣ ಮಾಡಬಾರದು. ತಾವು ಮುದ್ರಿಸುವ ಒಂದು ಪ್ರತಿಯನ್ನು, ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಆರ್‌ಓಗಳಿಗೆ ಸಲ್ಲಿಸಬೇಕು. ಯಾವುದೇ ಜಾತ್ರೆ ಮತ್ತು ಧಾರ್ಮಿಕ ಕಾರ್ಯಕ್ರಮಗಳಿಗೆ ಮುದ್ರಣವಾಗುವ ಕರಪತ್ರಗಳಲ್ಲಿ ಅಭ್ಯರ್ಥಿಗಳ ಭಾವಚಿತ್ರ ಹಾಕಬಾರದು ಎಂದು ಸೂಚಿಸಿದರು.
ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ ಕಡಿ ಅವರು ಮಾತನಾಡಿ, ಪ್ರತಿ ಪೇಜಿನ ಮುದ್ರಣಕ್ಕೆ ಈಗಾಗಲೇ ಹಣ ನಿಗದಿಪಡಿಸಲಾಗಿದೆ. ಕರಪತ್ರ, ಫಲಕ ಪೋಸ್ಟರ್ ಬ್ಯಾನರ್ ಮುಂಭಾಗದಲ್ಲಿ ಮುದ್ರಕರ ಹೆಸರು, ಪ್ರಕಾಶಕರ ಹೆಸರು, ಮೊಬೈಲ್ ಸಂಖ್ಯೆ ಮತ್ತು ಮುದ್ರಣ ಪ್ರತಿಗಳ ಸಂಖ್ಯೆ ನಮೂದಿಸಬೇಕು.
ಯಾವುದೇ ಜಾತಿ, ಧರ್ಮದ ಜನರ ಭಾವನೆಗೆ ಧಕ್ಕೆ ತರುವ ವಿಷಯವನ್ನು ಮುದ್ರಿಸಬಾರದು ಎಂದು ತಿಳಿಸಿದರು. ಯಾವುದೇ ನಿಬಂಧನೆಗಳನ್ನು ಉಲ್ಲಂಘಿಸಿದರೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದಾಗಿದೆ ಎಂದು ತಿಳಿಸಿದರು.
Rain warning: ರಾಜ್ಯದ ಈ ಭಾಗಗಳಲ್ಲಿ ಇಂದಿನಿಂದ 3 ದಿನಗಳ ಕಾಲ ಮಳೆ ಸೂಚನೆ
ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಯನುಸಾರ ಬ್ಯಾನರ್, ಪ್ಲೆಕ್ಸ್, ಕರಪತ್ರ ಮುದ್ರಣವಾಗದೇ ನಿಯಮವನ್ನು ಉಲ್ಲಂಘಿಸಿದಲ್ಲಿ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ. ಚುನಾವಣಾ ಬಹಿಷ್ಕಾರದಂತಹ ಪೋಸ್ಟರ್, ಕರಪತ್ರ ಮತ್ತು ಬ್ಯಾನರ್ ಮುದ್ರಿಸುವುದು ಕಾಯ್ದೆಯ ಉಲ್ಲಂಘನೆಯಾಗುತ್ತದೆ ಎಂದು
ಚುನಾವಣಾ ವೆಚ್ಚದ ನೋಡಲ್ ಅಧಿಕಾರಿ ಅಮಿನ್ ಅತ್ತಾರ ಅವರು ವಿವರಿಸಿದರು.
ಸಭೆಯಲ್ಲಿ ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ, ಜಿಲ್ಲೆಯ ವಿವಿಧ ಪ್ರಿಂಟಿಂಗ್ ಪ್ರೆಸ್ ಮಾಲೀಕರು ಮತ್ತು ಪ್ರತಿನಿಧಿಗಳು ಇದ್ದರು.
Share your comments