ಕೋವಿಡ್-19 ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ವಿಧಿಸಲಾಗಿದ್ದ ಲಾಕ್‌ಡೌನ್‌ನಲ್ಲಿ ಸಡಿಲಿಕೆ ನೀಡಿರುವ ಕಾರಣ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕಲಬುರಗಿ ವಿಭಾಗ-1 ರಿಂದ ಸೋಮವಾರ ಜೂನ್ 21 ರಿಂದ ಜಾರಿಗೆ ಬರುವಂತೆ ಕಲಬುರಗಿ ನಗರ ಹಾಗೂ ಕಲಬುರಗಿಯಿಂದ ವಿವಿದ ತಾಲೂಕು, ಜಿಲ್ಲೆಗಳಿಗೆ ಸಂಚರಿಸಲು 150 ರಿಂದ 200 ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ವಿಭಾಗ-1ರ ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಹೆಚ್.ಸಂತೋಷ್ ಕುಮಾರ್ ಅವರು ತಿಳಿಸಿದ್ದಾರೆ.
ಚಿಂಚೋಳಿ, ಚಿತ್ತಾಪೂರ, ಕಾಳಗಿ, ಸೇಡಂ ಮತ್ತು ಯಾದಗಿರಿ, ವಿಜಯಪುರ, ಹುಮನಾಬಾದ್, ಬಸವಕಲ್ಯಾಣ, ಬೀದರ್ ಮಾರ್ಗಗಳಿಗೆ ವಾಹನಗಳ ಕಾರ್ಯಾಚರಣೆ ಮಾಡಲಾಗುತ್ತಿದೆ.
ಆಸನ ಸಾಮರ್ಥ್ಯದ ಶೇ. 50ರಷ್ಟು ಮಾತ್ರ ಪ್ರಯಾಣಿಕರು ಪ್ರಯಾಣಿಸಲು ಅನುಮತಿ ನೀಡಲಾಗಿದೆ. ಪ್ರತಿಯೊಬ್ಬ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸಿದವರಿಗೆ ಮಾತ್ರ ಪ್ರಯಾಣಿಸಲು ಅನುಮತಿ ನೀಡಲಾಗಿದೆ. ಪ್ರಯಾಣಿಕರು ಸಾಮಾಜಿಕ ಅಂತರ ಕಾಯ್ದುಕೊಂಡು ಸರತಿ ಸಾಲಿನಂತೆ ಬಸ್ಸಿನಲ್ಲಿ ಹತ್ತಬೇಕು ಎಂದು ಅವರು ತಿಳಿಸಿದ್ದಾರೆ.
ಪ್ರಾರಂಭಿಕ ಹಂತದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನೋಡಿಕೊಂಡು ಹಂತ ಹಂತವಾಗಿ ಅಂತರ ರಾಜ್ಯದ ನಿಯಮ/ನಿರ್ದೇಶನದಂತೆ ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳಿಗೆ (ಸೋಲಾಪೂರ, ಹೈದ್ರಾಬಾದ್ ಮಾರ್ಗಗಳಿಗೆ) ಪ್ರಯಾಣಿಕರ ಅಗತ್ಯತೆಗೆ ತಕ್ಕಂತೆ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳ ಸಂಚಾರಕ್ಕೆ ಅನುಮತಿ!
ರಾಜ್ಯ ಸರಕಾರಿ ಸಾರಿಗೆ ಸಂಸ್ಥೆಗಳ ಬಸ್ ಗಳ ಓಡಾಟಕ್ಕೆ ಅನುಮತಿ ನೀಡಲಾಗಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಪ್ರಯಾಣಿಕರ ಬೇಡಿಕೆ ಹಾಗೂ ಆದ್ಯತೆ ಮೇರೆಗೆ ಸೋಮವಾರ ಬೆಳಿಗ್ಗೆ 6 ಗಂಟೆಯಿಂದ ಬಸ್ಸುಗಳ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಪ್ರಕರಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಕೆಲ ನಿಬಂಧನೆಗಳನ್ನು ವಿಧಿಸಿ ಬಸ್ಸುಗಳ ಕಾರ್ಯಾಚರಣೆಗೆ ಅನುಮತಿ ನೀಡಿದೆ. ಹೀಗಾಗಿ ಸಂಸ್ಥೆ ವ್ಯಾಪ್ತಿಯ ಧಾರವಾಡ, ಬೆಳಗಾವಿ, ಗದಗ, ಬಾಗಲಕೋಟೆ, ಉತ್ತರಕನ್ನಡ, ಹಾವೇರಿ ಜಿಲ್ಲೆಗಳ 9 ವಿಭಾಗಗಳ ವ್ಯಾಪ್ತಿಯಲ್ಲಿ ಬಸ್ಸುಗಳು ಆರಂಭವಾಗಲಿವೆ.
ಮೈಸೂರು ಜಿಲ್ಲೆಯಲ್ಲಿ ಕೋವಿಡ್ ಪ್ರಕಣಗಳು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆ ಹೊರತು ಪಡಿಸಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಬಸ್ಸುಗಳು ಸಂಚಾರ ಮಾಡಲಿವೆ. ಕಾರ್ಯಾಚರಣೆಗೆ ಬೇಕಾದ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.