1. ಸುದ್ದಿಗಳು

ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರೆಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ

C.M B. S Yadiyurappa

ಕೊರೋನಾ ಪ್ರಕರಣಗಳು ಹೆಚ್ಚಿರುವ ರಾಜ್ಯದ 11 ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರೆಯಲಿದ್ದು ಉಳಿದ ಜಿಲ್ಲೆಗಳಲ್ಲಿ ಲಾಕ್ಡೌನ್ ಸಡಿಲಗೊಳಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಿಸಿದ್ದಾರೆ.

ಉಸ್ತುವಾರಿ ಸಚಿವರ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಮಂಡ್ಯ, ಶಿವಮೊಗ್ಗ, ಕೊಡಗು, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಬೆಳಗಾವಿ, ದಾವಣಗೆರೆ ಜಿಲ್ಲೆಗಳಲ್ಲಿ ಲಾಕ್​ಡೌನ್​ ಆದೇಶದಲ್ಲಿ ಯಾವುದೇ ಸಡಿಲಿಕೆ ಇಲ್ಲ ಎಂದು ಹೇಳಿದ್ದಾರೆ. ಈ ಜಿಲ್ಲೆಗಳನ್ನ ಹೊರತುಪಡಿಸಿ ಉಳಿದ 19 ಜಿಲ್ಲೆಗಳಲ್ಲಿ ಜೂನ್​ 14 ರ ಬೆಳಗ್ಗೆ 6 ಗಂಟೆಯ ಬಳಿಕ ಲಾಕ್​ಡೌನ್​ ಸಡಿಲಿಕೆ ಆಗಲಿದೆ. ಉಳಿದ ಜಿಲ್ಲೆಗಳಲ್ಲಿ ಜೂನ್​​ 21ರ ಬೆಳಗ್ಗೆ 6 ಗಂಟೆಯವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ. ಶುಕ್ರವಾರ ರಾತ್ರಿ 7 ಗಂಟೆಯಿಂದ ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ವೀಕೆಂಡ್​ ಕರ್ಫ್ಯೂ ಜಾರಿಯಲ್ಲಿ ಇರಲಿದೆ ಎಂದರು.

ಗ್ರಾಮೀಣ ಭಾಗದಲ್ಲಿ ಸೋಂಕು ಹೆಚ್ಚಾಗುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿ ಸೋಂಕು ನಿಗ್ರಹಕ್ಕೆ ಕ್ರಮ ಕೈಗೊಳ್ಳುವಂತೆ ತಾಕೀತು ಮಾಡಿದರು. ಅಂಕಿ-ಅಂಶಗಳನ್ನು ಗಮನಿಸಿದರೆ ಸೋಂಕು ನಿಯಂತ್ರಣಕ್ಕೆ ಮತ್ತಷ್ಟು ಕ್ರಮ ಅಗತ್ಯವಿದೆ. ಸೋಂಕಿತರನ್ನು ತ್ವರಿತವಾಗಿ ಪತ್ತೆ ಹಚ್ಚಿ ಸೋಂಕು ಹರಡದಂತೆ ಎಚ್ಚರವಹಿಸಿ ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.

ಕೋವಿಡ್ ಹೆಚ್ಚಿರುವ 11 ಜಿಲ್ಲೆಗಳಲ್ಲಿ ಈಗಿರುವ ಮಾರ್ಗಸೂಚಿಗಳಲ್ಲಿ ಯಾವುದೇ ರೀತಿಯ ಬದಲಾವಣೆ ಇರುವುದಿಲ್ಲ, ಅಂದರೆ ಈ ಜಿಲ್ಲೆಗಳಲ್ಲಿ ಯಥಾಸ್ಥಿತಿ ಮುಂದುವರೆಯುತ್ತದೆ. ಹಾಗೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಉಸ್ತುವಾರಿ ಸಚಿವರುಗಳೊಂದಿಗೆ ಸಮಾಲೋಚಿಸಿ ಇನ್ನೂ ಹೆಚ್ಚಿನ ಕಠಿಣ ಕ್ರಮಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ. 

ಕೋವಿಡ್-19 ಪ್ರಕರಣ ಪ್ರಮಾಣ ಕಡಿಮೆ ಇರುವ ಜಿಲ್ಲೆಗಳಲ್ಲಿ ಸಡಿಲಿಕೆಯಾದ ನಿರ್ಬಂಧಗಳ ಬಗ್ಗೆ ಮಾಹಿತಿ ಹೀಗಿದೆ..

 ಎಲ್ಲಾ ಕಾರ್ಖಾನೆಗಳನ್ನು ಶೇ. 50 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿಸಿದೆ. ಆದರೆ, ಗಾರ್ಮೆಂಟ್ ಇಂಡಸ್ಟ್ರೀಗಳು ಶೇ. 30 ರಷ್ಟು ಸಿಬ್ಬಂದಿಯ ಹಾಜರಿಯೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಎಲ್ಲಾ ಅಗತ್ಯ ಅಂಗಡಿಗಳನ್ನು ಈಗಿರುವ ಸಮಯ ಬೆಳಿಗ್ಗೆ 6 ರಿಂದ 10 ಗಂಟೆಯನ್ನು ವಿಸ್ತರಿಸಿ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ. 

ಎಲ್ಲಾ ನಿರ್ಮಾಣ ಚಟುವಟಿಕೆಗಳನ್ನು ಪ್ರಾರಂಭಿಸಲು ಅನುಮತಿಸಲಾಗಿದೆ. ಹಾಗೂ ನಿಮಾಣ ಚಟುವಟಿಕೆ ಸಂಬಂಧಿಸಿದ ಅಂಗಡಿಗಳನ್ನು ವಿಶೇಷವಾಗಿ ಸಿಮೆಂಟ್ ಹಾಗೂ ಸ್ಟೀಲ್ ತೆರೆಯಲು ಅವಕಾಶ.  ಹಿರಿಯ ನಾಗರಿಕರು ವಾಕಿಂಗ್​ ಮಾಡಲು ಅವಕಾಶವಿದೆ. ಬೀದಿ ಬದಿ ವ್ಯಾಪಾರಿಗಳಿಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಆಟೋ ಹಾಗೂ ಟ್ಯಾಕ್ಸಿಗಳಲ್ಲಿ ಇಬ್ಬರು ಪ್ರಯಾಣಿಕರು ಮಾತ್ರ ಕೂರಬಹುದು. ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳ ಸಂಚಾರಕ್ಕೆ ಅವಕಾಶ ಇರೋದಿಲ್ಲ. ಹಾಗೂ ಅಂತರ್​ ಜಿಲ್ಲಾ ಪ್ರಯಾಣಕ್ಕೆ ಯಾವುದೇ ನಿರ್ಬಂಧ ಇರೋದಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

Published On: 10 June 2021, 09:01 PM English Summary: Lockdown relaxation in other parts of the state except 11 districts

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.