ಕರಾವಳಿ ಭಾಗದಿಂದ ಮುಂಗಾರು ಮಾರುತ ಈಗಾಗಲೇ ಜೂನ್ 1ರಿಂದ ಭಾರತ ಪ್ರವೇಶಿಸಿದೆ. ಕರ್ನಾಟಕ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಜೂನ್ 11 ಮತ್ತು 12ರಂದು ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ‘ಆರೆಂಜ್ ಅಲರ್ಟ್’ ಘೋಷಿಸಿದೆ.
11ರಿಂದ ದಕ್ಷಿಣ ಒಳನಾಡಿನಲ್ಲಿ ಹಾಗೂ 12ರಿಂದ ಉತ್ತರ ಒಳನಾಡಿನಲ್ಲಿ ಮಳೆ ಹೆಚ್ಚಾಗಲಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಹಾಗೂ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ಸೋಮವಾರ 5 ಸೆಂ.ಮೀ ಮಳೆಯಾಗಿದೆ. ಗೋಕರ್ಣ, ಭಾಗಮಂಡಲ 4, ಕಾರವಾರ 3, ಮೂಡುಬಿದಿರೆ, ಹೊಸನಗರ, ದೇವನಹಳ್ಳಿ 2, ಕನಕಪುರ, ರಾಮನಗರದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ರಾಯಚೂರಿನಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ದಾಖಲಾಗಿದೆ. ಕಲಬುರಗಿ ಜಿಲ್ಲೆಯಲ್ಲಿಯೂ ಕಳೆದ ಒಂದು ವಾರದಿಂದ ಮೋಡ ಕವಿದ ವಾತಾವರಣವಿದೆ.