1. ಸುದ್ದಿಗಳು

ಕೊರೊನಾ 3ನೇ ಅಲೆ ಎದುರಿಸಲು ಮುಂಜಾಗ್ರತೆ: ಸಿಎಂ ಬಿ.ಎಸ್.ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವ ಡಾ.ಸುಧಾಕರ್ ಅವರೊಂದಿಗೆ ಶಿವಮೊಗ್ಗಕ್ಕೆ ಭೇಟಿ ನೀಡಿದ್ದರು. ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಇತರರಿದ್ದರು.

ಕೊರೊನಾ ಮೂರನೇ ಅಲೆಯನ್ನು ಪರಿಣಾಮಕಾರಿಯಾಗಿ ಎದುರಿಸಲು ಸರ್ಕಾರ ಎಲ್ಲಾ ಮುಜಾಗ್ರತಾ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಜನರು ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲೆಯ ಕೋವಿಡ್ ನಿರ್ವಹಣೆ ಹಾಗೂ ವಿವಿಧ ಅಭಿವೃದ್ದಿ ಚಟುವಟಿಕೆಗಳ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೂರನೇ ಅಲೆ ಕುರಿತು ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರ ಡಾ.ದೇವಿಪ್ರಸಾದ್ ಶೆಟ್ಟಿ ಅವರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ಈಗಾಗಲೇ ರಚಿಸಿದೆ. ಈ ಸಮಿತಿ ಮೂರ್ನಾಲ್ಕು ದಿನಗಳಲ್ಲಿ ವರದಿ ಸಲ್ಲಿಸಲಿದ್ದು, ಸಮಿತಿಯ ವರದಿ ಆಧರಿಸಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು. ಮೂರನೇ ಅಲೆಯಿಂದ ಮಕ್ಕಳಿಗೆ ತೊಂದರೆಯಾಗಲಿದೆ ಎಂಬ ವರದಿಗಳಿದ್ದು, ಈ ಅಪಾಯದಿಂದ ಮಕ್ಕಳನ್ನು ರಕ್ಷಿಸಲು ಅಗತ್ಯವಿರುವ ಕ್ರಮಗಳನ್ನು ಕೈಗೊಳ್ಳಲಿದ್ದು, ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ 75 ಮಕ್ಕಳ ಐಸಿಯು ಬೆಡ್ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ ಎಂದು ಅವರು ಹೇಳಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣವನ್ನು ಶೇ.5ಕ್ಕಿಂತ ಕೆಳಗೆ ಇಳಿಸುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಗಿದೆ. ವೈದ್ಯಕೀಯ ಸೇವೆ ಉತ್ತಮಪಡಿಸಲು ಸರ್ಕಾರ ಹಲವು ದಿಟ್ಟ ಹೆಜ್ಜೆಗಳನ್ನು ಇರಿಸಿದೆ. ಇದೇ ಮೊದಲ ಬಾರಿಗೆ 1780 ವೈದ್ಯರನ್ನು ರಾಜ್ಯದಲ್ಲಿ ನೇರ ನೇಮಕಾತಿ ಮೂಲಕ ಸೇವೆಗೆ ಬಳಸಿಕೊಳ್ಳಲಾಗಿದೆ. ಈ ಪೈಕಿ ಶಿವಮೊಗ್ಗ ಜಿಲ್ಲೆಗೆ 83 ವೈದ್ಯರನ್ನು ನೇಮಕ ಮಾಡಲಾಗಿದ್ದು, ಇದರಲ್ಲಿ 29 ಮಂದಿ ತಜ್ಞ ವೈದ್ಯರಿದ್ದಾರೆ. ಜಿಲ್ಲೆಯ ವೈದ್ಯಕೀಯ ಕ್ಷೇತ್ರದ ಸುಧಾರಣೆ ಕುರಿತು ಪರಿಶೀಲನೆ ನಡೆಸಲು ಜಿಲ್ಲೆಗೆ ಮತ್ತೊಮ್ಮೆ ಭೇಟಿ ನೀಡಲು ಆರೋಗ್ಯ ಸಚಿವರಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಮರಣಕ್ಕೆ ಕಾರಣ ತಿಳಿಯಲು ಸಮಿತಿ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೊನಾದಿಂದ ಸಂಭವಿಸುವ ಸಾವುಗಳ ಕುರಿತು ಈಗಾಗಲೆ ಜಿಲ್ಲಾ ಮಟ್ಟದಲ್ಲಿ ಆಡಿಟ್ ನಡೆಸಿ ವರದಿಯನ್ನು ಸಲ್ಲಿಸಲಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಮರಣ ಪ್ರಮಾಣ ಹೆಚ್ಚಾಗಲು ಕಾರಣಗಳನ್ನು ಕಂಡುಕೊಳ್ಳಲು ಬೆಂಗಳೂರಿನಿAದ ತಜ್ಞರ ಸಮಿತಿಯನ್ನು ಕಳುಹಿಸಲಾಗುವುದು. ಜಿಲ್ಲೆಯಲ್ಲಿ ಆಸ್ಪತ್ರೆಗೆ ದಾಖಲಾದ 72 ಗಂಟೆಯೊಳಗೆ ಸಾವಿಗೀಡಾದ ಕೊರೊನಾ ಸೋಂಕಿತರ ಪ್ರಮಾಣ ಹೆಚ್ಚಾಗಿದ್ದು, ಈ ಕುರಿತು ಸಮಿತಿ ಪರಿಶೀಲನೆ ನಡೆಸಿ ವರದಿಯನ್ನು ನೀಡಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ಸಭೆಯಲ್ಲಿ ತಿಳಿಸಿದರು.

ಕೊರೊನಾ ಕೇಂದ್ರದಲ್ಲೇ ಚಿಕಿತ್ಸೆ

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಾಥಮಿಕ ಸಂಪರ್ಕ ಹೊಂದಿರುವವರ ಕೋವಿಡ್ ಪರೀಕ್ಷೆ ಪ್ರಮಾಣವನ್ನು ಹೆಚ್ಚಿಸಬೇಕು. ಯಾವುದೇ ಕಾರಣಕ್ಕೂ ಹೋಂ ಐಸೋಲೇಷನ್‌ಗೆ ಅವಕಾಶ ನೀಡದೆ ಕೋವಿಡ್ ಕೇರ್ ಕೇಂದ್ರಗಳಲ್ಲಿಯೇ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ಒದಗಿಸಬೇಕು. ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ಹಾಸಿಗೆಗಳ ಸಂಖ್ಯೆಯನ್ನು ಹೆಚ್ಚಿಸಲಾಗಿದ್ದು, ಇದಕ್ಕೆ ಅನುಗುಣವಾಗಿ ವೈದ್ಯರು ಸೇರಿದಂತೆ ಇನ್ನಿತರ ಮೂಲ ಸೌಲಭ್ಯಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಶಿವಮೊಗ್ಗ ವೈದ್ಯಕೀಯ ಕಾಲೇಜಿನಲ್ಲಿ ವೈದ್ಯರು, ಶುಶ್ರೂಷಕಿಯರು ಹಾಗೂ ಡಿ ಗ್ರೂಪ್ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸುವ ಅನಿವಾರ್ಯತೆಯಿದೆ. ಈ ಕುರಿತು ಆದಷ್ಟು ಬೇಗನೇ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು. ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಿರ್ವಹಣೆ ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳ ಪ್ರಗತಿ ಕುರಿತು ಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಮಾಹಿತಿ ನೀಡಿದರು. ನಗರಾಭಿವೃದ್ಧಿ ಸಚಿವ ಬಿ.ಬಸವರಾಜು, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೆಲ್ವಕುಮಾರ್ ಅವರು ಉಪಸ್ಥಿತರಿದ್ದರು.

2021ರ ಜುಲೈಗೆ ಮುನ್ನ ವಿಮಾನ ನಿಲ್ದಾಣ ಸಿದ್ಧ

ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ತಿಳಿಸಿದರು. ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಬೆಂಗಳೂರು ವಿಮಾನ ನಿಲ್ದಾಣದ ಬಳಿಕ ಶಿವಮೊಗ್ಗದಲ್ಲಿಯೇ ಅತ್ಯಂತ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಹಣಕಾಸಿನ ಅಡಚಣೆ ನಡುವೆಯೂ ಅನುದಾನ ಬಿಡುಗಡೆಗೊಳಿಸಿ ತ್ವರಿತಗತಿಯಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ. ರನ್ ವೇ ಕಾಮಗಾರಿ, ಸಂಪರ್ಕ ರಸ್ತೆ, ಪೆರಿಮೀಟರ್ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಂಪೌಡ್ ನಿರ್ಮಾಣ ಬಹುತೇಕ ಪೂರ್ಣಗೊಂಡಿದ್ದು, 15900 ಮೀಟರ್ ಪೈಕಿ 11500 ಮೀಟರ್ ಕಾಂಪೌಡ್ ನಿರ್ಮಾಣ ಮುಗಿದಿದೆ ಎಂದರು.

Published On: 14 June 2021, 04:43 PM English Summary: necessary action to combat corona 3rd wave: CM BSY

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.