News

ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ: ಡಿಸಿ ಮಹಾಂತೇಶ್ ಬೀಳಗಿ

22 June, 2021 8:10 PM IST By:

ಜಿಲ್ಲೆಯಲ್ಲಿ ಕೋವಿಡ್-19 ಪ್ರಕರಣಗಳು ಸತತವಾಗಿ ಏರಿಕೆಯಾಗುತ್ತಿರುವುದರಿಂದ ಜುಲೈ 5 ರ ಬೆಳಿಗ್ಗೆ 5 ಗಂಟೆಯವರೆಗೆ ಲಾಕ್‌ಡೌನ್ ಮುಂದುವರೆಯಲಿದೆ. ಈ ವೇಳೆ ಕೃಷಿ ಚಟುವಟಿಕೆಗಳಿಗೆ ಲಾಕ್‌ಡೌನ್‌ನಿಂದ ವಿನಾಯಿತಿ ನೀಡಲಾಗಿದೆ ಎಂದು ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದರು.

ಕೊರೊನಾ ನಿಯಂತ್ರಣ ಹಿನ್ನೆಲೆಯಲ್ಲಿ ಹೊರಡಿಸಲಾಗಿರುವ ನಿರ್ಬಂಧ/ಮಾರ್ಗಸೂಚಿಗಳ ಕುರಿತು ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಕೃಷಿ ಉಪಕರಣ ಬಾಡಿಗೆ ಕೇಂದ್ರಗಳು, ಯಂತ್ರೋಪಕರಣಗಳಿಗೆ ಸಂಬಂಸಿದ ಅಂಗಡಿಗಳು ಮತ್ತು ಗೋದಾಮುಗಳು ಸೇರಿದಂತೆ ಕೃಷಿ ಮತ್ತು ಕೃಷಿಗೆ ಸಂಬಂಧಿಸಿದ ಎಲ್ಲಾ ಚಟುವಟಿಕೆಗಳಿಗೆ ಅನುಮತಿ ನೀಡಲಾಗಿದೆ. ಕೃಷಿ ಕೈಗಾರಿಕೆ, ಉದ್ದಿಮೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ, ಕೈಗಾರಿಕಾ ಸಂಸ್ಥೆಗಳು ತಮಗೆ ನೀಡಿರುವ ಗುರುತಿನ ಚೀಟಿ, ಅಧಿಕೃತ ಪತ್ರ ತೋರಿಸಿ ಓಡಾಡಲು ಅವಕಾಶವಿದೆ ಎಂದು ಹೇಳಿದರು.

ಕೃಷಿ ಚಟುವಟಿಕೆ ಕೈಗೊಳ್ಳಲು ಅಗತ್ಯವಿರುವ ವಸ್ತುಗಳಾದ ಬೀಜ, ಗೊಬ್ಬರ, ಕೀಟನಾಶಕಗಳು, ಬೆಳೆ ಕೋಯ್ಲು ಯಂತ್ರೋಪಕರಣಗಳ ಸಾಗಣೆ ಮತ್ತು ಸಂಬಂಧಿಸಿದ ಅಂಗಡಿಗಳನ್ನು ಸೋಮವಾರದಿಂದ ಶುಕ್ರವಾರದವರೆಗೆ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ತೆರೆದು ವ್ಯಾಪಾರ, ವಹಿವಾಟು ನಡೆಸಲು ಅನುಮತಿ ಇದೆ. ಜೊತೆಗೆ, ಅನಾರೋಗ್ಯದಂತಹ ತುರ್ತು ಕೆಲಸಗಳನ್ನು ಹೊರತುಪಡಿಸಿ ಅನಗತ್ಯವಾಗಿ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ. ಈಗಾಗಲೇ ನಿಗದಿಯಾಗಿರುವ ಮದುವೆ ಕಾರ್ಯಕ್ರಮ ನಡೆಸುವವರು ಸಂಬಂಧಿಸಿದ ಪ್ರಾಧಿಕಾರದಿಂದ ಅನುಮತಿ ಪಡೆದಿರಬೇಕು. ಅತಿಥಿಗಳ ಸಂಖ್ಯೆ 40 ಮೀರಬಾರದು ಮತ್ತು ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡುವಂತಿಲ್ಲ ಎಂದರು.

ಕಟ್ಟಡ ಕಾಮಗಾರಿ, ದುರಸ್ತಿಗೆ ಸಂಬಂಧಿಸಿದ ವಸ್ತುಗಳನ್ನು ಪೂರೈಸುವ ಎಲ್ಲಾ ಅಂಗಡಿಗಳು (ಸಿಮೆಂಟ್, ಕಬ್ಬಿಣ, ಪೇಂಟ್ಸ್,  ಹಾರ್ಡವೇರ್, ಗ್ಲಾಸ್, ಪ್ಲೆ-ವುಡ್, ಸಾಮಿಲ್ಸ್, ಎಲೆಕ್ಟ್ರೀಕಲ್ಸ್, ಪೈಪ್ಸ್, ಟೈಲ್ಸ್, ಮಾರ್ಬಲ್ಸ್, ಸ್ಯಾನಿಟರಿ ವೇರ್), ಕನ್ನಡಕದ ಅಂಗಡಿಗಳು, ಪಡಿತರ ನ್ಯಾಯಬೆಲೆ ಅಂಗಡಿಗಳು ಕೋವಿಡ್-19 ನಿರ್ವಹಣೆಯ ಸಂಬಂಧ ಹೊರಡಿಸಲಾದ ರಾಷ್ಟಿಯ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೆ ಒಳಪಟ್ಟು ಸೋಮವಾರದಿಂದ ಶುಕ್ರವಾರದವರೆಗೆ ಪ್ರತಿದಿನ ಬೆಳಗ್ಗೆ 6 ಗಂಟೆಯಿAದ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅವಕಾಶ ನೀಡಲಾಗಿದೆ. ಔಷಧ ಅಂಗಡಿಗಳು ಹಾಗೂ ಅಗತ್ಯ ಸೇವೆಗಳಾದ ಆಂಬ್ಯುಲೆನ್ಸ್, ಅಗ್ನಿಶಾಮಕ ಮತ್ತು ಇತರೆ ತುರ್ತು ವೈದ್ಯಕೀಯ ಸೇವೆಗಳು, ವಿದ್ಯುತ್, ಪೆಟ್ರೋಲ್ ಪಂಪ್, ಅಮ್ಲಜನಕ ಉತ್ಪದಾನ ಘಟಕ, ನೀರು, ನೈರ್ಮಲ್ಯ ಸೇವೆಗಳಿಗೂ ಅನುಮತಿ ಇದೆ ಎಂದರು.

ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದ ಹಾಪ್-ಕಾಮ್ಸ್ ಮೂಲಕ ಮಾತ್ರ ಸಾರ್ವಜನಿಕರಿಗೆ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ಸಾರ್ವಜನಿಕರ ಮನೆ ಬಾಗಿಲಿಗೆ ಮಾರಾಟ ಮಾಡಲು ಅವಕಾಶವಿದೆ. ಹಾಪ್-ಕಾಮ್ಸ್ ಲಭ್ಯವಿಲ್ಲದಿರುವ ಪ್ರದೇಶಗಳಲ್ಲಿ ಆಯುಕ್ತರು, ಮಹಾನಗರಪಾಲಿಕೆ ಮತ್ತು ಸಂಬಂಧಪಟ್ಟ ತಹಶೀಲ್ದಾರರು ಸ್ಥಳೀಯವಾಗಿ ಸೀಮಿತ ಸಂಖ್ಯೆಯಲ್ಲಿ ತಳ್ಳುವ ಗಾಡಿಯ ಮೂಲಕ ಮನೆ ಬಾಗಿಲಿಗೆ ತರಕಾರಿಗಳನ್ನು ಹಾಗೂ ಹಣ್ಣುಗಳನ್ನು ಮಾರಾಟ ವ್ಯವಸ್ಥೆ ಮಾಡಬೇಕು.

ಅಡುಗೆ ಅನಿಲ ವಿತರಕರು ಸಿಲಿಂಡರ್‌ಗಳನ್ನು ಮನೆ ಬಾಗಿಲಿಗೆ ತಲುಪಿಸುವ ಷರತ್ತಿಗೆ ಒಳಪಟ್ಟು ಕಾರ್ಯನಿರ್ವಹಣೆ ಮಾಡಬಹುದು. ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ಸಗಟು ಮಾರಾಟಗಾರರು ತರಕಾರಿ ಹಾಗೂ ಹಣ್ಣುಗಳನ್ನು ಖರೀದಿಸಲು ಹಾಗೂ ಬೇರೆಡೆ ಸಾಗಿಸಲು ಯಾವುದೇ ನಿರ್ಬಂಧನವಿರುವುದಿಲ್ಲ. ಇ-ಕಾಮರ್ಸ್, ಹೋಮ್ ಡೆಲಿವರಿ ಸೇವೆಗಳ ಮುಖಾಂತರ ಎಲ್ಲಾ ವಸ್ತುಗಳನ್ನು ಮನೆಗೆ ಸರಬರಾಜು ಮಾಡಲು ಅನುಮತಿ ನೀಡಲಾಗಿದೆ ಎಂದುಉ ಡಿ.ಸಿ ತಿಳಿಸಿದರು.