1. ಸುದ್ದಿಗಳು

ಅತಿವೃಷ್ಟಿ ಅನಾಹುತ ಎದುರಿಸಲು ಮುಂಜಾಗ್ರತಾ ಕ್ರಮ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಉತ್ತಮ ಮಳೆಯಾಗುತ್ತಿದ್ದು, ಅತಿವೃಷ್ಟಿಯಿಂದ ಉಂಟಾಗಬಹುದಾದ ಅನಾಹುತಗಳನ್ನು ಎದುರಿಸಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದರು.

ಮುಂಗಾರು ಮಳೆ ಹಿನ್ನೆಲೆಯಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಜೊತೆಗಿನ ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗವಹಿಸಿದ್ದ ಜಿಲ್ಲಾಧಿಕಾರಿ, ಜಿಲ್ಲೆಯಲ್ಲಿ ಅತಿವೃಷ್ಟಿ ಸಂಭವಿಸಿದರೆ ಅದನ್ನು ಎದುರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಕಳೆದ 18 ದಿನಗಳಲ್ಲಿ ಸರಾಸರಿಗಿಂತ ಶೇ.20ರಷ್ಟು ಹೆಚ್ಚಿನ ಪ್ರಮಾಣದ ಮಳೆಯಾಗಿದೆ. ಭದ್ರಾ ಮತ್ತು ಲಿಂಗನಮಕ್ಕಿ ಜಲಾಶಯಗಳಿಗೆ ಕಳೆದ ಒಂದು ವಾರದಿಂದ ಸಾಕಷ್ಟು ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ತುಂಗಾಭದ್ರಾ ಜಲಾಶಯ ಬಹುತೇಕ ತುಂಬಿದೆ. ಎಲ್ಲಾ ಜಲಾಶಯಗಳ ನೀರಿನ ಮಟ್ಟದ ಬಗ್ಗೆ ನಿರಂತರ ನಿಗಾ ವಹಿಸಲಾಗಿದೆ. 67 ಗ್ರಾಮ ಪಂಚಾಯಿತಿಗಳ ವ್ಯಪ್ತಿಯಲ್ಲಿ ಬರುವ 163 ಗ್ರಾಮಗಳು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 74 ಪ್ರದೇಶಗಳು ಹಾಗೂ 18 ಮುಖ್ಯ ರಸ್ತೆಗಳನ್ನು ಅತಿವೃಷ್ಟಿಯಿಂದ ತೊಂದರೆ ಉಂಟಾಗಬಹುದಾದ ಸ್ಥಳಗಳೆಂದು ಗುರುತಿಸಿ, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ತಾಲೂಕು ಮಟ್ಟದಲ್ಲಿ ನಿಯಂತ್ರಣ ಕೊಠಡಿ (ಕಂಟ್ರೋಲ್ ರೂಮ್) ಆರಂಭಿಸಲಾಗಿದೆ ಎಂದು ಹೇಳಿದರು.

ಬೀಜ, ಗೊಬ್ಬರದ ಕೊರತೆಯಿಲ್ಲ

ಮುಂಗಾರು ಉತ್ತಮವಾಗಿರುವ ಹಿನ್ನೆಲೆಯಲ್ಲಿ ರೈತರು ಬಿತ್ತನೆ, ನಾಟಿ ಕಾರ್ಯಗಳಲ್ಲಿ ತೊಡಗಿಕೊಳ್ಳುತ್ತಿದ್ದು, ಜಿಲ್ಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಕೊರತೆ ಇರುವುದಿಲ್ಲ. 26,459 ಕ್ವಿಂಟಾಲ್ ಬಿತ್ತನೆ ಬೀಜದ ಬೇಡಿಕೆ ಇದ್ದು, ಜಿಲ್ಲೆಯಲ್ಲಿ 30,242 ಕ್ವಿಂಟಾಲ್ ದಾಸ್ತಾನಿದೆ. ಎಲ್ಲಾ ಕಡೆ ಕೃಷಿ ಚಟುವಟಿಕೆ ಆರಂಭವಾಗಿದ್ದು, ಈಗಾಗಲೇ 3341 ಕ್ವಿಂಟಾಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ರಸಗೊಬ್ಬರವನ್ನು ಬೇಡಿಕೆಗೆ ಅನುಸಾರವಾಗಿ ಹಂತ ಹಂತವಾಗಿ ದಾಸ್ತಾನು ಮಾಡಲಾಗುತ್ತಿದೆ. ಜೂನ್ ಅಂತ್ಯದವರೆಗೆ 52 ಸಾವಿರ ಮೆಟ್ರಿಕ್ ಟನ್ ವಿವಿಧ ರಸಗೊಬ್ಬರಗಳ ಬೇಡಿಕೆ ಇದ್ದು, 1.07 ಮೆಟ್ರಿಕ್ ಟನ್ ದಾಸ್ತಾನಿದೆ. ಪ್ರಸಕ್ತ ಸಾಲಿನಲ್ಲಿ ಮಳೆಯಿಂದ 3 ಮಾನವ ಜೀವ ಹಾನಿ ಸಂಭವಿಸಿದ್ದು, 15 ಲಕ್ಷ ರೂ. ಪರಿಹಾರ ನೀಡಲಾಗಿದೆ. 2 ಜಾನುವಾರುಗಳು ಮೃತಪಟ್ಟಿದ್ದು 60 ಸಾವಿರ ರೂ. ನೀಡಲಾಗಿದೆ. 4 ಮನೆಗಳು ಶೇ.75ರಷ್ಟು ಹಾಗೂ 69 ಮನೆಗಳು ಭಾಗಶಃ ಹಾನಿಗೀಡಾಗಿದ್ದು, ಮಾರ್ಗಸೂಚಿ ಪ್ರಕಾರ ಪರಿಹಾರ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರಾಣ ಹಾನಿ ಆಗದಂತೆ ಎಚ್ಚರಿಕೆ

ಅತಿವೃಷ್ಟಿಯಿಂದ ಮಾನವ ಜೀವ ಹಾನಿ ಹಾಗೂ ಜಾನುವಾರುಗಳಿಗೆ ಹಾನಿಯಾಗದಂತೆ ಗರಿಷ್ಠ ಮುನ್ನೆಚ್ಚರಿಕೆ ವಹಿಸಬೇಕು. ಜಾನುವಾರುಗಳಿಗೆ ಸಾಕಷ್ಟು ಮೇವು ಲಭ್ಯವಾಗುವಂತೆ ನೋಡಿಕೊಳ್ಳಬೇಕು. ಅಗತ್ಯವಿರುವ ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲು ವ್ಯವಸ್ಥೆ ಮಾಡಬೇಕು. ಅತಿವೃಷ್ಟಿ ಪರಿಹಾರ ಕಾಮಗಾರಿಗಳಿಗೆ ಅನುದಾನದ ಕೊರತೆ ಆಗದಂತೆ ನೋಡಿಕೊಳ್ಳಲಾಗಿದ್ದು, ಈಗಾಗಲೇ ಎಲ್ಲಾ ಜಿಲ್ಲಾಧಿಕಾರಿಗಳ ಖಾತೆಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ. ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು.

ಪೊಲೀಸ್ ವರಿಷ್ಟಾಧಿಕಾರಿ ಲಕ್ಷ್ಮೀ ಪ್ರಸಾದ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ವೈದ್ಯಕೀಯ ಸೌಲಭ್ಯ ಒದಗಿಸಿ: ಸಿಎಂ

ಜಿಲ್ಲಾ ಮಟ್ಟದಲ್ಲಿ ಪ್ರವಾಹ ಪೀಡಿತ ಗ್ರಾಮಗಳನ್ನು ಗುರುತಿಸಿ, ಪ್ರವಾಹ ಪರಿಸ್ಥಿತಿ ಎದುರಿಸಲು ಸೂಕ್ತ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಜನ, ಜಾನುವಾರುಗಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವ ಜೊತೆಗೆ ಸಾಂಕ್ರಾಮಿಕ ಕೊರೊನಾ ಸೋಂಕು ಸಮುದಾಯಗಳಲ್ಲಿ ಹರಡದ ರೀತಿಯಲ್ಲಿ ಎಚ್ಚರಿಕೆ ಸಹ ವಹಿಸಬೇಕಿದೆ. ಜಿಲ್ಲೆ ಮತ್ತು ತಾಲೂಕು ಮಟ್ಟಗಳಲ್ಲಿ ಸಹಾಯವಾಣಿ ಸ್ಥಾಪನೆ, ದೂರವಾಣಿ ಮತ್ತಿತರ ಸಂಪರ್ಕ ಸಾಧನಗಳನ್ನು ಸುಸ್ಥಿತಿಯಲ್ಲಿ ಇರಿಸಿಕೊಳ್ಳಬೇಕು ಹಾಗೂ ತುರ್ತು ನಿರ್ವಹಣೆಗೆ ಬೇಕಾದ ಸಾಮಗ್ರಿಗಳನ್ನು ಅಗತ್ಯಕ್ಕೆ ಅನುಗುಣವಾಗಿ ಖರೀದಿಸಲು ಕ್ರಮ ಕೈಗೊಳ್ಳಬೇಕು. ಪ್ರವಾಹ ಸಂದರ್ಭದಲ್ಲಿ ಜನರ ರಕ್ಷಣೆ, ಅವರಿಗೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒಳಗೊಂಡ ಕಾಳಜಿ ಕೇಂದ್ರಗಳು, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲು ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವುದು ಅತಿ ಅಗತ್ಯ ಎಂದು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.

ಪ್ರವಾಹದ ಸಂದರ್ಭ ಒದಗಿ ಬಂದರೆ ಪ್ರವಾಹ ನಿರ್ವಹಣೆಗೆ ಸ್ಥಳೀಯ ಸಂಪನ್ಮೂಲಗಳ ಸದ್ಬಳಕೆ ಹಾಗೂ ಸ್ಥಳೀಯ ಸಂಘ-ಸAಸ್ಥೆಗಳು, ಸ್ವಯಂ ಸೇವಕರ ಸಹಕಾರವನ್ನು ಪಡೆಯಬೇಕು. ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಪ್ರವಾಹದ ಪರಿಣಾಮ ಅತ್ಯಂತ ಕಡಿಮೆಯಾಗುವಂತೆ ಕಾರ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿಗಳು, ಪ್ರವಾಹದ ಹಿನ್ನೆಲೆಯಲ್ಲಿ ಸ್ಥಳಾಂತರಿಸಿದ ಕೆಲವು ಗ್ರಾಮಗಳಿಗೆ ಗ್ರಾಮಸ್ಥರು ತೆರಳಲು ಹಿಂದೇಟು ಹಾಕುತ್ತಿದ್ದಾರೆ. ಈ ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರ ಗ್ರಾಮಗಳಿಗೆ ಮೂಲ ಸೌಕರ್ಯ ಒದಗಿಸಿ, ಸ್ಥಳಾಂತರಿಸಲು ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದರು.

Published On: 24 June 2021, 09:04 PM English Summary: precautionary measures to deal with heavy rain effects

Share your comments

Latest feeds

More News
Krishi Jagran Kannada Magazine Subscription Online Subscription

CopyRight - 2024 Krishi Jagran Media Group. All Rights Reserved.