News

ಇಂದಿನಿಂದ ಎರಡು ದಿನ ರಾಜ್ಯದ ವಿವಿಧೆಡೆ ಸಾಧಾರಣ ಮಳೆ

25 August, 2020 9:10 AM IST By:

ಕಳೆದ ಒಂದು ತಿಂಗಳಿಂದ ನಿರಂತರವಾಗಿ ಸುರಿದ ಮಳೆ ಕೊನೆಗೂ ಬಿಡುವು ನೀಡಿದೆ. ರಾಜ್ಯದ ವಿವಿಧೆಡೆ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ. ಮಳೆ ಬಿಡುವು ನೀಡಿದ್ದರಿಂದ ರೈತರು ನಿಟ್ಟುಸಿರು ಬಿಟ್ಟಿದ್ದಾರೆ. ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾರೆ.

ರಾಜ್ಯದ ಒಳನಾಡು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಆ.25 ಮತ್ತು 26ರಂದು ಎರಡು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಳಗಾವಿ, ಬಾಗಲಕೋಟೆ, ಧಾರವಾಡ,ಯಾದಗಿರಿ ಸೇರಿದಂತೆ ಉತ್ತರ ಒಳನಾಡು ಹಾಗೂ ಹಾಸನ, ಚಿಕ್ಕಮಗಳೂರು, ಕೊಡಗು, ಬೆಂಗಳೂರು, ಶಿವಮೊಗ್ಗ ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಮೋಡ ಕವಿದ ವಾತಾವರಣ ಮುಂದುವರೆಯಲಿದೆ.

ಉತ್ತರ ಭಾರತದಲ್ಲಿ ಮಳೆ ಆತಂಕ

ಬಂಗಾಳ ಕೊಲ್ಲಿಯ ಉತ್ತರ ಭಾಗ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಾಯುಭಾರ ಕುಸಿತ ಉಂಟಾಗಿದ್ದರಿಂದ ಮಧ್ಯಪ್ರದೇಶ, ರಾಜಸ್ಥಾನ, ಛತ್ತಿಸಗಡ, ಪಶ್ಚಿಮಬಂಗಾಳ, ಓಡಿಸ್ಸಾ ಸೇರಿದಂತೆ ಹಲವು ರಾಜ್ಯಗಳಲ್ಲಿ ಆಗಸ್ಟ್ 26 ರಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಹೀಗಾಗಿ ಹಲವೆಡೆ ರೆಡ್ ಅಲರ್ಟ್ ಘೋಷಿಸಲಾಗಿದೆ.