ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮದ ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ, ಮಲೆ ನಾಡು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
.ಶಿವಮೊಗ್ಗ, ಕೊಡಗು, ರಾಮನಗರ, ಮೈಸೂರು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಬುಧವಾರ ಆರಂಭಗೊಂಡು ಮೂರು ದಿನ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಆಗಸ್ಟ್ 20ರವರೆಗೂ ಮಳೆ ಮಳೆ ಹೆಚ್ಚಾಗಲಿದೆ ಎಂದು ತಿಳಿಸಿದೆ.
ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜನರು ಅಕ್ಷರಶಃ ತತ್ತರಿಸಿ ಹೋಗಿದ್ದರು. ಆದರೆ ನಂತರ ಮಳೆ ಮಾಯವಾಗಿತ್ತು. ಈಗ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ರಾಜ್ಯ ಮಾತ್ರವಲ್ಲದೆ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಧ್ಯಪ್ರದೇಶ ರಾಜ್ಯಗಳಲ್ಲೂ ಇನ್ನೆರಡು ದಿನ ವ್ಯಾಪಕ ಮಳೆಯಾಗಲಿದೆ.
ಮಣಿಪುರ, ತ್ರಿಪುರ, ಮಿಜೋರಾಂ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಜಾರ್ಖಂಡ್, ಬಿಹಾರ, ಒರಿಸ್ಸಾ, ಆಂಧ್ರಪ್ರದೇಶ, ಉತ್ತರಾಖಂಡ, ಸಿಕ್ಕಿಂ, ಗೋವಾ, ಮಹಾರಾಷ್ಟ್ರ, ಕೇರಳದಲ್ಲಿ ಗಾಳಿ ಸಹಿತ ಮಳೆಯಾಗಲಿದೆ. ಇಂದು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆ ಮುಂದುವರೆಯಲಿದೆ.
ಬೀದರ್, ಬಾಗಲಕೋಟೆ, ಧಾರವಾಡ, ಹಾವೇರಿ, ಗದಗ, ವಿಜಯನಗರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಮಂಗಳವಾರ ಕಲಬುರಗಿ, ಯಾದಗಿರಿ, ಬೀದರ್ ಜಿಲ್ಲೆಯಲ್ಲಿ ಅಲ್ಲಲ್ಲಿ ಚದುರಿದ ಮಳೆಯಾಗಿದೆ. ಬುಧವಾರವೂ ಸಹ ಕಲಬುರಗಿಯಲ್ಲಿ ಅಲ್ಪ ಮಳೆಯಾಗಿದೆ. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು.
ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗಿದೆ ಇಂದು ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಮಲೆನಾಡು ಭಾಗದ ಜಿಲ್ಲೆಗಳಲ್ಲೂ ಇಂದು ಮಳೆ ಸುರಿಯಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಯಲ್ಲಿ ಮಳೆ ತೀವ್ರತೆ ಹೆಚ್ಚಾಗಲಿದೆ. ಕರಾವಳಿಯಲ್ಲಿ ಮಳೆಯ ಆರ್ಭಟ ಹೆಚ್ಚಾಗುವ ಸೂಚನೆಯಿದ್ದು, ಮೀನುಗಾರಿಕೆಗೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ಕರ್ನಾಟಕದೊಂದಿಗೆ, ತಮಿಳುನಾಡು, ಕೇರಳದಲ್ಲಿಯೂ ಅಧಿಕ ಮಳೆಯಾಗುವುದಾಗಿ ಇಲಾಖೆ ಮಾಹಿತಿ ನೀಡಿದೆ. ಮಹಾರಾಷ್ಟ್ರ, ತೆಲಂಗಾಣ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಧ್ಯಪ್ರದೇಶ, ಮಣಿಪುರ, ತ್ರಿಪುರ, ಮಿಜೋರಾಂ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶದಲ್ಲಿ ಮುಂದಿನ ಎರಡು ದಿನಗಳ ಅವಧಿ ಮಳೆಯಾಗುವ ಸಾಧ್ಯತೆಯಿದೆ.
ಜುಲೈ ತಿಂಗಳ ಅಂತ್ಯದಲ್ಲಿ ಸುರಿದ ಭಾರೀ ಮಳೆಯಿಂದ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿತ್ತು. ಆ ಮಳೆಯಿಂದ ಕರ್ನಾಟಕದ 13 ಜಿಲ್ಲೆಗಳಲ್ಲಿ 2.3 ಲಕ್ಷ ಹೆಕ್ಟೇರ್ ಬೆಳೆ ಹಾನಿ ಉಂಟಾಗಿದೆ.