News

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ಗೆ ಮಳೆ ಸಾಧ್ಯತೆ-ಯೆಲ್ಲೋ ಅಲರ್ಟ್ ಘೋಷಣೆ

22 May, 2021 9:23 AM IST By:
rain alert

ರಾಜ್ಯದ ಕರಾವಳಿ ಸೇರಿ ವಿವಿಧ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಮೇ 22 ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು ಸೇರಿದಂತೆ 13 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ವೈಪರೀತ್ಯದಿಂದಾಗಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮೇ 25ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರಕನ್ನಡ, ದಕ್ಷಿಣಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉಡುಪಿ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಹಾಸನ, ಮೈಸೂರು, ಕೋಲಾರ ಹಾಗೂ ರಾಮನಗರ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದ್ದು ಮೇ 22ರಂದು ಈ ಎಲ್ಲಾ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮೇ 26 ರವರೆಗೆ ಗುಡುಗು, ಸಿಡಿಲು ಸಹಿತ ಮಳೆಯಾಗಬಹುದು. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಲಯಲಿದೆ. ಕೆಲವು ಕಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಯಾವ ಜಿಲ್ಲೆಗಳಿಗೆ ಮಳೆಯ ಯೆಲ್ಲೋ ಅಲರ್ಟ್

 ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಶುಕ್ರವಾರ ರಾಜ್ಯ ವಿವಿಧೆಡೆ ಮಳೆ

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶುಕ್ರವಾರ ಧಾರಾಕಾರ ಮಳೆಯಾಗಿದೆ. ಬೆಳಗಾವಿ, ಬಳ್ಳಾರಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಹುಬ್ಬಳ್ಳಿ, ಗದಗ, ಬಾಗಲಕೋಟೆ ಹಾಗೂ ಹೊಸಪೇಟೆಯಲ್ಲಿ ಧಾರಾಕಾರ ಮಳೆಯಾಗಿದೆ.  ಕಲಬುರಗಿ, ಬೀದರ್, ಯಾದಗಿರಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿತ್ತು. ಅಲ್ಲಲ್ಲಿ ತುಂತುರು ಮಳೆಯಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ ಜಿಲ್ಲೆಗಳ ಹಲವೆಡೆ ಶುಕ್ರವಾರ ಸಾಧಾರಣ ಮಳೆಯಾಗಿದೆ.

ತೌಕ್ತೆ ಚಂಡಮಾರುತದ ನಂತರ ಕರ್ನಾಟಕದ ಹಲವು ಭಾಗಗಳಲ್ಲಿ ಪ್ರತಿನಿತ್ಯ ಒಂದಲ್ಲಾ ಒಂದು ಹೊತ್ತಿನಲ್ಲಿ ಮಳೆ ಸುರಿಯುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾಜ್ಯವ್ಯಾಪಿ ಮಳೆ ಪ್ರಮಾಣ ಕಡಿಮೆ ಆಗಿದೆಯಾದರೂ ಮಲೆನಾಡು, ಕರಾವಳಿ ಭಾಗದಲ್ಲಿ ಮೋಡ ಕವಿದ ವಾತಾವರಣ ಹಾಗೂ ತಂಪು ಹವೆಯ ಪರಿಣಾಮ ಮಳೆಗಾಲದ ವಾತಾವರಣದಂತೆಯೇ ಪರಿಸರ ಕಾಣಿಸುತ್ತಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಭಾರೀ ಮಳೆ ಸುರಿಯುವ ನಿರೀಕ್ಷೆಯಿದ್ದು, ಅರುಣಾಚಲ ಪ್ರದೇಶ ಭಾಗದಲ್ಲೂ ಸಾಧಾರಣದಿಂದ ಉತ್ತಮ ಮಳೆ ಸುರಿಯಲಿದೆ.