ರಾಜ್ಯದ ಇತ್ತೀಚೆಗೆ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ದಿಢೀರ್ ಹೆಚ್ಚಳ ಕಂಡುಬಂದಿದ್ದು, ಎರಡನೇ ಅಲೆಯ ಭೀತಿ ಎದುರಾಗಿದೆ. ಮಹಾರಾಷ್ಟ್ರ ಮತ್ತು ಕೇರಳದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದರಿಂದ ರಾಜ್ಯದಲ್ಲಿಯೂ ಆತಂಕ ಹೆಚ್ಚಾಗಿದೆ.
ಈಗಾಗಲೇ ಮಹಾರಾಷ್ಟ್ರದಿಂದ ಬರುವ ಸಾರಿಗೆ ಸಂಸ್ಥೆ ಬಸ್ ಗಳ ಸಂಚಾರಕ್ಕೆ ತಡೆಹಿಡಿಯಲಾಗಿದ್ದರೂ ಅನ್ಯ ಮಾರ್ಗದ ಮೂಲಕ ಕರ್ನಾಟಕದ ಗಡಿ ಪ್ರದೇಶದಲ್ಲಿ ಪ್ರವೇಶ ಮಾಡಲಾಗುತ್ತಿದೆ. ಇದರಿಂದಾಗಿ ಇನ್ನೂ ಆತಂಕ ಹೆಚ್ಚಾಗಿದೆ.
ಹರಡುವಿಕೆಯ ವೇಗಕ್ಕೆ ಕಡಿವಾಣ ಹಾಕಲು ಪರೀಕ್ಷಾ ಪ್ರಮಾಣ ಹೆಚ್ಚಳ, ಸಭೆ, ಸಮಾರಂಭಗಳಿಗೆ ಜನಸಂಖ್ಯೆ ಮಿತಿ ಪರಿಷ್ಕರಣೆ ಸೇರಿದಂತೆ ಆರೋಗ್ಯ ಇಲಾಖೆ ಶುಕ್ರವಾರ ಹೊಸ ಮಾರ್ಗಸೂಚಿ ಹೊರಡಿಸಿದೆ.
ರಾಜ್ಯದ ಎಲ್ಲಾ ಗಡಿಪ್ರದೇಶಗಳಲ್ಲಿ ಕಟ್ಟೆಚ್ಚರವಹಿಸಲಾಗಿದೆ. ಅಂತರ ರಾಜ್ಯ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವ ಜಿಲ್ಲೆಗಳು, ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ ಕಂಡುಬಂದಿರುವ ಪ್ರದೇಶಗಳು ಹಾಗೂ ಸಂಪರ್ಕಿತರಲ್ಲಿ ಸೋಂಕು ಹೆಚ್ಚಿನ ಪ್ರಮಾಣ ದಲ್ಲಿ ಕಂಡುಬಂದಿರುವ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಎಲ್ಲ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಲಾಗಿದೆ.
ಬೆಂಗಳೂರು ನಗರ, ಮೈಸೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ದಿನ ಕಳೆದಂತೆ ಗಣನೀಯವಾಗಿ ಏರುತ್ತಿದೆ. ಗುರುವಾರ ಸಭೆ ನಡೆಸಿದ್ದ ರಾಜ್ಯಮಟ್ಟದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಈ ಕುರಿತು ಪರಿಶೀಲನೆ ನಡೆಸಿ, ಎರಡನೇ ಅಲೆಯ ಅಪಾಯ ತಡೆಯಲು ಕೆಲವು ಶಿಫಾರಸು ಗಳನ್ನು ಮಾಡಿತ್ತು. ಅದರಂತೆ ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಪರಿಷ್ಕರಿಸಿ ಸುತ್ತೋಲೆ ಹೊರಡಿಸಲಾಗಿದೆ.
ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಕೊರೊನಾ ಸೋಂಕು ಗಣನೀಯವಾಗಿ ಹೆಚ್ಚುತ್ತಿದ್ದು ಅದರಲ್ಲೂ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ರಾಜ್ಯದಲ್ಲಿ ಮತ್ತೊಮ್ಮೆ ಲಾಕ್ ಡೌನ್ ಜಾರಿಮಾಡುವ ಸಾಧ್ಯತೆ ಹೆಚ್ಚಾಗಿದೆ.
ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಈಗಾಗಲೇ ತಡರಾತ್ರಿಯ ಪಾರ್ಟಿಗಳಿಗೆ ಸರ್ಕಾರ ಕಡಿವಾಣ ಹಾಕಿದೆ. ಮದುವೆ ಸೇರಿದಂತೆ, ಹೆಚ್ಚು ಜನ ಸೇರುವ ಸಭೆ – ಸಮಾರಂಭಗಳ ಮೇಲೆ ಹದ್ದಿನ ಕಣ್ಣಿಟ್ಟು ಅಂತಹ ಪ್ರದೇಶಗಳಲ್ಲಿ ಬಿಬಿಎಂಪಿ ಮಾರ್ಷಲ್‌ಗಳನ್ನು ನಿಯೋಜನೆ ಮಾಡಲಾಗಿದೆ.
ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಸಾರ್ವಜನಿಕರು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಜೊತೆಗೆ, ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಕೋವಿಡ್ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಸೂಚನೆ ನೀಡಿದೆ.
ಮಹಾರಾಷ್ಟ್ರದ ನಾಗಪುರ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 15 ರಿಂದ 21ರ ತನಕ ಜಿಲ್ಲೆಯಲ್ಲಿ ಲಾಕ್ ಡೌನ್ ಮಾಡಲು ನಿರ್ಧಾರ ಮಾಡಲಾಗಿದೆ.
ಲಾಕ್ ಡೌನ್ ಅವಧಿಯಲ್ಲಿ ಖಾಸಗಿ ಕಚೇರಿಗಳು ಸಂಪೂರ್ಣವಾಗಿ ಮುಚ್ಚಿರಲಿದ್ದು, ಸರ್ಕಾರಿ ಕಚೇರಿಗಳು ಶೇ. 25 ರಷ್ಟು ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲಿವೆ. ಅಗತ್ಯ ವಸ್ತುಗಳ ಅಂಗಡಿ, ಮಳಿಗೆಗಳನ್ನು ಹೊರತುಪಡಿಸಿ, ಸಂಪೂರ್ಣವಾಗಿ ಉಳಿದೆಲ್ಲವುಗಳನ್ನು ಬಂದ್ ಮಾಡಲು ನಿರ್ಧರಿಸಿದೆ.