ರಾಜ್ಯದ ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗು ಉಡುಪಿ ಜಿಲ್ಲೆಗಳಲ್ಲಿ ಜುಲೈ 2 ಮತ್ತು 3ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದ ಕರಾವಳಿ ಹಾಗೂ ಪಶ್ಚಿಮ ಘಟ್ಟಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳನ್ನು ‘ಆರೆಂಜ್ ಅಲರ್ಟ್’ ಎಂದು ಘೋಷಿಸಿದೆ.
ಕರಾವಳಿಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.
ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲೂ ಭಾರಿ ಮಳೆಯಾಗುವ ,ಸಾಧ್ಯತೆಯಿರುವದರಿಂದ 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.