ಕಳೆದ ಹದಿನೈದು ದಿನಗಳಿಂದ ರಾಜ್ಯಾದ್ಯಂತ ಮುಂಗಾರು ಚುರುಕುಗೊಂಡಿದೆ. ರಾಜ್ಯಾದ್ಯಂತ ಕಳೆದ ಹದಿನೈದು ದಿನಗಳಿಂದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಜುಲೈ 1ರವರೆಗೂ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿದೆ.
ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ಒಂದೇ ಅವಧಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವುದರಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಮುಂಗಾರು ಚುರುಕಾಗಿರುವುದರಿಂದ ರಾಜ್ಯದಲ್ಲಿ ಇನ್ನೂ ಒಂದು ವಾರ ಭಾರಿ ಮಳೆಯಾಗುವ
ಸಾಧ್ಯತೆಗಳಿವೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಜೂನ್ 29ರಿಂದ ಜುಲೈ 1ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಜುಲೈ 1ರವರೆಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ. ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.
ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟ ಈಗಾಗಲೇ ಏರಿಕೆಯಾಗುತ್ತಿದೆ. ಜಲಾನಯನ ಭಾಗದಲ್ಲಿ ಮಳೆ ಸುರಿಯುತ್ತಿರುವುದರಿಂದ ಜಲಾಶಯಗಳ ಒಳಹರಿವಿನ ಪ್ರಮಾಣ ನಿಧಾನವಾಗಿ ಏರಲಿದ್ದು, ಕೃಷಿ ಚಟುವಟಿಕೆಗಳಿಗೆ ಪೂರಕ ವಾತಾವರಣವಿದೆ.