ದೇಶದ ದಕ್ಷಿಣ ಭಾರತದಲ್ಲಿ ಮುಂಗಾರು ಪ್ರವೇಶಗೊಂಡು ಬಹುತೇಕ ರಾಜ್ಯಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಈಗ ನೈರುತ್ಯ ಮುಂಗಾರು ಚುರುಕಾಗಿದ್ದು, ಗುಜರಾತ್, ಜಾರ್ಖಂಡ್, ಬಿಹಾರ, ಮಧ್ಯಪ್ರದೇಶ, ಛತ್ತೀಸ್‌ಗಢ, ಪೂರ್ವ ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ವಾಯುವ್ಯ ರಾಜಸ್ಥಾನ ಭಾಗದಲ್ಲಿ ಉಂಟಾಗಿರುವ ನಿಮ್ನ ಒತ್ತಡ ಹಾಗೂ ಪಶ್ಚಿಮ ಬಂಗಾಳ ಕಡೆಯಿಂದ ಕೊಂಕಣದ ಉತ್ತರ ಭಾಗದತ್ತ ನುಗ್ಗುತ್ತಿರುವ ಚಂಡಮಾರುತದ ಪರಿಚಲನೆಯಿಂದಾಗಿ ಮುಂದಿನ 48 ಗಂಟೆಗಳ ಅವಧಿಯಲ್ಲಿ ಮಧ್ಯಪ್ರದೇಶ ಹಾಗೂ ಉತ್ತರ ಪ್ರದೇಶ ರಾಜ್ಯಗಳ ಹಲವೆಡೆ ಉತ್ತಮ ಮಳೆಯಾಗಲಿದೆ. ಕೊಂಕಣ ಮತ್ತು ಗೋವಾ ರಾಜ್ಯಗಳ ಹಲವೆಡೆ ಚದುರಿದಂತೆ ಹಾಗೂ ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಸಿಕ್ಕಿಂ, ಒಡಿಶಾದ ಹಲವೆಡೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಅಲ್ಲದೆ, ಮುಂದಿನ 2-3 ದಿನಗಳಲ್ಲಿ ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳಗಳಲ್ಲಿ ಭಾರೀ ಮಳೆ, ಮಹಾರಾಷ್ಟ್ರ, ಛತ್ತೀಸ್‌ಗಢ, ಒಡಿಶಾÏ, ಸಿಕ್ಕಿಂಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕ, ತೆಲಂಗಾಣ, ಆಂಧ್ರಮಪ್ರದೇಶ ರಾಜ್ಯಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ. ಈ ಪ್ರದೇಶಗಳಲ್ಲಿ ಕೃಷಿ ಚಟುವಟಿಕೆಯೂ ಚುರುಕುಗೊಂಡಿದೆ. ಎಲ್ಲೆಡೆ ಬಿತ್ತನೆ ಕಾರ್ಯ ಭರ್ಜರಿಯಾಗಿ ನಡೆಯುತ್ತಿದೆ.