News

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ

09 April, 2021 9:30 AM IST By:
rain alert

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಏ. 9 ರಿಂದ 13 ರವರೆಗೆ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಗಾಳಿಯ ಒತ್ತಡ ಕಡಿಮೆ ಆಗಿರುವ ಪರಿಣಾಮ ತೇವಾಂಶ ಭರಿತ ಮೋಡಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನದಲ್ಲಿ ಏ.9ರಿಂದ ಏ.13ರವರೆಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಕಲಬುರಗಿಯಲ್ಲಿ ಏ. 9 ರಂದು ಮಳೆಯಾಗಲಿದೆ.ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರದಲ್ಲಿ ಮುಂದಿನ 4 ದಿನ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಕಲಬುರಗಿಯಲ್ಲಿ ಏ.9ರಂದು ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಈ ಬಾರಿ ದೇಶದಲ್ಲಿ ಮುಂಗಾರು ಮಳೆ ಆಶಾದಾಯಕವಾಗಿದೆಯೋ ಅಥವಾ ಇಲ್ಲವೋ ಎಂಬುದರ ಬಗ್ಗೆ ಮಾಸಾಂತ್ಯ ವೇಳೆಗೆ ಭಾರತೀಯ ಹವಾಮಾನ ಇಲಾಖೆ ವರದಿ ಬಿಡುಗಡೆ ಮಾಡಲಿದೆ.

ಜತೆಗೆ, ಮೇನಲ್ಲಿ ಬಿಡುಗಡೆ ಆಗಲಿರುವ ಮತ್ತೊಂದು ವರದಿಯಲ್ಲಿ ದೇಶದ ಮಾನ್ಸೂನ್‌ ಬಗ್ಗೆ ನಿಖರ ಮಾಹಿತಿ ಹೊರಬೀಳಲಿದೆ ಎಂದು ಹವಾಮಾನ ತಜ್ಞ ಡಾ.ಶ್ರೀನಿವಾಸರೆಡ್ಡಿ ತಿಳಿಸಿದ್ದಾರೆ.